ADVERTISEMENT

ಶಾಶ್ವತ ನೀರಾವರಿಗೆ ಸೌಲಭ್ಯಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 14 ಜನವರಿ 2011, 7:25 IST
Last Updated 14 ಜನವರಿ 2011, 7:25 IST

ಚಿಂತಾಮಣಿ:  ಕೃಷ್ಣಾ ನದಿ ನೀರು ಹಂಚಿಕೆ ನ್ಯಾಯ ಮಂಡಳಿ ನೀಡಿರುವ ತೀರ್ಪು ರಾಜ್ಯದ ಜನತೆಗೆ ಅದರಲ್ಲೂ ಉತ್ತರ ಕರ್ನಾಟಕದ ಬಿಜಾಪುರ, ಗುಲ್ಬರ್ಗ, ರಾಯಚೂರು, ಬಾಗಲಕೋಟೆ ಜಿಲ್ಲೆಗಳಿಗೆ ವರದಾನವಾಗಿದೆ, ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 524 ಮೀ ವರೆಗೆ ವಿಸ್ತರಿಸಲು ಅನುಮತಿ ನೀಡಿರುವುದು ಆ ಭಾಗದ ಜನರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ ಎಂದು ತಾಲ್ಲೂಕಿನ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಲಕ್ಷ್ಮೀನಾರಾಯಣರೆಡ್ಡಿ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸಮಿತಿ ಈಚೆಗೆ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಒದಗಿಸಬೇಕು ಎಂದು ಹಲವಾರು ವರ್ಷಗಳಿಂದ ಅನೇಕ ಹೋರಾಟ ಮಾಡುತ್ತಿದ್ದರೂ ಸರ್ಕಾರ ಕಿವಿಗೆ ಹಾಕಿಕೊಳ್ಳುತ್ತಿಲ್ಲ.

ಜಿಲ್ಲೆಯ ಕೆಲವು ಜನಪ್ರತಿನಿಧಿಗಳು ಸಹ ಇದರ ಬಗ್ಗೆ ಚಕಾರ ಎತ್ತದಿರುವ ಬಗ್ಗೆ ಸಭೆಯಲ್ಲಿ ಆಕ್ರೋಶ ವ್ಯಕ್ತವಾಯಿತು. ಶಾಶ್ವತ ನೀರಾವರಿ ವಿಷಯವನ್ನು ರಾಜಕೀಯ ಅಸ್ತ್ರವಾಗಿ ಮಾಡಿಕೊಂಡು ಚುನಾವಣೆಗಳಲ್ಲಿ ಗೆದ್ದು ಬಂದರೂ ನಂತರ ವಿಷಯವನ್ನೇ ಮರೆತು ಬಿಡುತ್ತಾರೆ ಎಂದು ಸದಸ್ಯರು ಆರೋಪಿಸಿದರು.

ಶಾಶ್ವತ ನೀರಾವರಿ ಯೋಜನೆ ಜಾರಿ ಆಗುವವರೆಗೂ ನಮ್ಮ ಹೋರಾಟ ನಿರಂತರವಾಗಿ ಮುಂದುವರೆಸಬೇಕು. 2 ಜಿಲ್ಲೆಗಳ ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸದಸ್ಯರು, ವಿದ್ಯಾರ್ಥಿಗಳು, ರೈತರು, ಕೂಲಿ ಕಾರ್ಮಿಕರು ಹಾಗೂ ಸಾರ್ವಜನಿಕರು ಎಚ್ಚೆತ್ತುಕೊಂಡು ಹೋರಾಟ, ಪ್ರತಿಭಟನೆಗಳಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.

ಕೃಷ್ಣಾನದಿ ನೀರಿನಲ್ಲಿ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೂ ಪಾಲು ನೀಡಬೇಕು ಹಾಗೂ ಈ ಯೋಜನೆಗಳ ಅನುಷ್ಠಾನಕ್ಕಾಗಿ ಶೀಘ್ರವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಒತ್ತಾಯಿಸಿದರು.ಚಿಕ್ಕಬಳ್ಳಾಪುರ ಜಿಲ್ಲೆಯ ಕಾಂಗ್ರೆಸ್ ಅಧ್ಯಕ್ಷ ಆಂಜನಪ್ಪ ಶಾಶ್ವತ ನೀರಾವರಿ ಯೋಜನೆಗೆ 50 ಕೋಟಿ ರೂಪಾಯಿ ನೀಡುವುದಾಗಿ ತಿಳಿಸಿರುವುದನ್ನು ಸದಸ್ಯರು ಸ್ವಾಗತಿಸಿ ಕೃತಜ್ಞತೆ ಸಲ್ಲಿಸುವ ತೀರ್ಮಾನ ಕೈಗೊಳ್ಳಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.