ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ನೂರು ದಿನಗಳ ಕಾಲ ಕ್ಷಯರೋಗ ಪತ್ತೆ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 23 ಗ್ರಾಮ ಪಂಚಾಯಿತಿಗಳನ್ನು ಕ್ಷಯಮುಕ್ತ ಗ್ರಾಮ ಪಂಚಾಯಿತಿಗಳನ್ನಾಗಿ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನ ಸಭಾಂಗಣದಲ್ಲಿ ಶನಿವಾರ ರಾಷ್ಟ್ರೀಯ ಕ್ಷಯ ರೋಗ ನಿರ್ಮೂಲನೆ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ಕ್ಷಯರೋಗ ತಿಳಿವಳಿಕೆ ಮತ್ತು ನಿರ್ಮೂಲನಾ ಅಭಿಯಾನ ಉದ್ಘಾಟಿಸಿ ಮಾತನಾಡಿದರು.
2025ರ ಅಂತ್ಯದ ಒಳಗೆ ಜಿಲ್ಲೆಯನ್ನು ಕ್ಷಯಮುಕ್ತ ಎಂದು ಘೋಷಿಸಲು ಜಿಲ್ಲಾಡಳಿತ ಗುರಿ ಹೊಂದಿದೆ. ಇದಕ್ಕೆ ಜಿಲ್ಲೆಯ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಕೋರಿದರು.
ಕ್ಷಯ ಮತ್ತು ಕುಷ್ಠರೋಗಿಗಳನ್ನು ಹಲವು ವರ್ಷಗಳ ಹಿಂದೆ ಅಮಾನವೀಯ ಮತ್ತು ಹೀನಾಯವಾಗಿ ನೋಡಲಾಗುತ್ತಿತ್ತು. ಆದರೆ ವೈದ್ಯಕೀಯ ವಿಜ್ಞಾನ, ನಾಗರಿಕತೆ ಬೆಳೆದಂತೆ ಪರಿಸ್ಥಿತಿ ಬದಲಾಗಿದೆ ಎಂದರು.
ಈ ಹಿಂದೆ ಸರಿಯಾದ ಚಿಕಿತ್ಸೆ ಮತ್ತು ಅರಿವಿನ ಕೊರತೆ ಕಾರಣದಿಂದ ಈ ಎರಡೂ ಕಾಯಿಲೆಗಳ ರೋಗಿಗಳನ್ನು ಹೀನವಾಗಿ ನಡೆಸಿಕೊಳ್ಳಲಾಗುತ್ತಿತ್ತು. ಈಗ ಕ್ಷಯ ಮತ್ತು ಕುಷ್ಠರೋಗಗಳು ಸಂಪೂರ್ಣವಾಗಿ ಗುಣಪಡಿಸುವ ಕಾಯಿಲೆಗಳು ಎಂದು ವೈದ್ಯಕೀಯ ವಿಜ್ಞಾನ ದೃಢಪಡಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಸಹಕಾರದೊಂದಿಗೆ ಇಡೀ ದೇಶಾದ್ಯಂತ ಕ್ಷಯ ಮತ್ತು ಕುಷ್ಠರೋಗಗಳನ್ನು ನಿರ್ಮೂಲನೆ ಮಾಡಲು ಉಚಿತ ಚಿಕಿತ್ಸೆಯ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಯೂ ಹಲವು ವರ್ಷಗಳಿಂದ ಆರೋಗ್ಯ ಇಲಾಖೆ ಕೈಗೊಂಡ ಪರಿಣಾಮಕಾರಿ ಕ್ರಮಗಳ ಕಾರಣ ಕ್ಷಯರೋಗ ಪ್ರಕರಣಗಳ ಸಂಖ್ಯೆ ಕಡಿಮೆ ಆಗುತ್ತಿದೆ ಎಂದು ಹೇಳಿದರು.
ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಹಮ್ಮಿಕೊಂಡಿರುವ ಈ ನೂರು ದಿನಗಳ ಅಭಿಯಾನಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು. ಕ್ಷಯಮುಕ್ತ ಜಿಲ್ಲೆ ಮಾಡುವ ವಿಶೇಷ ಅಭಿಯಾನದಲ್ಲಿ ಆಶಾ, ಆರೋಗ್ಯ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.
ಗ್ರಾಮೀಣ ಮತ್ತು ನಗರ ಭಾಗದ ಪ್ರತಿ ಮನೆಗೆ ಭೇಟಿ ನೀಡಿ ಪ್ರತಿಯೊಬ್ಬರನ್ನು ಕ್ಷಯರೋಗ ತಪಾಸಣೆಗೆ ಒಳಪಡಿಸಬೇಕು. ಒಂದು ವೇಳೆ ಯಾರಿಗಾದರೂ ರೋಗ ಪತ್ತೆಯಾದರೆ ಅವರಿಗೆ ಸರ್ಕಾರದಿಂದ ಸಿಗುವ ಸಂಪೂರ್ಣ ಉಚಿತ ಚಿಕಿತ್ಸೆ ಮತ್ತು ಪೌಷ್ಠಿಕ ಆಹಾರ ಸೌಲಭ್ಯಗಳನ್ನು ತಲುಪಿಸಬೇಕು ಎಂದರು.
ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಮಾರ್ಗಸೂಚಿಗಳಂತೆ ರೋಗಿಗಳಿಗೆ ಅಗತ್ಯ ಸಲಹೆ, ಸೂಚನೆ ಮತ್ತು ಮಾರ್ಗದರ್ಶನವನ್ನು ಸಿಬ್ಬಂದಿ ಮಾಡಲಿದ್ದಾರೆ ಎಂದರು.
ಈಗಾಗಲೇ ಕ್ಷಯರೋಗ ಮುಕ್ತ ಅಭಿಯಾನದಲ್ಲಿ ದೇಶದಲ್ಲಿ ಪರಿಣಾಮಕಾರಿಯಾಗಿ ಮತ್ತು ಉತ್ತಮವಾಗಿ ಕಾರ್ಯನಿರ್ವಹಿಸಿ ಗಮನಾರ್ಹ ಸಾಧನೆ ಮಾಡಿದ ಜಿಲ್ಲೆಗಳ ಪೈಕಿ ಚಿಕ್ಕಬಳ್ಳಾಪುರ ಜಿಲ್ಲೆಯೂ ಸ್ಥಾನ ಪಡೆದಿರುವುದು ಸಂತಸದ ಸಂಗತಿ ಎಂದರು.
ಈ 100 ದಿನಗಳ ಅಭಿಯಾನದಲ್ಲಿ ಜಿಲ್ಲೆಯಲ್ಲಿ ಗರಿಷ್ಠ 6 ಲಕ್ಷ ಜನರನ್ನು ತಪಾಸಣೆ ಮಾಡುವ ಗುರಿ ಹೊಂದಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೇಶನದಂತೆ ಜಿಲ್ಲಾ ಖನಿಜ ನಿಧಿಯಡಿ ₹ 60 ಲಕ್ಷವನ್ನು ಕ್ಷಯ ರೋಗಿಗಳ ಸಮತೋಲನ ಪೌಷ್ಠಿಕ ಆಹಾರಕ್ಕೆ ಮೀಸಲಿಡಲಾಗಿದೆ. ಎರಡು ವಾರಕ್ಕೂ ಹೆಚ್ಚು ಕೆಮ್ಮು ಇದ್ದಲ್ಲಿ ತಪಾಸಣೆಗೆ ಒಳಪಡುವುದು ಒಳ್ಳೆಯದು ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ಮಹೇಶ್ ಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕಿ ಡಾ. ಮಂಜುಳಾದೇವಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಶೇಖರರೆಡ್ಡಿ, ಪಟ್ರೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬೃಂದಾ, ಆರೋಗ್ಯ ಇಲಾಖೆಯ ಅಧಿಕಾರಿಗಳು, ತಾಲ್ಲೂಕು ವೈದ್ಯಾಧಿಕಾರಿಗಳು, ವೈದ್ಯರು, ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಆಶಾ, ಅಂಗನವಾಡಿ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.