ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯಾರು ಎಂಬುದನ್ನು ಮಾರ್ಚ್ 20ರಂದು ನಡೆಯುವ ಸಮಾವೇಶದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಘೋಷಿಸಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ವಿ.ನಾಗರಾಜ್ ತಿಳಿಸಿದರು.
ನಗರ ಹೊರವಲಯದಲ್ಲಿ ಅಂದು ಬೆಳಿಗ್ಗೆ ನಡೆಯುವ ಸಮಾವೇಶದಲ್ಲಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರಗಳಿಂದಲೂ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಕ್ಷೇತ್ರದ ಬಗ್ಗೆ ಚರ್ಚಿಸಿ ಸೂಕ್ತ ನಿರ್ಣಯ ತೆಗೆದುಕೊಂಡು ಅಭ್ಯರ್ಥಿ ಹೆಸರು ಘೋಷಿಸಲಾಗುವುದು ಎಂದು ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಕ್ಷೇತ್ರದಿಂದ ಸ್ಪರ್ಧಿಸಲು ಆಕಾಂಕ್ಷಿಗಳು ಹಲವರಿದ್ದು, ಕುಮಾರಸ್ವಾಮಿಯವರ ನಿರ್ಣಯಕ್ಕೆ ನಮ್ಮೆಲ್ಲರ ಒಪ್ಪಿಗೆ ಮತ್ತು ಬೆಂಬಲ ಇರುತ್ತದೆ ಎಂದು ಅವರು ತಿಳಿಸಿದರು.
ಸ್ವತಃ ಕುಮಾರಸ್ವಾಮಿ ಇಲ್ಲವೇ ಅನಿತಾ ಕುಮಾರಸ್ವಾಮಿ ಸ್ಪರ್ಧಿಸಬಹುದು. ಉದ್ಯಮಿಗಳಾದ ಮುನೇಗೌಡ, ಶ್ರೀನಿವಾಸಮೂರ್ತಿ ಮತ್ತು ಶಾಶ್ವತ ನೀರಾವರಿ ಹೋರಾಟಗಾರ ಮಧುಸೀತಪ್ಪ ಅವರು ಆಕಾಂಕ್ಷಿಗಳಾಗಿದ್ದು, ಅಭ್ಯರ್ಥಿ ಯಾರು ಎಂಬುದು ಮಾತ್ರ ನಿಗೂಢವಾಗಿದೆ ಎಂದರು.
ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಈಗಾಗಲೇ ಅಭ್ಯರ್ಥಿಯನ್ನು ಘೋಷಿಸಿಕೊಂಡು ಪ್ರಚಾರದಲ್ಲಿ ತೊಡಗಿಕೊಂಡಿವೆ. ಆದರೆ ನಾವು ಅಭ್ಯರ್ಥಿ ಯಾರು ಎಂಬುದನ್ನು ಘೋಷಿಸದೆಯೇ ಈಗಾಗಲೇ ಪ್ರಚಾರದಲ್ಲಿ ತೊಡಗಿದ್ದೇವೆ ಎಂದು ಅವರು ತಿಳಿಸಿದರು.
ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ಮಾತನಾಡಿ, ಕೇಂದ್ರ ಸಚಿವ ವೀರಪ್ಪ ಮೊಯಿಲಿ ಭ್ರಷ್ಟಾಚಾರದ ಆರೋಪದಿಂದಾಗಿ ಜನರ ಒಲವು ಕಳೆದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ.ಎನ್.ಬಚ್ಚೇಗೌಡ ಕೂಡ ಮತದಾರರ ವಿಶ್ವಾಸ ಗಳಿಸುವಲ್ಲಿ ಸಫಲರಾಗುವುದಿಲ್ಲ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಅವರ ಆಡಳಿತ ನೋಡಿರುವ ಜನರು ಜೆಡಿಎಸ್ ಕೈಬಿಡುವುದಿಲ್ಲ ಎಂಬ ನಂಬಿಕೆ ನಮಗಿದೆ ಎಂದು ಅವರು ತಿಳಿಸಿದರು.
ಕಾಂಗ್ರೆಸ್ ನೇತೃತ್ವದ ಯುಪಿಎ ಮತ್ತು ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಆಡಳಿತಾವಧಿಯಲ್ಲಿ ಆಗಿರುವ ಭ್ರಷ್ಟಾಚಾರ ಮತ್ತು ಹಗರಣಗಳನ್ನು ಕಂಡು ಜನರು ಬೇಸತ್ತಿದ್ದಾರೆ. ಸಮರ್ಥ ಮತ್ತು ಉತ್ತಮ ಆಡಳಿತ ನೀಡಬಲ್ಲ ಜನಪ್ರತಿನಿಧಿಯನ್ನು ಬಯಸುತ್ತಿದ್ದು, ನಿರೀಕ್ಷೆಯನ್ನು ಜೆಡಿಎಸ್ ಅಭ್ಯರ್ಥಿಗಳು ಈಡೇರಿಸಲಿದ್ದಾರೆ ಎಂದು ಅವರು ತಿಳಿಸಿದರು.
ಜೆಡಿಎಸ್ ಮುಖಂಡರಾದ ವೆಂಕಟನಾರಾಯಣಪ್ಪ, ಕೆ.ಟಿ.ನಾರಾಯಣಸ್ವಾಮಿ, ಯಲುವಹಳ್ಳಿ ಸೊಣ್ಣೇಗೌಡ, ಪಿ.ಶ್ರೀನಿವಾಸ್, ಕೆ.ಆರ್.ರೆಡ್ಡಿ, ಕಿಸಾನ್ ಕೃಷ್ಣಪ್ಪ, ಕೃಷ್ಣಮೂರ್ತಿ, ಕೊಳವನಹಳ್ಳಿ ಮುನಿರಾಜು ಮತ್ತಿತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.