ಚಿಕ್ಕಬಳ್ಳಾಪುರ: ಗುಡಿಬಂಡೆ ತಾಲ್ಲೂಕಿನ ಬರಗಾಲದ ಪರಿಣಾಮ ಹಲವಾರು ಸಮಸ್ಯೆಗಳು ತಲೆದೋರಿದ್ದು, ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಕೊರತೆ ಹೆಚ್ಚಾಗಿದೆ. ಸಮಸ್ಯೆಗಳ ನಿರ್ವಹಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಕೂಡಲೇ ಕಾರ್ಯ ಪ್ರವೃತ್ತರಾಗದಿದ್ದಲ್ಲಿ, ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಶಾಸಕ ಎನ್.ಸಂಪಂಗಿ ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, `ಯಾವ್ಯಾವ ಗ್ರಾಮಗಳಲ್ಲಿ ಸಮಸ್ಯೆಗಳಿವೆಯೋ ಆಯಾ ಗ್ರಾಮಗಳಿಗೆ ಅಧಿಕಾರಿಗಳು ಭೇಟಿ ನೀಡಬೇಕು. ಗ್ರಾಮಸ್ಥರೊಂದಿಗೆ ಸಂವಾದ ನಡೆಸಿ, ಸಮಸ್ಯೆಗಳನ್ನು ಪರಿಹರಿಸಬೇಕು~ ಎಂದರು.
`ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಿದ್ದು, ಅಲ್ಲಲ್ಲಿ ಕೊಳವೆ ಬಾವಿಗಳನ್ನು ಕೊರೆಸಲು 14.4 ಲಕ್ಷ ರೂಪಾಯಿಗಳನ್ನು ಸರ್ಕಾರದ ವತಿಯಿಂದ ಬಿಡುಗಡೆ ಮಾಡಲಾಗಿದೆ. ಹಣದ ಸದ್ಬಳಕೆಗೆ ಅಧಿಕಾರಿಗಳು ಮುಂದಾಗಬೇಕು. ನಿಗದಿತ ಅವಧಿಯೊಳಗೆ ಎಲ್ಲ ಸಮಸ್ಯೆಗಳು ಪರಿಹಾರಗೊಳ್ಳಬೇಕು~ ಎಂದು ಅವರು ತಿಳಿಸಿದರು.
`ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ತಾಲ್ಲೂಕಿನ ಏಳು ಗ್ರಾಮ ಪಂಚಾಯಿತಿಗಳಿಗೆ 10 ಕೋಟಿ ರೂಪಾಯಿ ಬಿಡುಗಡೆಯಾಗಿದೆ. ಹೀಗಿದ್ದರೂ ಯೋಜನೆಯಡಿ ಕಾಮಗಾರಿಗೆ ಹಿನ್ನಡೆಯಾಗಿದೆ. ಅನುದಾನ ದುರ್ಬಳಕೆಯಾಗಿದೆ. ಕೈಗೊಳ್ಳಲಾಗಿರುವ ಕಾಮಗಾರಿ ಗುಣಮಟ್ಟ ಕಾಯ್ದುಕೊಳ್ಳಲಾಗಿಲ್ಲ~ ಎಂದು ಅವರು ತಿಳಿಸಿದರು.
`ತಾಲ್ಲೂಕಿನ 55 ಗ್ರಾಮಗಳ ಕೆರೆಗಳ ಪುನಶ್ಚೇನಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ. ಕೆರೆಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರವು 23 ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿದೆ. ವಿದ್ಯಾರ್ಥಿ ನಿಲಯಗಳ ಸ್ಥಾಪನೆ ಮತ್ತು ಕಾಲೇಜು ಕಟ್ಟಡ ನಿರ್ಮಾಣಕ್ಕೆ ಶೀಘ್ರವೇ ಸ್ಥಳಗಳನ್ನು ಗುರುತಿಸಲಾಗುವುದು~ ಎಂದು ಅವರು ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷ ನಾರಾಯಣಸ್ವಾಮಿ, ಕಾರ್ಯ ನಿರ್ವಹಣಾಧಿಕಾರಿ ವಸಂತಕುಮಾರ್ ಸಭೆಯಲ್ಲಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.