ADVERTISEMENT

ಕರ್ನಾಟಕವನ್ನು ಸಿದ್ದರಾಮಯ್ಯ ಸರ್ಕಾರ ಭಯೋತ್ಪಾದನೆಯ ಕಾರ್ಖಾನೆಯನ್ನಾಗಿ ಮಾಡಿದೆ: ಬಿಜೆಪಿ ರಾಜ್ಯ ಉಸ್ತುವಾರಿ ಮುರುಳೀಧರ ರಾವ್

​ಪ್ರಜಾವಾಣಿ ವಾರ್ತೆ
Published 12 ಜನವರಿ 2018, 10:07 IST
Last Updated 12 ಜನವರಿ 2018, 10:07 IST
ಗೌರಿಬಿದನೂರಿನಲ್ಲಿ ಶುಕ್ರವಾರ ನಡೆದ ಬಿಜೆಪಿ ‘ಪರಿವರ್ತನಾ ಯಾತ್ರೆ’
ಗೌರಿಬಿದನೂರಿನಲ್ಲಿ ಶುಕ್ರವಾರ ನಡೆದ ಬಿಜೆಪಿ ‘ಪರಿವರ್ತನಾ ಯಾತ್ರೆ’   

ಚಿಕ್ಕಬಳ್ಳಾಪುರ: ‘ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಕುಂಟುತ್ತಿರುವ ಎತ್ತಿನಹೊಳೆ ಯೋಜನೆಯನ್ನು ತ್ವರಿತಗತಿಯಲ್ಲಿ ಅನುಷ್ಟಾನಕ್ಕೆ ತರುವ ಜತೆಗೆ ಜಿಲ್ಲೆಯ ಕೆರೆಗಳಿಗೆ ಬೆಂಗಳೂರಿನ ತ್ಯಾಜ್ಯ ನೀರು ಸಂಸ್ಕರಿಸಿ ಹರಿಸುವ ಯೋಜನೆಯನ್ನು ರದ್ದು ಮಾಡುತ್ತೇವೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಗೌರಿಬಿದನೂರಿನಲ್ಲಿ ಶುಕ್ರವಾರ ‘ಪರಿವರ್ತನಾ ಯಾತ್ರೆ’ ನಡೆಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಅನ್ನಭಾಗ್ಯ ಯೋಜನೆಯ ಅಕ್ಕಿಗೆ ಕೇಂದ್ರ ಸರ್ಕಾರ ₹29 ನೀಡುತ್ತಿದೆ. ಆದರೆ, ₹3 ನೀಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಟ್ಟಿ ಪ್ರಚಾರ ಪಡೆಯುತ್ತಿದ್ದಾರೆ. ಚುನಾವಣೆ ಸಮಯದಲ್ಲಿ ಕಾಂಗ್ರೆಸ್‌ನವರು ಅನ್ನಭಾಗ್ಯ ಯೋಜನೆ ದುರುಪಯೋಗಪಡಿಸುವ ಸಾಧ್ಯತೆ ಇದೆ. ಹೀಗಾಗಿ ಎಲ್ಲ ಪಡಿತರ ಅಂಗಡಿಗಳ ಮುಂದೆ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಅಳವಡಿಸಬೇಕು’ ಎಂದು ಆಗ್ರಹಿಸಿದರು.

ADVERTISEMENT

‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕೊಲೆ, ಸುಲಿಗೆ, ಅತ್ಯಾಚಾರ ಹೆಚ್ಚಾಗಿವೆ. ಇದನ್ನು ಗಮನಿಸಿಯೇ ಇತ್ತೀಚೆಗೆ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಇವತ್ತು ರಾಜ್ಯದಲ್ಲಿ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ಇತ್ತೀಚೆಗೆ ದಿನಕ್ಕೆ ₹200 ಕೋಟಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಿರುವುದು ಬರೀ ನಾಟಕ. ಕೇಂದ್ರ ನೀಡಿದ ಅನುದಾನದ ಬಗ್ಗೆ ಅಮಿತ್ ಷಾ ಅವರು ಪ್ರಶ್ನಿಸುವುದರಲ್ಲಿ ತಪ್ಪೇನಿದೆ’ ಎಂದು ಕೇಳಿದರು.

ರಾಹುಲ್‌ ಕಾಲಿಟ್ಟ ಕಡೆ ಕಾಂಗ್ರೆಸ್ ಭಸ್ಮ
ಬಿಜೆಪಿ ರಾಜ್ಯ ಉಸ್ತುವಾರಿ ಮುರುಳೀಧರ ರಾವ್ ಮಾತನಾಡಿ, ‘ರಾಹುಲ್ ಗಾಂಧಿ ಅವರದ್ದು ಐರನ್ ಲೆಗ್. ಅವರು ಕಾಲಿಟ್ಟ ಕಡೆ ಕಾಂಗ್ರೆಸ್ ಭಸ್ಮವಾಗಲಿದೆ. ಸಿದ್ದರಾಮಯ್ಯ ಅವರು ಕಮಿಷನ್ ಏಜೆಂಟ್‌ ಆಗಿ ಹೈಕಮಾಂಡ್ ಖಜಾನೆ ತುಂಬಿಸುತ್ತಿದ್ದಾರೆ. ಇಂತಹವರಿಂದ ಅಭಿವೃದ್ಧಿ ಎಲ್ಲಿ ಸಾಧ್ಯ? ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿರುವ ₹3 ಲಕ್ಷ ಕೋಟಿ ಏನಾಯ್ತು ಎನ್ನುವ ಬಗ್ಗೆ ಸಿದ್ದರಾಮಯ್ಯ ಲೆಕ್ಕ ಕೊಡಲಿ. ಇವತ್ತು ಕರ್ನಾಟಕವನ್ನು ಸಿದ್ದರಾಮಯ್ಯ ಅವರ ಸರ್ಕಾರ ಭಯೋತ್ಪಾದನೆಯ ಕಾರ್ಖಾನೆಯನ್ನಾಗಿ ಮಾಡಿದೆ’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.