ಚಿಕ್ಕಬಳ್ಳಾಪುರ: ನೀರಾವರಿ ತಜ್ಞ ಜಿ.ಎಸ್.ಪರಮಶಿವಯ್ಯ ವರದಿ ಆಧಾರಿತ ಶಾಶ್ವತ ನೀರಾವರಿ ಯೋಜನೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಜೂನ್ 27ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಿದ್ದೇವೆ. ಆ ಮೂಲಕ ಶಾಶ್ವತ ನೀರಾವರಿ ಯೋಜನೆ ಜಾರಿಗೆ ಒತ್ತಡ ಹೇರಲಿದ್ದೇವೆ. ಜನ ಹೋರಾಟ ರೂಪಿಸುವ ಮೂಲಕ ಯೋಜನೆ ಜಾರಿಗಾಗಿ ನಿರಂತರ ಒತ್ತಾಯ ಮಾಡಲಿದ್ದೇವೆ ಎಂದು ಸಿಪಿಎಂ ರಾಜ್ಯ ಘಟಕದ ಕಾರ್ಯದರ್ಶಿ ಜಿ.ವಿ.ಶ್ರೀರಾಮರೆಡ್ಡಿ ತಿಳಿಸಿದರು.
`ಹೋರಾಟ ಇನ್ನಷ್ಟು ಬಲಗೊಳ್ಳಲೆಂದು ಅವಿಭಜಿತಾ ಕೋಲಾರ ಜಿಲ್ಲಾ ಶಾಶ್ವತ ನೀರಾವರಿ ಹೋರಾಟ ಸಮಿತಿ, ಎಸ್‌ಎಫ್‌ಐ, ಡಿವೈಎಫ್‌ಐ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಜಾಗೃತಿ ಜಾಥಾ ಕೈಗೊಂಡಿದ್ದೇವೆ. ಕ್ರಾಂತಿಗೀತೆ, ಭಾಷಣ, ಸಮಾವೇಶ, ಗ್ರಾಮ ಸಭೆಗಳನ್ನು ನಡೆಸುವ ಮೂಲಕ ಜಾಗೃತಿ ಮೂಡಿಸುತ್ತಿದ್ದೇವೆ. ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಸಂಚರಿಸುತ್ತೇವೆ~ ಎಂದು ಅವರು ಈಚೆಗೆ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.
`ಜೂನ್ 27ಕ್ಕೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಳಿಕ ಬರಪೀಡಿತ ಎಂಟು ಜಿಲ್ಲೆಗಳಲ್ಲೂ ಹೋರಾಟ ವಿಸ್ತರಿಸಲಿದ್ದೇವೆ. ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ಹೋರಾಟ ಸಮಿತಿಗಳನ್ನು ರಚಿಸಿ, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಹೋರಾಟ ತೀವ್ರಗೊಳಿಸುತ್ತೇವೆ~ ಎಂದರು.
`ಜಾಥಾ ಇಲ್ಲಿಯವರೆಗೆ 1,225 ಗ್ರಾಮಗಳಿಗೆ ಭೇಟಿ ನೀಡಿದ್ದು, 1,500ಕ್ಕೂ ಹೆಚ್ಚು ಗ್ರಾಮಗಳಿಗೆ ಭೇಟಿ ನೀಡುವ ಉದ್ದೇಶವಿದೆ. ಭೇಟಿ ನೀಡಿದ ಪ್ರತಿಯೊಂದು ಗ್ರಾಮದಲ್ಲೂ ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದ್ದು, ಜನರು ಹೋರಾಟದಲ್ಲಿ ಪಾಲ್ಗೊಳ್ಳಲು ಆಸಕ್ತಿ ತೋರುತ್ತಿದ್ದಾರೆ~ ಎಂದರು.
`ಹತ್ತು ವರ್ಷಗಳಿಂದ ನಡೆಯುತ್ತಿರುವ ಹೋರಾಟವನ್ನು ಕೆಲವರು ದಾರಿ ತಪ್ಪಿಸುವ ಯತ್ನ ನಡೆಸುತ್ತಿದ್ದಾರೆ. ಕೇಂದ್ರ ಸಚಿವ ಎಂ.ವೀರಪ್ಪ ಮೊಯಿಲಿ ಮತ್ತು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಎತ್ತಿನಹೊಳೆ ಯೋಜನೆ ಬಗ್ಗೆ ಇಲ್ಲಸಲ್ಲದ ಭರವಸೆಗಳನ್ನು ನೀಡುತ್ತಿದ್ದು, ಶಾಶ್ವತ ನೀರಾವರಿ ಯೋಜನೆ ಜಾರಿಗೊಳಿಸದಿರಲು ವ್ಯವಸ್ಥಿತ ಪ್ರಯತ್ನ ಮಾಡುತ್ತಿದ್ದಾರೆ.
ಇಬ್ಬರೂ ಕರಾವಳಿ ಜನರ ಧೈರ್ಯವಾಗಿ ಎದುರಿಸುವ ಸ್ಥಿತಿಯಲ್ಲಿ ಇಲ್ಲ. ಪಶ್ಚಿಮಘಟ್ಟದ ಬದಲು ಎತ್ತಿನಹೊಳೆಯಿಂದ ನೀರು ಹರಿಸುವುದಾಗಿ ಸುಳ್ಳು ಹೇಳುತ್ತಿದ್ದಾರೆ~ ಎಂದು ಅಸಮಾಧಾನ ವ್ಯಕ್ತಪಡಿಸಿದರು.
`ಎತ್ತಿನಹೊಳೆ ಯೋಜನೆ ಯಾವುದೇ ಕಾರಣಕ್ಕೂ ಜಾರಿಯಾಗುವುದಿಲ್ಲ. ಹಾಸನ ಮತ್ತು ಸಕಲೇಶಪುರದ ವಿವಿಧ ಸಂಘ ಸಂಸ್ಥೆಗಳು ಯೋಜನೆ ಜಾರಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.
ಒಂದು ವೇಳೆ ಜಾರಿಯಾದರೂ ಚಿಕ್ಕಬಳ್ಳಾಪುರ ಮತ್ತು ಕೋಲಾರ ನಗರದಲ್ಲಿ ಕುಡಿಯುವ ನೀರಿಗೆ ಸಾಕಾಗುವುದೇ ಹೊರತು, ಬರಪೀಡಿತ ಎಂಟು ಜಿಲ್ಲೆಗಳಿಗೂ ನೀರು ಹರಿಸಲು ಸಾಧ್ಯವಾಗುವುದಿಲ್ಲ~ ಎಂದು ಜಿ.ವಿ.ಶ್ರೀರಾಮರೆಡ್ಡಿ ತಿಳಿಸಿದರು. ಸಿಪಿಎಂ ಜಿಲ್ಲಾ ಘಟಕದ ಕಾರ್ಯದರ್ಶಿ ಎಂ.ಪಿ.ಮುನಿವೆಂಕಟಪ್ಪ, ಕರ್ನಾಟಕ ಪ್ರಾಂತ ರೈತ ಸಂಘದ ಮುನಿಕೃಷ್ಣಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.