ADVERTISEMENT

ಹಾಸ್ಟೆಲ್ ಸೌಲಭ್ಯಕ್ಕೆ ವಿದ್ಯಾರ್ಥಿಗಳ ಆಗ್ರಹ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2013, 8:29 IST
Last Updated 7 ಸೆಪ್ಟೆಂಬರ್ 2013, 8:29 IST

ಚಿಕ್ಕಬಳ್ಳಾಪುರ: ಶಾಲೆ- ಕಾಲೇಜು ವಿದ್ಯಾರ್ಥಿಗಳಿಗೆ ಉತ್ತಮ ಹಾಸ್ಟೆಲ್ ಸೌಲಭ್ಯ ಕಲ್ಪಿಸಬೇಕು, ನೂತನ ಹಾಸ್ಟೆಲ್‌ಗಳನ್ನು ಆರಂಭಿಸಬೇಕು ಎಂಬುದೂ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದ ವಿದ್ಯಾರ್ಥಿಗಳು ಶುಕ್ರವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಗರದ ಸರ್ಕಾರಿ ಜೂನಿಯರ್ ಕಾಲೇಜಿನಿಂದ ತಾಲ್ಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಕೈಗೊಂಡರು. ಕೆಲ ಕಾಲ ರಸ್ತೆ ತಡೆ ನಡೆಸಿದರು. ಹಾಸ್ಟೆಲ್‌ಗಳ ಕೊರತೆಯಿಂದ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆ ನಿವಾರಿಸಬೇಕು. ಬೇಡಿಕೆ ಈಡೇರಿಸುವವರೆಗೆ ಹೋರಾಟ ಕೈಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಸಂಘಟನೆ ಮುಖಂಡ ಮಂಜುನಾಥ್‌ರೆಡ್ಡಿ ಮಾತನಾಡಿ, ಉತ್ತಮ ಶಿಕ್ಷಣ ಪಡೆಯುವ ಉದ್ದೇಶದಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ನಗರಕ್ಕೆ ಬರುತ್ತಾರೆ. ಆದರೆ ಸಮರ್ಪಕ ಹಾಸ್ಟೆಲ್ ಸೌಲಭ್ಯ ಸಿಗದೆ ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ಮನೆ ಬಾಡಿಗೆ ಪಡೆಯಲು ಅಥವಾ ಬೇರೆ ವ್ಯವಸ್ಥೆ ಮಾಡಿಕೊಳ್ಳಲು ಆರ್ಥಿಕ ಚೈತನ್ಯ ಇರುವುದಿಲ್ಲ. ಆದ್ದರಿಂದ ಹಾಸ್ಟೆಲ್ ನಿರ್ಮಾಣಕ್ಕೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.

ಮುಖಂಡ ಶಿವಕುಮಾರ್ ಮಾತನಾಡಿ, ರಾಜ್ಯದಲ್ಲಿ ಶೇ 80ರಷ್ಟು ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯವಿಲ್ಲ. ಶೇ 55ರಷ್ಟು ಹಾಸ್ಟೆಲ್‌ಗಳಿಗೆ ಸ್ವಂತ ಕಟ್ಟಡಗಳಿದ್ದರೆ, ಶೇ 45ರಷ್ಟು ಬಾಡಿಗೆ ಕಟ್ಟಡದಲ್ಲಿವೆ. ಶೇ 59ರಷ್ಟು ವಿದ್ಯಾರ್ಥಿಗಳಿಗೆ ಸ್ನಾನಗೃಹಗಳ ಕೊರತೆಯಿದ್ದರೆ, ಶೇ 55ರಷ್ಟು ವಿದ್ಯಾರ್ಥಿಗಳಿಗೆ ಕೊಠಡಿ ಸೌಲಭ್ಯವಿಲ್ಲ.

ಹಾಸ್ಟೆಲ್ ನಿರ್ವಹಣೆ ಮತ್ತು ವಿದ್ಯಾರ್ಥಿಗಳ ಸಮಸ್ಯೆ ನಿವಾರಣೆಗೆ ಕಾಯಂ ನಿಲಯಪಾಲಕರನ್ನು ನೇಮಿಸಬೇಕು. ಹಾಸ್ಟೆಲ್‌ಗಳ ನಿರ್ವಹಣೆಗೆ ಸ್ವಾಯತ್ತ ಪ್ರಾಧಿಕಾರ ರಚಿಸಬೇಕು ಎಂದು ಒತ್ತಾಯಿಸಿದರು.
ಸಂಘಟನೆ ಮುಖಂಡರಾದ ಅರುಣ್, ಕಿರಣ್, ಮಂಜುಳಾ, ಸ್ವಾತಿ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.