ADVERTISEMENT

ಉನ್ನತ ಶಿಕ್ಷಣ ಇಲಾಖೆಯ 200 ವಿದ್ಯಾರ್ಥಿ ನಿಲಯ ಶೀಘ್ರ ಹಸ್ತಾಂತರ: ಸಚಿವ ಸುಧಾಕರ್

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2023, 19:39 IST
Last Updated 7 ಸೆಪ್ಟೆಂಬರ್ 2023, 19:39 IST
<div class="paragraphs"><p>ಡಾ.ಎಂ.ಸಿ.ಸುಧಾಕರ್</p></div>

ಡಾ.ಎಂ.ಸಿ.ಸುಧಾಕರ್

   

ಚಿಂತಾಮಣಿ (ಚಿಕ್ಕಬಳ್ಳಾಪುರ): ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿರುವ 200 ವಿದ್ಯಾರ್ಥಿ ನಿಲಯಗಳನ್ನು ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸುಪರ್ದಿಗೆ ಒಪ್ಪಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದ್ದಾರೆ.

ಪಟ್ಟಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿ ನಿಲಯಗಳ ಹಸ್ತಾಂತರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಚರ್ಚಿಸಲಾಗಿದೆ. ಅವರು ಒಪ್ಪಿಗೆ ಸೂಚಿಸಿದ್ದಾರೆ. ಶೀಘ್ರ ಹಸ್ತಾಂತರ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಅವರು ಹೇಳಿದರು.   

ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಗೆ ಒಳಪಟ್ಟಿರುವ ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಊಟ, ತಿಂಡಿ ಹಾಗೂ ಇತರ ಸೌಲಭ್ಯಗಳು ಉಚಿತವಾಗಿ ದೊರೆಯುತ್ತವೆ. ಆದರೆ, ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿರುವ ವಿದ್ಯಾರ್ಥಿ ನಿಲಯಗಳಲ್ಲಿ ಎಲ್ಲ ವೆಚ್ಚಗಳನ್ನೂ ವಿದ್ಯಾರ್ಥಿಗಳೇ ಭರಿಸಬೇಕು. ಇದರಿಂದ ಉನ್ನತ ಶಿಕ್ಷಣ ಇಲಾಖೆಯ ವಿದ್ಯಾರ್ಥಿ ನಿಲಯಗಳಿಗೆ ದಾಖಲಾಗಲು ಬಡ ವಿದ್ಯಾರ್ಥಿಗಳು ಹಿಂಜರಿಯುತ್ತಾರೆ. ಇದೊಂದು ಅವೈಜ್ಞಾನಿಕ ಪದ್ಧತಿ ಎಂದು ಮುಖ್ಯಮಂತ್ರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದರು.

ADVERTISEMENT

ವಿದ್ಯುತ್‌ ಸಮಸ್ಯೆ ಸರ್ಕಾರದ ಗ್ಯಾರಂಟಿ ಯೋಜನೆ ‘ಗೃಹಜ್ಯೋತಿ’ಯಿಂದ ಎದುರಾಗಿರುವ ಸಮಸ್ಯೆ ಅಲ್ಲ. ರಾಜ್ಯದಲ್ಲಿ ಮಳೆಯ ಕೊರತೆಯಿಂದ ವಿದ್ಯುತ್ ಲೋಡ್ ಶೆಡ್ಡಿಂಗ್ ಅನಿವಾರ್ಯವಾಗಿದೆ. ಉತ್ತಮ ಮಳೆಯಾಗಿದ್ದರೆ ವಿದ್ಯುತ್ ಸಮಸ್ಯೆ ಉದ್ಭವಿಸುತ್ತಿರಲಿಲ್ಲ. ಅಪಪ್ರಚಾರಗಳಿಗೆ ಜನರು ಕಿವಿಕೊಡಬಾರದು ಎಂದು ಮನವಿ ಮಾಡಿದರು.

ಬೇಸಿಗೆಗಿಂತಲೂ ಈಗ ವಿದ್ಯುತ್‌ ಬೇಡಿಕೆ ಹೆಚ್ಚಿದೆ. ಜಲಾಶಯಗಳಲ್ಲಿ ನೀರು ಕಡಿಮೆಯಾಗುತ್ತಿದ್ದು, ವಿದ್ಯುತ್ ಉತ್ಪಾದನೆಯೂ ಕುಂಠಿತಗೊಂಡಿದೆ. ಎರಡರಿಂದ ಮೂರು ರಾಜ್ಯಗಳನ್ನು ಹೊರತುಪಡಿಸಿ ಇಡೀ ದೇಶದಲ್ಲಿ ವಿದ್ಯುತ್ ಕೊರತೆ ಎದುರಾಗಿದೆ. ವಿದ್ಯುತ್ ಖರೀದಿಸಲೂ ಆಗುತ್ತಿಲ್ಲ. ಹೆಚ್ಚಿನ ವಿದ್ಯುತ್ ಪಡೆಯಲು ಸಾಧ್ಯವಾದ ಎಲ್ಲ ವ್ಯವಸ್ಥೆಗಳನ್ನು ಸರ್ಕಾರ ಮಾಡುತ್ತಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.