ADVERTISEMENT

ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಿ

‘ಕೃಷಿ ಮೇಳ 2020’ ಸಿರಿಧಾನ್ಯಗಳ ಹಬ್ಬ ಹಾಗೂ ಫಲಪುಷ್ಪ ಪ್ರದರ್ಶನಕ್ಕೆ ತೆರೆ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2020, 5:33 IST
Last Updated 17 ಫೆಬ್ರುವರಿ 2020, 5:33 IST
ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.   

ಚಿಕ್ಕಬಳ್ಳಾಪುರ: ‘ರೈತರು ಸಾವಯವ ಮತ್ತ ಸಿರಿಧಾನ್ಯಗಳನ್ನು ಒಳಗೊಂಡಂತೆ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವುದರಿಂದ ಹೆಚ್ಚಿನ ಪ್ರಯೋಜನ ಪಡೆದುಕೊಳ್ಳಬಹುದು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆ ಪ್ರಾಂತೀಯ ಸಹಕಾರ ಸಾವಯವ ಕೃಷಿಕರ ಸಂಘಗಳ ಒಕ್ಕೂಟದ ಸಹಯೋಗದಲ್ಲಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ‘ಕೃಷಿ ಮೇಳ 2020’ ಸಿರಿಧಾನ್ಯಗಳ ಹಬ್ಬ ಹಾಗೂ ಫಲಪುಷ್ಪ ಪ್ರದರ್ಶನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಸಿರಿಧಾನ್ಯಗಳನ್ನು ಕಡಿಮೆ ನೀರಿನಲ್ಲಿ ಸುಲಭವಾಗಿ ಬೆಳೆಯಬಹುದಾಗಿದೆ. ನಮ್ಮ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆ ಇರುವುದರಿಂದ ರೈತರು ಕಡಿಮೆ ನೀರಿನಲ್ಲಿ ಬೆಳೆಯುವ ಸಿರಿಧಾನ್ಯಗಳನ್ನು ಬೆಳೆಯಲು ಆದ್ಯತೆ ನೀಡಬೇಕು. ಜನರು ಇವತ್ತು ಆರೋಗ್ಯಕ್ಕೆ ಒತ್ತು ನೀಡುತ್ತಿರುವುದಿಂದ ಸಿರಿಧಾನ್ಯಗಳಿಗೆ ವರ್ಷಪೂರ್ತಿ ಮಾರುಕಟ್ಟೆ ಸಿಗಲಿದೆ. ವಿದೇಶಗಳಲ್ಲಿ ಕೂಡ ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಹೀಗಾಗಿ ನಮ್ಮಲ್ಲಿ ಸಿರಿಧಾನ್ಯ ಬೆಳೆಯುವ ಪ್ರದೇಶ ವಿಸ್ತರಿಸುವ ಅಗತ್ಯವಿದೆ’ ಎಂದು ಹೇಳಿದರು.

ADVERTISEMENT

‘ರಾಗಿಯಷ್ಟೇ, ಸಿರಿಧಾನ್ಯಗಳಾದ ನವಣೆ, ಆರ್ಕ, ಸಾಮೆ, ಊದಲು, ಬರಗು, ಸಜ್ಜೆ, ಕೊರಲು ಆರೋಗ್ಯದ ದೃಷ್ಟಿಯಿಂದ ಉತ್ತಮ ಧಾನ್ಯಗಳಾಗಿವೆ. ಜನರು ಕೂಡ ಬಾಯಿ ಚಪಲಕ್ಕಾಗಿ ಸಿಕ್ಕಸಿಕ್ಕ ಆಹಾರ ತಿಂದು ಆರೋಗ್ಯ ಕೆಡಿಸಿಕೊಳ್ಳುವ ಬದಲು ಆಹಾರದಲ್ಲಿ ಸಿರಿಧಾನ್ಯಗಳಿಗೆ ಒತ್ತು ನೀಡಿದರೆ ಅದರಿಂದ ಆರೋಗ್ಯವೂ ಚೆನ್ನಾಗಿರುತ್ತದೆ ಜತೆಗೆ ಸಿರಿಧಾನ್ಯಗಳ ಬೆಳೆಯುವ ರೈತರಿಗೂ ಉತ್ತೇಜನ ನೀಡಿದಂತಾಗುತ್ತದೆ’ ಎಂದರು.

ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು. ಮೇಳದ ಯಶಸ್ಸಿಗೆ ಶ್ರಮಿಸಿದ ವಿವಿಧ ಇಲಾಖೆಗಳ ಸಿಬ್ಬಂದಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕಿ ರೂಪಾ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕುಮಾರಸ್ವಾಮಿ, ಕೃಷಿ ಇಲಾಖೆಯ ಉಪನಿರ್ದೇಶಕಿ ಅನುರೂಪಾ,ರೈತ ಸಂಘದ ಮುಖಂಡರು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.