ADVERTISEMENT

‘ಪ್ರಜ್ಞಾವಂತ ಸಮಾನ ಮಾನವ ಹಕ್ಕು ಅಗತ್ಯ’

ವಿಶ್ವ ಮಾನವ ಹಕ್ಕುಗಳ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2013, 9:08 IST
Last Updated 11 ಡಿಸೆಂಬರ್ 2013, 9:08 IST
ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ನಗರದ ಡಾ. ಬಿ.ಆರ್.ಅಂಬೇಡ್ಕರ್‌ ಭವನದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಆರ್‌.ವಿಶಾಲ್‌ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನೀಲಾ ಮಂಜುನಾಥ್‌, ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಕೆ.ಅಮರನಾರಾಯಣ, ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎ.ಎಸ್‌.ಬೆಳ್ಳುಂಕೆ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ಶಿವಪ್ರಸಾದ್‌, ವಕೀಲರ ಸಂಘದ ಅಧ್ಯಕ್ಷ ಕೆ.ಎಚ್‌.ತಮ್ಮೇಗೌಡ, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕಿ ಡಾ.ಕೆ.ಎನ್‌.ಕವನಾ ಇದ್ದಾರೆ.
ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ನಗರದ ಡಾ. ಬಿ.ಆರ್.ಅಂಬೇಡ್ಕರ್‌ ಭವನದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಆರ್‌.ವಿಶಾಲ್‌ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನೀಲಾ ಮಂಜುನಾಥ್‌, ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಕೆ.ಅಮರನಾರಾಯಣ, ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎ.ಎಸ್‌.ಬೆಳ್ಳುಂಕೆ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ಶಿವಪ್ರಸಾದ್‌, ವಕೀಲರ ಸಂಘದ ಅಧ್ಯಕ್ಷ ಕೆ.ಎಚ್‌.ತಮ್ಮೇಗೌಡ, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕಿ ಡಾ.ಕೆ.ಎನ್‌.ಕವನಾ ಇದ್ದಾರೆ.   

ಚಿಕ್ಕಬಳ್ಳಾಪುರ: ಪ್ರಜ್ಞಾವಂತ ನಾಗರಿಕ ಸಮಾಜ ನಿರ್ಮಾಣಕ್ಕೆ ಮಾನವ ಹಕ್ಕುಗಳ ಪಾಲನೆ ಅನಿವಾರ್ಯ ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎ.ಎಸ್‌.ಬೆಳ್ಳುಂಕೆ ಅಭಿಪ್ರಾಯ ವ್ಯಕ್ತಪಡಿಸಿದರು. ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ನಗರದ ಡಾ. ಬಿ.ಆರ್.ಅಂಬೇಡ್ಕರ್‌ ಭವನದಲ್ಲಿ ಮಂಗಳವಾರ ನಡೆದ ಕಾರ್ಯ­ಕ್ರಮದಲ್ಲಿ ಮಾತನಾಡಿದ ಅವರು ಪ್ರತಿಯೊಬ್ಬರು ಇದರ ಬಗ್ಗೆ ಜಾಗ್ರತೆ ವಹಿಸಬೇಕು. ಮಾನವ ಹಕ್ಕುಗಳ ಪಾಲನೆ ಜತೆಗೆ ಸಂರಕ್ಷಣೆಗೂ ಮುಂದಾಗಬೇಕು ಎಂದು ಸಲಹೆ ನೀಡಿದರು.

ಮೊದಲನೇ ಮತ್ತು ಎರಡನೇ ಮಹಾಯುದ್ಧಗಳಿಂದ ವಿಶ್ವದ ಮೇಲೆ ಉಂಟಾದ ಪರಿಣಾಮಗಳನ್ನು ಗಂಭೀರವಾಗಿ ಪರಿಗಣಿಸಿದ ವಿಶ್ವ ಸಂಸ್ಥೆಯು ವಿಶ್ವದ ಎಲ್ಲ ದೇಶಗಳ ಸಹಕಾರದೊಂದಿಗೆ 1948ರ ಡಿಸೆಂಬರ್‌ 10ರಂದು ಮಾನವ ಹಕ್ಕುಗಳನ್ನು ಅಸ್ತಿತ್ವಕ್ಕೆ ತಂದಿತು. 1993ರಲ್ಲಿ ಮಾನವ ಹಕ್ಕುಗಳ ಸಂರಕ್ಷಣಾ ಅಧಿನಿಯಮ ರಚಿಸಿ ರಾಷ್ಟ್ರೀಯ ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗ ರಚನೆಗೊಂಡವು ಎಂದು ಅವರು ತಿಳಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ಶಿವಪ್ರಸಾದ್‌ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾನವ ಹಕ್ಕುಗಳನ್ನು ಸಂರಕ್ಷಿಸಲು ಹಲ ಮಹನೀಯರು ಶ್ರಮಿಸಿದ್ದು, ತಮ್ಮ ಬದುಕನ್ನೇ ಸಮರ್ಪಿಸಿಕೊಂಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢವಾಗಿ ಉಳಿಯ­ಬೇಕಿದ್ದರೆ, ಮಾನವ ಹಕ್ಕುಗಳ ರಕ್ಷಣೆ ಅತ್ಯಗತ್ಯ. ಮಾನವ ಹಕ್ಕುಗಳನ್ನು ಸಂರಕ್ಷಣೆ ಮಾಡಿದ್ದಲ್ಲಿ ಮಾತ್ರವೇ ಉತ್ತಮ ನಾಗರಿಕರಾಗಲು ಸಾಧ್ಯ ಎಂದರು.

ಜಿಲ್ಲಾಧಿಕಾರಿ ಡಾ. ಆರ್.ವಿಶಾಲ್ ಮಾತನಾಡಿ, ಸಂವಿಧಾನದಿಂದ ದೊರೆತಿರುವ ನಾಗರಿಕ ಮತ್ತು ಮೂಲಭೂತ ಹಕ್ಕುಗಳನ್ನು ಸರಿಯಾಗಿ ಪರಿಪಾಲನೆ ಮಾಡಿದ್ದಲ್ಲಿ, ಸಹಜ­ವಾಗಿಯೇ ಮಾನವ ಹಕ್ಕುಗಳ ರಕ್ಷಣೆ­ಯಾಗುತ್ತದೆ. ಒಬ್ಬರು ಅಥವಾ ಇಬ್ಬರು ಮಾತ್ರವೇ ಜಾಗೃತರಾದರೆ ಸಾಲದು, ಇಡೀ ಸಮುದಾಯಕ್ಕೆ ಅವರು ಜಾಗೃತಿ ಮೂಡಿಸುವಂತಹ ಕಾರ್ಯವನ್ನು ಕೈಗೊಳ್ಳಬೇಕು ಎಂದರು.

ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಕೆ.ಅಮರನಾರಾಯಣ, ಹಿರಿಯ ಸಿವಿಲ್‌ ನ್ಯಾಯಾಧೀಶರಾದ ರಾಜೇಶ್ವರಿ ಎನ್‌.ಹೆಗಡೆ, ನ್ಯಾಯಾಧೀಶೆಯರಾದ ಅನಿತಾ, ನಳಿನಿ, ವಕೀಲರ ಸಂಘದ ಅಧ್ಯಕ್ಷ ಕೆ.ಎಚ್.­ತಮ್ಮೇಗೌಡ, ಕಾರ್ಯದರ್ಶಿ ಎಚ್‌.ಪಾಪಿರೆಡ್ಡಿ, ಉನ್ನತಿ ಮಾನವ ಹಕ್ಕುಗಳ ರಕ್ಷಣಾ ಸಂಘದ ಅಧ್ಯಕ್ಷ ಜಿ.ವಿ.ವಿಶ್ವನಾಥ್‌ ಉಪಸ್ಥಿತರಿದ್ದರು.

‘ಮೌಲ್ಯ ಕಾಪಾಡುವಲ್ಲಿ ಯುವಕರ ಪಾತ್ರ ಪ್ರಮುಖ’
ಬಾಗೇಪಲ್ಲಿ:
ಮಾನವೀಯ ಮೌಲ್ಯಗಳನ್ನು ಕಾಪಾಡುವಲ್ಲಿ ದೇಶದ ಯುವಕರ ಪಾತ್ರ ಮುಖ್ಯವಾಗಿದೆ ಎಂದು ಸಿವಿಲ್‌ ನ್ಯಾಯಾ­ಧೀಶ­ರಾದ ಎನ್.ಎಂ.ರಮೇಶ್ ಅಭಿಪ್ರಾಯಪಟ್ಟರು. ಪಟ್ಟಣದ ಸಿವಿಲ್ ನ್ಯಾಯಾಲಯದ ಸಭಾಂಗಣದಲ್ಲಿ ಮಂಗಳವಾರ ಮಾನವ ಹಕ್ಕುಗಳ ದಿನಾಚರಣೆ, ಅಂಗವಿಕಲರ ದಿನಾ­ಚರಣೆ ಅಂಗವಾಗಿ ನಡೆದ ಕಾನೂನು ಅರಿವು–ನೆರವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮಾನವ ಹಕ್ಕುಗಳು ಉಲ್ಲಂಘನೆ ಆಗದಂತೆ ಎಲ್ಲರೂ ಎಚ್ಚರ ವಹಿಸಬೇಕು’ ಎಂದು ತಿಳಿಸಿದರು.

ಶಿಶು ಅಭಿವೃದ್ಧಿ ಅಧಿಕಾರಿ ಲಕ್ಷ್ಮಿದೇವಮ್ಮ ಮಾತನಾಡಿ ‘ಅಂಗವಿಕಲರನ್ನು ಮುಖ್ಯವಾಹಿನಿಗೆ ತರಲು ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದರು. ಮಾನವ ಹಕ್ಕುಗಳ ಬಗ್ಗೆ ವಕೀಲರಾದ ಫಯಾಜ್ ಬಾಷಾ, ಮಂಜುಳಾ ಮಾತ­ನಾಡಿದರು. ತಹಶೀಲ್ದಾರ್ ಎಂ.ಎ.ಪದ್ಮಾ, ವಕೀಲರ ಸಂಘದ ಅಧ್ಯಕ್ಷ ಎ.ನಂಜುಂಡಪ್ಪ, ಸರ್ಕಾರಿ ಅಭಿಯೋಜಕಿ ಕೃಷ್ಣವೇಣಿ, ವಕೀಲರಾದ ನಂಜಪ್ಪ, ಎ.ಜಿ.ಸುಧಾಕರ್, ನರಸಿಂಹಮೂರ್ತಿ, ಮದನ್ ಮೋಹನ್ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.