ADVERTISEMENT

ರೋಷನ್‌ ಬೇಗ್‌ ರಾಜೀನಾಮೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2017, 5:55 IST
Last Updated 16 ಅಕ್ಟೋಬರ್ 2017, 5:55 IST

ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಸಚಿವ ರೋಷನ್‌ ಬೇಗ್‌ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಭಾನುವಾರ ನಗರದ ಅಂಬೇಡ್ಕರ್‌ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಯುವ ಮೋರ್ಚಾ ಘಟಕದ ಅಧ್ಯಕ್ಷ ದೇವರಾಜ್‌, ‘ಬೆಂಗಳೂರಿನ ದೇವನಹಳ್ಳಿಯಲ್ಲಿ ಇದೇ 13ರಂದು ನಡೆದ ಸಾರ್ವಜನಿಕ ಸಭೆಯಲ್ಲಿ ಸಚಿವರು ನರೇಂದ್ರ ಮೋದಿ ಅವರ ಬಗ್ಗೆ ಕೀಳುಮಟ್ಟದ ಶಬ್ದ ಪ್ರಯೋಗಿಸಿ ಮಾತನಾಡಿರುವುದು ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದು ಖಂಡನೀಯ. ಕೂಡಲೇ ಸಚಿವ ರೋಷನ್‌ ಬೇಗ್‌ ಅವರು ಕ್ಷಮೆಯಾಚಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿದರು.

‘ರಾಜ್ಯದಲ್ಲಿ ಈಗಾಗಲೇ ಜನರು ಕಾಂಗ್ರೆಸ್‌ ಸರ್ಕಾರದ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಜನಪರ ಕಾಳಜಿ ವಹಿಸುವಲ್ಲಿ ಸರ್ಕಾರ ವಿಫಲವಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ’ ಆರೋಪಿಸಿದರು.

ADVERTISEMENT

ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಜಯಕೃಷ್ಣ ಮಾತನಾಡಿ, ‘ಮೋದಿ ಅವರು ಸಾಮಾನ್ಯ ವ್ಯಕ್ತಿಯಂತೆ ದೇಶದ ಅಭಿವೃದ್ಧಿಗಾಗಿ ದುಡಿಯುತ್ತಿದ್ದಾರೆ. ಪ್ರತಿಯೊಬ್ಬರ ನೋವಿಗೂ ಸ್ಪಂದಿಸುತ್ತಿದ್ದಾರೆ. ಇದನ್ನು ಸಹಿಸದ ಕಾಂಗ್ರೆಸ್‌ ಪಕ್ಷದ ನಾಯಕರು ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವುದು ಸರಿಯಲ್ಲ’ ಎಂದರು.

ಕೂಡಲೇ ರಾಜ್ಯ ಸರ್ಕಾರ ಸಚಿವ ರೋಷನ್‌ ಬೇಗ್‌ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು. ಪ್ರಕರಣ ದಾಖಲಿಸಿ ತನಿಖೆ ಮಾಡಬೇಕು. ಇಲ್ಲವಾದಲ್ಲಿ ರಾಜ್ಯದಾದ್ಯಂತ ತೀವ್ರವಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು. ಬಿಜೆಪಿ ಯುವ ಮೋರ್ಚಾ ಘಟಕದ ಉಪಾಧ್ಯಕ್ಷ ಮಹದೇವಪ್ಪ, ಕಾರ್ಯದರ್ಶಿ ಚಂದ್ರಶೇಖರ್‌ ಮುಂಖಡರಾದ ಆನಂದ್‌, ಕಿರಣ್‌, ರಮೇಶ್‌, ನರೇಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.