ದೊಡ್ಡಬಳ್ಳಾಪುರ: ನಗರದಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಸ್ವೀಪ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಗರದ ಸರ್ಕಾರಿ ಪ.ಪೂ. ಕಾಲೇಜಿನ ಬಳಿಯಿಂದ ಮೆರವಣಿಗೆ ನಡೆಸಿದ ನೂರಾರು ವಿದ್ಯಾರ್ಥಿಗಳು ಹಾಗೂ ಅಂಗನವಾಡಿ ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿದರು.
ತಾಲ್ಲೂಕು ಕಚೇರಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಲಾಗಿತ್ತು. ಮತದಾನದ ಬಗ್ಗೆ ಅರಿವು ಮೂಡಿಸುವ ಭಿತ್ತಿಪತ್ರಗಳನ್ನು ಹಿಡಿದ ವಿದ್ಯಾರ್ಥಿಗಳು ನಗರದಲ್ಲಿ ಸೈಕಲ್ ಜಾಥಾ ನಡೆಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿಯ ಅಧ್ಯಕ್ಷ ಎನ್.ಕೃಷ್ಣಪ್ಪ ಜಾಥಾಗೆ ಚಾಲನೆ ನೀಡಿ ಮಾತನಾಡಿ, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸುವುದರೊಂದಿಗೆ ಕಡ್ಡಾಯವಾಗಿ ಪ್ರತಿಯೊಬ್ಬ ಮತದಾರರು ಮತದಾನದಲ್ಲಿ ಭಾಗವಹಿಸಬೇಕಿದೆ. ಈ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಸ್ವೀಪ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಶಿಬಿರಗಳನ್ನು ಏರ್ಪಡಿಸಿದ್ದು, ಹೊಸ ಮತದಾರರು ಅರ್ಜಿ ಸಲ್ಲಿಸಿದ್ದಾರೆ. ಮತದಾರರು ಮತದಾನದ ದಿನ ಕಾಲಹರಣ ಮಾಡದೆ ಕಡ್ಡಾಯ-ವಾಗಿ ಮತ ಚಲಾಯಿಸಬೇಕಿದೆ. ಮತದಾನ ಪ್ರಜಾಪ್ರಭುತ್ವದಲ್ಲಿ ಒಂದು ಪವಿತ್ರ ಕರ್ತವ್ಯ ಎಂದು ಭಾವಿಸಬೇಕಿದೆ ಎಂದು ಮತದಾನದ ಮಹತ್ವ ಕುರಿತು ವಿವರಿಸಿದರು. ಮತದಾನಕ್ಕೆ ವಿದ್ಯಾರ್ಥಿಗಳು ಪೋಷಕರನ್ನು ಪ್ರೇರೇಪಿಸಿ ಕರೆ ತರುವಂತೆ ಕರೆ ನೀಡಿದರು.
ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಕೆ.ಅಶ್ವತ್ಥ ರೆಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್.ತಿಮ್ಮೇಗೌಡ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.