ADVERTISEMENT

ಪೂರ್ವಭಾವಿ ಸಭೆಗೆ ಅಧಿಕಾರಿಗಳ ಗೈರು

​ಪ್ರಜಾವಾಣಿ ವಾರ್ತೆ
Published 13 ಜನವರಿ 2011, 8:50 IST
Last Updated 13 ಜನವರಿ 2011, 8:50 IST

ಚಿಂತಾಮಣಿ: ತಾಲ್ಲೂಕಿನ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯು ಜನವರಿ 26 ರಂದು ಗಣರಾಜ್ಯೋತ್ಸವ ಆಚರಿಸುವ ಸಲುವಾಗಿ ನಗರಸಭೆಯ ಸಭಾಂಗಣದಲ್ಲಿ ಬುಧವಾರ ಕರೆಯಲಾದ ಪೂರ್ವಭಾವಿ ಸಭೆಗೆ ಬಹುತೇಕ ಅಧಿಕಾರಿಗಳು ಗೈರು ಹಾಜರಾಗಿದ್ದರು.

ಬುಧವಾರ ಕರೆದಿದ್ದ ಸಭೆಗೆ ನಾಲ್ಕು ಗಂಟೆಯಾದರೂ ಮೀನುಗಾರಿಕೆ ಇಲಾಖೆ ಅಧಿಕಾರಿ, ನಿವೃತ್ತ ಕ್ಷೇತ್ರಶಿಕ್ಷಣಾಧಿಕಾರಿ, ಜಿಲ್ಲಾ ಪಂಚಾಯಿತಿಯ ಎ.ಇ.ಇ , ನಗರಸಭೆಯ ವ್ಯವಸ್ಥಾಪಕರನ್ನು ಹೊರತುಪಡಿಸಿ ಪೊಲೀಸ್ ಇಲಾಖೆ, ತಾಲ್ಲೂಕು ಪಂಚಾಯಿತಿ, ಶಿಕ್ಷಣ ಇಲಾಖೆ ಸೇರಿದಂತೆ ಅನೇಕ ಇಲಾಖೆಯ ಅಧಿಕಾರಿಗಳು ಗೈರು ಹಾಜರಾಗಿದ್ದರು.

ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು, ಗೈರು ಹಾಜರಾಗಿರುವ ಇಲಾಖೆಗಳು ಸೇರಿದಂತೆ ಎಲ್ಲ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ತಹಶೀಲ್ದಾರ್ ಕೃಷ್ಣಮೂರ್ತಿ ಮನವಿ ಮಾಡಿದರು.

ಗಣರಾಜ್ಯೋತ್ಸವ ದಿನದಂದು ಎಲ್ಲ ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಬೇಕು ಹಾಗೂ ಕಡ್ಡಾಯವಾಗಿ ರಾಷ್ಟ್ರಧ್ವಜವನ್ನು ಹಾರಿಸಬೇಕು ಎಂದು ತೀರ್ಮಾನಿಸಲಾಯಿತು.

ಮೂರು ದಿನಗಳ ಮುಂಚೆಯೇ ಎಲ್ಲ ಇಲಾಖೆಗಳಿಗೂ ನೊಟೀಸ್ ನೀಡಿದ್ದರೂ ಆಗಮಿಸದಿರುವ ಬಗ್ಗೆ ತಹಶೀಲ್ದಾರ್ ಕೃಷ್ಣಮೂರ್ತಿ ವಿಷಾದಿಸಿ ಸಭೆಯನ್ನು ಪ್ರಾರಂಭಿಸಿದರು.ನಂತರ ಸರ್ಕಲ್ ಇನ್ಸ್‌ಪೆಕ್ಟರ್ ವೆಂಕಟೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ಇತರ ಅಧಿಕಾರಿಗಳು ಆಗಮಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.