ADVERTISEMENT

6 ತಿಂಗಳಲ್ಲಿ ಸಂಸ್ಕೃರಿಸಿದ ತ್ಯಾಜ್ಯ ನೀರು ಪೂರೈಕೆ

ಎತ್ತಿನಹೊಳೆ ಯೋಜನೆ ಜಾರಿಗೆ ವಿರೋಧ ಪಕ್ಷಗಳ ಅಡ್ಡಿ; ವೀರಪ್ಪ ಮೊಯಿಲಿ ಆರೋಪ

​ಪ್ರಜಾವಾಣಿ ವಾರ್ತೆ
Published 6 ಮೇ 2018, 8:48 IST
Last Updated 6 ಮೇ 2018, 8:48 IST

ಬಾಗೇಪಲ್ಲಿ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಆರು ತಿಂಗಳಲ್ಲಿ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಈ ಭಾಗದ ಕೆರೆಗಳಿಗೆ ತುಂಬಿಸಿ ಕೃಷಿಗೆ ಪೂರೈಸಲಾಗುವುದು ಎಂದು ಸಂಸದ ಎಂ. ವೀರಪ್ಪ ಮೊಯಿಲಿ ಭರವಸೆ ನೀಡಿದರು.

ತಾಲೂಕಿನ ಗೂಳೂರು ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಸ್.ಎನ್. ಸುಬ್ಬಾರೆಡ್ಡಿ ಪರ ಪ್ರಚಾರ ನಡೆಸಿದ ನಂತರ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿ ಕೆಲಸ ಮಾಡಿತು. ಆದರೆ ಕೆಲವು ತಾಂತ್ರಿಕ ಕಾರಣಗಳಿಂದ ವಿಳಂಬವಾಯಿತು ಎಂದು ಹೇಳಿದರು.

₹ 12 ಸಾವಿರ ಕೋಟಿ ಅನುದಾನದಲ್ಲಿ ಎತ್ತಿನಹೊಳೆ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಅದರಲ್ಲಿ ₹ 4 ಸಾವಿರ ಕೋಟಿ ಅನುದಾನ ಬಿಡುಗಡೆ ಮಾಡಿ, ಶೇ 60ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ವಿರೋಧಿ ಪಕ್ಷಗಳ ಕುತಂತ್ರ ರಾಜಕೀಯದಿಂದ ಕಾಮಗಾರಿಗೆ ಅಡ್ಡಿಯಾಗಿದೆ. ಮುಂದಿನ 2 ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಲು ಕಾಂಗ್ರೆಸ್‌ ಪಕ್ಷ ಬದ್ಧವಾಗಿದೆ ಎಂದು ತಿಳಿಸಿದರು.

ADVERTISEMENT

ಸಂಸ್ಕರಿಸಿದ ತ್ಯಾಜ್ಯ ನೀರು ಸರಬರಾಜು ಮತ್ತು ಎತ್ತಿನ ಹೊಳೆ ಯೋಜನೆ ಪೂರ್ಣಗೊಂಡರೆ ಬಯಲು ಸೀಮೆ ಜನರ ಕಷ್ಟಗಳು ನಿವಾರಣೆಯಾಗಲಿವೆ. ಕೆರೆಗಳಿಗೆ ನೀರು ತುಂಬಿ ಕೃಷಿ, ಕೈಗಾರಿಕೆಗಳ ಅಭಿವೃದ್ಧಿಗೆ ಸಹಕಾರಿ ಆಗಲಿವೆ. ಈ ನಿಟ್ಟಿನಲ್ಲಿ ಕಾಂಗ್ರೆಸ್‌ ಪಕ್ಷ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 147ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು, ಮತ್ತೆ ಅಧಿಕಾರಕ್ಕೆ ಬರಲಿದೆ. ರಾಜ್ಯ ಸರ್ಕಾರದ ಸಾಧನೆಗಳೂ ಇದಕ್ಕೆ ಪೂರಕವಾದ ವಾತಾವರಣವನ್ನು ನಿರ್ಮಿಸಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚಿಕ್ಕನರಸಿಂಹಯ್ಯ ಉಚ್ಚಾಟನೆಗೆ ಒತ್ತಾಯ: ಜಿಲ್ಲಾ ಪಂಚಾಯತಿ ಕಾಂಗ್ರೆಸ್ ಪಕ್ಷದ ಸದಸ್ಯರಾಗಿರುವ ಎಂ.ಬಿ. ಚಿಕ್ಕನರಸಿಂಹಯ್ಯ ಜೆಡಿಎಸ್‌ ಅಭ್ಯರ್ಥಿ ಸಿ.ಆರ್. ಮನೋಹರ್ ಪರ ಮತಯಾಚನೆ ಮಾಡುತ್ತಿದ್ದಾರೆ. ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ವೀರಪ್ಪ ಮೊಯಿಲಿ, ಚಿಕ್ಕನರಸಿಂಹಯ್ಯ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲು ವರಿಷ್ಠರಿಗೆ ಮನವಿ ಮಾಡಲಾಗುವುದು. ಶೀಘ್ರ ಈ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮಾತನಾಡಿ, ಅಧಿಕಾರ ಹಾಗೂ ಉನ್ನತ ಸ್ಥಾನಮಾನ ನೀಡಿರುವ ಪಕ್ಷಕ್ಕೆ ದ್ರೋಹ ಬಗೆದು ಬೆನ್ನಿಗೆ ಚೂರಿ ಹಾಕುವ ವ್ಯಕ್ತಿಗಳನ್ನು ಯಾರು ನಂಬುವುದಿಲ್ಲ. ಸಮಾಜಸೇವೆ ಹಾಗೂ ಅಭಿವೃದ್ಧಿ ಗುರುತಿಸಿ ಕ್ಷೇತ್ರದ ಜನರು ತಮಗೆ ಅರ್ಶೀವಾದ ಮಾಡಿದ್ದಾರೆ. ಅವರ ವಿಶ್ವಾಸಕ್ಕೆ ಧಕ್ಕೆ ಬಾರದಂತೆ ಕೆಲಸ ಮಾಡಲಾಗುವುದು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಲಕ್ಷ್ಮೀನರಸಿಂಹಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಆರ್.ನರೇಂದ್ರಬಾಬು, ಮಾಜಿ ಅಧ್ಯಕ್ಷ ಕೆ.ಎಂ. ರಾಮರೆಡ್ಡಿ, ಕಾಂಗ್ರೆಸ್ ಬ್ಲಾಕ್ ಘಟಕದ ಅಧ್ಯಕ್ಷ ಎಚ್.ಎಸ್. ನರೇಂದ್ರ, ಮಾಜಿ ಅಧ್ಯಕ್ಷ ಶ್ರೀನಿವಾಸರೆಡ್ಡಿ, ಪುರಸಭೆ ಸದಸ್ಯ ಅಶೋಕರೆಡ್ಡಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಶ್ರೀನಿವಾಸರೆಡ್ಡಿ, ಕೆಡಿಪಿ ಸದಸ್ಯ ಅಮರನಾಥರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.