ADVERTISEMENT

ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಿಗೆ 7 ಸಾವಿರ ಪ್ರಾಧ್ಯಾಪಕರ ನೇಮಕ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2024, 18:24 IST
Last Updated 4 ಫೆಬ್ರುವರಿ 2024, 18:24 IST
ಚಿಂತಾಮಣಿಯ ಸರ್ಕಾರಿ ಪ್ರಥಮದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದಲ್ಲಿ ಶನಿವಾರ ನಡೆದ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮಾತನಾಡಿದರು
ಚಿಂತಾಮಣಿಯ ಸರ್ಕಾರಿ ಪ್ರಥಮದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದಲ್ಲಿ ಶನಿವಾರ ನಡೆದ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮಾತನಾಡಿದರು   

ಚಿಂತಾಮಣಿ: ರಾಜ್ಯದ ಪ್ರಥಮ ದರ್ಜೆ ಸರ್ಕಾರಿ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಧ್ಯಾಪಕ ಹುದ್ದೆಗಳಿಗೆ 7 ಸಾವಿರ ಮಂದಿಯನ್ನು ನೇಮಕ ಮಾಡಿಕೊಳ್ಳಲು ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.

ಸರ್ಕಾರಿ ಪ್ರಥಮದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದಲ್ಲಿ ಶನಿವಾರ ನಡೆದ ಕಾಲೇಜು ಅಭಿವೃದ್ಧಿ ಸಮಿತಿ ಸಭೆಯಲ್ಲಿ ಮಾತನಾಡಿದರು.

ಕಳೆದ 5 ವರ್ಷಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಕಾಲೇಜುಗಳ ಸಂಖ್ಯೆ ಹೆಚ್ಚಾಗಿದೆ. ಹೊಸ ಹೊಸ ಕೋರ್ಸ್ ಆರಂಭಿಸಲಾಗಿದೆ. ಆದರೆ ಬೋಧಕವರ್ಗ ಮತ್ತು ಸಿಬ್ಬಂದಿಯನ್ನು ಮಾತ್ರ ನೇಮಕ ಮಾಡಿಲ್ಲ. ಹೀಗಾಗಿ ಬಹುತೇಕ ಕಾಲೇಜುಗಳಲ್ಲಿ ಪ್ರಾಧ್ಯಾಪಕರ ಹುದ್ದೆಗಳು ಖಾಲಿ ಇವೆ. ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದು ಎಂದು ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಶೀಘ್ರವಾಗಿ ಬೋಧಕರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ ಎಂದು ಹೇಳಿದರು.

ADVERTISEMENT

ಚಿಂತಾಮಣಿಯಲ್ಲಿ ಸುಮಾರು ₹70 ಕೋಟಿ ವೆಚ್ಚದಲ್ಲಿ ನೂತನ ಎಂಜಿನಿಯರಿಂಗ್ ಕಾಲೇಜು ಕಟ್ಟಡ ನಿರ್ಮಾಣಕ್ಕೆ ನೀಲನಕ್ಷೆ ತಯಾರಿಸಲಾಗಿದೆ. ನೆಲ ಅಂತಸ್ತಿನ ಕಟ್ಟಡ ನಿರ್ಮಾಣ ಕಾಮಗಾರಿಗೆ ಅಗತ್ಯವಾದ ಸಿದ್ಧತಾ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ. ಹಂತ ಹಂತವಾಗಿ ಅನುದಾನ ಕ್ರೋಢೀಕರಿಸಿ ಆಧುನಿಕ ವಿನ್ಯಾಸದಲ್ಲಿ ನಿರ್ಮಾಣ ಮಾಡಲಾಗುವುದು. ಮುಂದಿನ ಶೈಕ್ಷಣಿಕ ವರ್ಷದಿಂದಲೇ ಕಾಲೇಜು ಆರಂಭಿಸಲಾಗುವುದು. ಸದ್ಯಕ್ಕೆ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ತರಗತಿ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಸರ್ಕಾರಿ ಕಾಲೇಜುಗಳನ್ನು ಖಾಸಗಿ ಕಾಲೇಜುಗಳ ರೀತಿಯಲ್ಲಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರಕ್ಕೆ ₹14 ಕೋಟಿ ಹಾಗೂ ಸರ್ಕಾರಿ ಮಹಿಳಾ ಕಾಲೇಜಿಗೆ ₹7.5 ಕೋಟಿ ವೆಚ್ಚದಲ್ಲಿ ಹೆಚ್ಚುವರಿ ಕಟ್ಟಡಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ ಎಂದರು.

ಸರ್ಕಾರಿ ಕಟ್ಟಡಗಳೆಂದರೆ ಮೂಗು ಮುರಿಯುವ ಕಾಲ ಹೋಯಿತು. ಸರ್ಕಾರಿ ಕಾಲೇಜುಗಳಲ್ಲಿಯೂ ಸುಸಜ್ಜಿತ ಸೌಲಭ್ಯ, ತಂತ್ರಜ್ಞಾನವನ್ನು ಒದಗಿಸಲಾಗುವುದು. ಖಾಸಗಿ ಕಾಲೇಜುಗಳನ್ನು ಮೀರಿಸುವಂತೆ ಅತ್ಯಾಧುನಿಕ ಕಟ್ಟಡ ನಿರ್ಮಾಣಕ್ಕೆ ಬೆಂಗಳೂರಿನ ಎಂಜಿನಿಯರ್‌ಗಳ ತಂಡದಿಂದ ನೀಲನಕ್ಷೆ ಸಿದ್ಧಪಡಿಸಲಾಗಿದೆ. ಅನುದಾನವನ್ನು ಕ್ರೋಢೀಕರಿಸಿಕೊಂಡು ಹಂತ ಹಂತವಾಗಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕಾಲೇಜುಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಕಾಲೇಜು ಅಭಿವೃದ್ಧಿ ಸಮಿತಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಸಹಕಾರ ನೀಡಬೇಕು. ಕಾಲೇಜುಗಳಿಗೆ ಅಗತ್ಯವಾದ ಭೌತಿಕ ಸೌಲಭ್ಯಗಳನ್ನು ಸರ್ಕಾರ ಒದಗಿಸುತ್ತದೆ. ಬೋಧಕ ಮತ್ತು ಬೋಧಕೇತರ ವರ್ಗದವರು ತಮ್ಮ ಕರ್ತವ್ಯಗಳನ್ನು ಸಮರ್ಪಕ ಮತ್ತು ಪರಿಣಾಮಕಾರಿಯಾಗಿ ನಿರ್ವಹಿಸುವ ಮೂಲಕ ಖಾಸಗಿ ಕಾಲೇಜುಗಳ ಶಿಕ್ಷಣವನ್ನು ಮೀರಿಸುವ ಕಲಿಕಾ ವಾತಾವರಣ ನಿರ್ಮಿಸಬೇಕು ಎಂದರು.

ರಾಷ್ಟ್ರೀಯ ಮೌಲ್ಯ ಮಾಪನ ಮತ್ತು ಮಾನ್ಯತೆ (ನ್ಯಾಕ್) ಸಮಿತಿಯ ಮುಂದಿನ ಭೇಟಿ ಸಂದರ್ಭದಲ್ಲಿ ಉನ್ನತ ಗ್ರೇಡ್ ದೊರೆಯಲು ಶ್ರಮಿಸಬೇಕು. ಬೋಧಕರ ಕಾರ್ಯದಕ್ಷತೆ, ಶೈಕ್ಷಣಿಕ ಫಲಿತಾಂಶ, ಕಲಿಕಾ ವಾತಾವರಣ ಎಲ್ಲವನ್ನು ಅವರು ಗಮನಿಸುತ್ತಾರೆ. ಪ್ರಸ್ತುತ ಲಭ್ಯವಿರುವ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಕಾಲೇಜನ್ನು ಅಭಿವೃದ್ಧಿಪಡಿಸಲು ಪ್ರಾಂಶುಪಾಲರಿಗೆ ಸೂಚನೆ ನೀಡಿದರು.

ನೂತನ ಎಂಜಿನಿಯರಿಂಗ್ ಕಾಲೇಜಿನ ಕಟ್ಟಡ, ಸರ್ಕಾರಿ ಪ್ರಥಮದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರ ಮತ್ತು ಮಹಿಳಾ ಕಾಲೇಜುಗಳ ಹೆಚ್ಚುವರಿ ಕಟ್ಟಡಗಳ ನೀಲನಕ್ಷೆಗಳನ್ನು ವೀಕ್ಷಿಸಿದರು.

ಪ್ರಾಂಶುಪಾಲೆ ಎಚ್.ಜಿ.ಸುಗುಣ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಪ್ರೊ.ಕೃಷ್ಣಮೂರ್ತಿ, ಅಕ್ಷಯ್ ಕುಮಾರ್, ವೆಂಕಟರಮಣ, ಜಗದೀಶ್ವರರೆಡ್ಡಿ, ಶ್ರೀನಿವಾಸ್, ಪೌರಾಯುಕ್ತ ಜಿ.ಎನ್.ಚಲಪತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.