ಶಿಡ್ಲಘಟ್ಟ: ಸಾವಿರಾರು ಭಕ್ತರ ಸಮ್ಮುಖದಲ್ಲಿ ತಾಲ್ಲೂಕಿನ ಚಿಕ್ಕದಾಸರಹಳ್ಳಿಯ ಸಮೀಪದ ಬ್ಯಾಟರಾಯಸ್ವಾಮಿ ಬ್ರಹ್ಮ ರಥೋತ್ಸವ ಗುರುವಾರ ಸಾಂಗೋಪವಾಗಿ ನಡೆಯಿತು. ಸುತ್ತಮುತ್ತಲ ಗ್ರಾಮಗಳಿಂದ ಹಾಗೂ ಪಟ್ಟಣದಿಂದ ಆಗಮಿಸಿದ್ದ ಭಕ್ತರು ಪೂಜೆಯಲ್ಲಿ ಪಾಲ್ಗೊಂಡು ಭಕ್ತಿಭಾವ ಮೆರೆದರು.
ರಥೋತ್ಸವ ಅಂಗವಾಗಿ ದೇಗುಲದಲ್ಲಿ ವಿವಿಧ ಪೂಜಾ ಕಾರ್ಯಕ್ರಮಗಳು ನಡೆದವು. ಬೈರಗಾನಹಳ್ಳಿಯ ಕಲಾತಂಡದ ಪುಟಾಣಿಗಳ ಪಂಡರಿ ಭಜನೆ ಹಾಗೂ ನೃತ್ಯ ಭಾವ ಪರವಶಗೊಳಿಸಿತು. ಮಕ್ಕಳ ಬಣ್ಣದ ವೇಷಗಳು, ಕೈಲಿ ಹಿಡಿದ ಪುಟ್ಟ ಬಾವುಟ, ಮುಖಕ್ಕೆ ಹಚ್ಚಿರುವ ಬಣ್ಣದ ಕುಣಿತ ಎಲ್ಲರ ಮೆಚ್ಚುಗೆಗೆ ಪಾತ್ರ ವಾಯಿತು.
ಬತ್ತಾಸು, ಸಿಹಿ ಖಾರದ ತಿಂಡಿಗಳು, ವಿವಿಧ ಹಣ್ಣುಗಳು, ತಂಪು ಪಾನೀಯ, ಕರಿದ ತಿಂಡಿ ತಿನಿಸು, ಮಕ್ಕಳಿಗೆ ಆಟಿಕೆ, ಅಚ್ಚೆ ಹಾಕುವವರು, ಬಳೆಗಾರರು ಉತ್ಸವಕ್ಕೆ ರಂಗು ತುಂಬಿದರು. ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಭಕ್ತರಿಗೆ ಪಾನಕ, ಮಜ್ಜಿಗೆ ಹಾಗೂ ಹೆಸರು ಬೇಳೆ ವಿತರಿಸಲಾಯಿತು.
ಚಿಕ್ಕದಾಸರಹಳ್ಳಿ, ಮಳಮಾಚನಹಳ್ಳಿ, ದೊಡ್ಡದಾಸರಹಳ್ಳಿ, ಮುಗಿಲಡಪಿ, ಜಪ್ತಿಹೊಸಹಳ್ಳಿ, ನಾರಾಯಣದಾಸರಹಳ್ಳಿ, ಬೋದಗೂರು ಮೊದಲಾದ ಗ್ರಾಮಸ್ಥರು ಪಾನಕ ವಿತರಿಸಿದರು.
ವಿಜಯನಗರ ಕಾಲದ ಬ್ಯಾಟರಾಯಸ್ವಾಮಿ ದೇವಾಲಯವು ಎತ್ತರವಾದ ಗುಡ್ಡದ ಮೇಲಿರುವುದರಿಂದ ಕಂಗೊಳಿಸುತ್ತಿತ್ತು.
`ಶಿಲ್ಪಕಲಾ ದೃಷ್ಟಿಯಿಂದ ಅತ್ಯಂತ ಆಕರ್ಷಕ ಕಲಾನೈಪುಣ್ಯತೆ ಹೊಂದಿದೆ. ಬ್ಯಾಟರಾಯನ ಉತ್ಸವಮೂರ್ತಿ ಜತೆಗೆ ಶ್ರೀದೇವಿ ಭೂದೇವಿ ಅವರ ಸುಂದರ ಶಿಲ್ಪಗಳಿವೆ~ ಎಂದು ಟ್ರಸ್ಟ್ ಅಧ್ಯಕ್ಷ ಬ್ಯಾಟರಾಯಶೆಟ್ಟಿ ತಿಳಿಸಿದರು.
ರಥೋತ್ಸವಕ್ಕೆ ಶಾಸಕ ವಿ.ಮುನಿಯಪ್ಪ ಹಾಗೂ ತಹಶೀಲ್ದಾರ್ ಭೀಮಾನಾಯಕ್ ಚಾಲನೆ ನೀಡಿದರು.
ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಸ್.ಎಂ.ನಾರಾಯಣಸ್ವಾಮಿ, ಸತೀಶ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ವೇಣುಗೋಪಾಲ್, ಹಿರಿಯ ವಕೀಲ ಡಿ.ಅಶ್ವತ್ಥ ನಾರಾಯಣ್, ಸುಬ್ರಮಣಿ, ಮುನಿಕೃಷ್ಣಪ್ಪ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.