ADVERTISEMENT

‘ಭಾರತ್ ಬಂದ್‌’: ಚಿಕ್ಕಬಳ್ಳಾಪುರ ಜಿಲ್ಲೆಯ ಶಾಲೆ, ಕಾಲೇಜಿಗೆ ರಜೆ ಘೋಷಣೆ

ಕೆಎಸ್‌ಆರ್‌ಟಿಸಿ ಬಸ್‌ಗಳ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2018, 12:13 IST
Last Updated 9 ಸೆಪ್ಟೆಂಬರ್ 2018, 12:13 IST
   

ಚಿಕ್ಕಬಳ್ಳಾಪುರ: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ನೇತೃತ್ವದಲ್ಲಿ ವಿರೋಧ ಪಕ್ಷಗಳು ಕರೆ ನೀಡಿರುವ ‘ಭಾರತ್ ಬಂದ್‌’ ಕಾರಣಕ್ಕೆ ಸೋಮವಾರ (ಸೆ.10) ಜಿಲ್ಲಾಡಳಿತ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದೆ.

ಸಿಪಿಐ, ಸಿಐಟಿಯು, ಎಸ್‌ಯುಸಿಐ, ಎಐಟಿಯುಸಿ ಸೇರಿ ಎಡಪಕ್ಷ ಸಂಘಟನೆಗಳು, ಸಾರಿಗೆ ನಿಗಮಗಳ ನೌಕರರ ಒಕ್ಕೂಟಗಳು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿರುವ ಕಾರಣ ಜಿಲ್ಲೆಯಲ್ಲಿ ಬಂದ್‌ ಹೆಚ್ಚಿನ ಬೆಂಬಲ ವ್ಯಕ್ತವಾಗುವ ಸಾಧ್ಯತೆ ಇದೆ.

‘ಬಂದ್‌ಗೆ ಸರ್ಕಾರದ ಸಂಪೂರ್ಣ ಬೆಂಬಲವಿದೆ’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿರುವ ಕಾರಣ ಸರ್ಕಾರಿ ಕಚೇರಿಗಳು, ಕೆಎಸ್‌ಆರ್‌ಟಿಸಿ ಬಸ್‌ಗಳ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದ್ದು, ಲಾರಿ ಮಾಲೀಕರು ಮತ್ತು ಏಜೆಂಟರ ಒಕ್ಕೂಟ ಬಂದ್‌ನಿಂದ ಅಂತರ ಕಾಯ್ದುಕೊಂಡಿರುವ ಕಾರಣಕ್ಕೆ ಸರಕು ಸಾಗಣೆ ವಾಹನಗಳ ಓಡಾಡಲಿವೆ ಎಂದು ಒಕ್ಕೂಟ ಪದಾಧಿಕಾರಿಗಳು ಹೇಳಿದ್ದಾರೆ.

ADVERTISEMENT

ಆಟೊ ಮಾಲೀಕರ ಸಂಘದವರು ಸಹ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿರುವ ಕಾರಣ ಆಟೊಗಳು ಸೋಮವಾರ ರಸ್ತೆಗೆ ಇಳಿಯುವುದಿಲ್ಲ. ಔಷಧಿ ಮಳಿಗೆ, ಆಸ್ಪತ್ರೆಗಳು ಎಂದಿನಂತೆ ಬಾಗಿಲು ತೆರೆಯಲಿದ್ದು, ಹೊಟೇಲ್‌ಗಳು ಬಾಗಿಲು ಮುಚ್ಚುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.