ADVERTISEMENT

ಒಳಮೀಸಲಾತಿ ಜಾರಿಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 12 ಜನವರಿ 2018, 9:24 IST
Last Updated 12 ಜನವರಿ 2018, 9:24 IST

ಚಿಕ್ಕಬಳ್ಳಾಪುರ: ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ವರದಿ ಜಾರಿಗೊಳಿಸಲು ರಾಜ್ಯ ಸರ್ಕಾರದ ಮಿನಮೇಷ ಎಣಿಸುತ್ತಿದೆ ಎಂದು ಆರೋಪಿಸಿ ಎ.ಜೆ. ಸದಾಶಿವ ಆಯೋಗದ ವರದಿ ಜಾರಿ ಹೋರಾಟ ಸಮಿತಿಯ ಪದಾಧಿಕಾರಿಗಳು ತಾಲ್ಲೂಕು ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು. ನಗರದ ಒಕ್ಕಲಿಗರ ಕಲ್ಯಾಣ ಮಂಟಪದಿಂದ ತಾಲ್ಲೂಕು ಕಚೇರಿವರೆಗೆ ಪ್ರತಿಭಟನಾ ಮೆರೆವಣೆಗೆ ನಡೆಸಿದ ಪ್ರತಿಭಟನಾಕಾರರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಜಿ.ವೆಂಕಟರಮಣಪ್ಪ, ‘ಪರಿಶಿಷ್ಟ ಜಾತಿಯ ಮೀಸಲಾತಿ ವರ್ಗೀಕರಣಕ್ಕಾಗಿ ನೇಮಕವಾಗಿದ್ದ ನ್ಯಾಯಮೂರ್ತಿ ಸದಾಶಿವ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಸಿ ಅನೇಕ ವರ್ಷಗಳಿವೆ. ಆಯೋಗದ ವರದಿಯನ್ನು ಯಥಾವತ್ತಾಗಿ ಅನುಮೋದಿಸಿ, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿ ಎಂದು ಒತ್ತಾಯಿಸಿ ಅನೇಕ ವರ್ಷಗಳಿಂದ ಹೋರಾಡುತ್ತ ಬರಲಾಗುತ್ತಿದೆ. ಆದರೆ ಸರ್ಕಾರ ನಮ್ಮ ಬೇಡಿಕೆ ಈಡೇರಿಸಲು ಮುಂದಾಗುತ್ತಿಲ್ಲ’ ಎಂದು ಹೇಳಿದರು.

‘ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ 101 ಪಂಗಡಗಳಿವೆ. ಇದಕ್ಕೆ ಅನುಗುಣ ವಾಗಿ ಶಿಕ್ಷಣ ಮತ್ತು ಉದ್ಯೋಗಗಳಿಗೆ ಶೇ15 ರಷ್ಟು ಮೀಸಲಾತಿ ಕಲ್ಪಿಸುವುದು ರಾಜ್ಯ ಮತ್ತು ಕೇಂದ್ರ ಸರ್ಕಾರದ ಕರ್ತವ್ಯವಾಗಬೇಕು. ಅದನ್ನು ಬಿಟ್ಟು ನಮ್ಮನ್ನಾಳುವ ರಾಜಕೀಯ ಪಕ್ಷಗಳು ಕಳೆದ 70 ವರ್ಷಗಳಿಂದ ಪರಿಶಿಷ್ಟ ಜಾತಿಗೆ ನ್ಯಾಯ ಬದ್ಧ ಮೀಸಲಾತಿ ಕಲ್ಪಿಸದೇ ಅನ್ಯಾಯ ಮಾಡಿದ್ದಾರೆ’ ಎಂದು ದೂರಿದರು.

ADVERTISEMENT

ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ಸಂಚಾಲಕ ಬಿ.ವಿ.ಆನಂದ್ ಮಾತನಾಡಿ, ‘ರಾಜ್ಯದಲ್ಲಿರುವ ಕಾಂಗ್ರೆಸ್‌ ಸರ್ಕಾರ ಸದಾಶಿವ ಆಯೋಗದ ವರದಿಯನ್ನು ಅನುಷ್ಠಾನಗೊಳಿಸಿ, ಕೇಂದ್ರಕ್ಕೆ ಶಿಫಾರಸು ಮಾಡಬೇಕು. ಇಲ್ಲದಿದ್ದರೆ ಕಾರಣ ತಿಳಿಸಬೇಕು. ಸಮಾಜದಲ್ಲಿ ಇವತ್ತು ಮಾದಿಗರಿಗೂ ಸಮಾನತೆ ದೊರೆಯಬೇಕಾಗಿದೆ. ಸಮುದಾಯದ ಮುಂದಿನ ಪೀಳಿಗೆಯ ಭವಿಷ್ಯದ ದೃಷ್ಟಿಯಿಂದಲಾದರೂ ಸದಾಶಿವ ಆಯೋಗದ ವರದಿ ಜಾರಿಯಾಗಲೇಬೇಕು’ ಎಂದು ಒತ್ತಾಯಿಸಿದರು.

‘ರಾಜ್ಯದಲ್ಲಿ ಮಾದಿಗರನ್ನು ರಾಜಕಾರಣಿಗಳು ಕೇವಲ ಮತಕ್ಕಾಗಿ ಬಳಸಿಕೊಳ್ಳುತ್ತಿರುವುದು ದುರಂತ. ಮಾದಿಗ ಸಮುದಾಯ ಇವತ್ತು ಹೀನಾಯ ಸ್ಥಿತಿ ತಲುಪಿದ್ದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅದರ ಏಳಿಗೆಗೆ ಮುಂದಾಗುತ್ತಿಲ್ಲ. ಇಂದಿಗೂ ವಿದ್ಯಾಭ್ಯಾಸ, ಉದ್ಯೋಗ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಮಾದಿಗರಿಗೆ ವಂಚನೆಯಾಗುತ್ತಲೇ ಇದೆ’ ಎಂದು ಆರೋಪಿಸಿದರು. ಮುಖಂಡರಾದ ಎಂ.ಮುನಿಕೃಷ್ಣಪ್ಪ, ಹೆಣ್ಣೂರು ಲಕ್ಷ್ಮೀ ನಾರಾಯಣಪ್ಪ, ರಾಮಕೃಷ್ಣಪ್ಪ, ರಾಜಶೇಖರ್‌, ಎಚ್‌.ಶ್ರೀನಿವಾಸ್‌, ರಮಣ ಅಖಿಲೇಶ್‌, ಮುನೀಂದ್ರ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.