ಚಿಕ್ಕಬಳ್ಳಾಪುರ: ಜಿಲ್ಲೆಯ ಹಿರೇನಾಗವಲ್ಲಿ ಬಳಿ ನಡೆದ ಜಿಲೆಟಿನ್ ಸ್ಫೋಟ ದುರಂತ ಪ್ರಕರಣದ ಬೆನ್ನಲ್ಲೇ, ಜಿಲ್ಲೆಯ ಎಲ್ಲ ಕ್ವಾರಿ, ಕ್ರಷರ್‌ಗಳಲ್ಲಿ ಸ್ಫೋಟಕಗಳ ಪ್ರಮಾಣ ಹಾಗೂ ಸರಬರಾಜು ಸೇರಿದಂತೆ ಸುರಕ್ಷತಾ ಕ್ರಮಗಳ ಕುರಿತು ಚರ್ಚೆ ನಡೆಸಲು ಅಧಿಕಾರಿಗಳೊಂದಿಗೆ ಗುರುವಾರ ಟಾಸ್ಕ್ ಪೋರ್ಸ್ ಸಭೆ ನಡೆಸುವುದಾಗಿ ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.
ಶಿವಮೊಗ್ಗದ ಹುಣಸೋಡು ದುರಂತದ ಬೆನ್ನಲ್ಲೇ ಜಿಲ್ಲೆಯ ಎಲ್ಲ ಕಲ್ಲು ಕ್ವಾರಿ, ಗಣಿ ಗುತ್ತಿದಾರರೊಂದಿಗೆ ಸಭೆ ನಡೆಸಲಾಗಿತ್ತು. ಜೊತೆಗೆ, ಸ್ಫೋಟಕಗಳನ್ನು ಹೇಗೆ ಬಳಸಬೇಕು ಎಂಬುದರ ಬಗ್ಗೆ ಗುತ್ತಿಗೆದಾರರಿಗೆ ಮಾಹಿತಿ ನೀಡಲು ಬೆಂಗಳೂರಿನಿಂದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ತಜ್ಞರನ್ನು ಕರೆಸಿ ವಿಶೇಷ ಕಾರ್ಯಾಗಾರ ನಡೆಸಲಾಗಿತ್ತು ಎಂದು ತಿಳಿಸಿದರು.
ಫೆ.7ರಂದು ಹಿರೇನಾಗವಲ್ಲಿಯ ಭ್ರಮರವಾಸಿನಿ ಕ್ರಷರ್ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಸ್ಫೋಟಕ ಸಂಗ್ರಹದ ಬಗ್ಗೆ ಪರಿಶೀಲನೆ ನಡೆಸಿದ್ದರು. ಅದು ಸಕ್ರಮವಾಗಿ ನಡೆಯುತ್ತಿರುವ ಗಣಿ. ಆದರೆ ಸ್ಫೋಟಕಗಳ ದಾಸ್ತಾನು ಮತ್ತು ಬಳಕೆಯಲ್ಲಿ ಕಾನೂನು ಪಾಲನೆ ಮಾಡುತ್ತಿರಲಿಲ್ಲ. ಆ ಕಾರಣಕ್ಕೆ ಅದೇ ದಿನ ಕ್ವಾರಿಯನ್ನು ಸ್ಥಗಿತಗೊಳಿಸಲು ಆದೇಶಿಸಿ ದೂರು ದಾಖಲು ಮಾಡಲಾಗಿತ್ತು. ಮತ್ತೆ ಪರಿಶೀಲನೆಗಾಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇದರಿಂದ
ಆತಂಕಕ್ಕೆ ಒಳಗಾದ ಮಾಲೀಕರು ಅಕ್ರಮವಾಗಿ ದಾಸ್ತಾನು ಮಾಡಿದ್ದ ಸ್ಫೋಟಕಗಳನ್ನು ಸಮೀಪದ ಕಾಡಿನಲ್ಲಿ ವಿಲೇವಾರಿ ಮಾಡಲು ಕೆಲಸಗಾರರಿಗೆ ಸೂಚನೆ ನೀಡಿದ್ದರು.ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳದ ಕಾರಣಕ್ಕೆ ಅನಾಹುತ ಸಂಭವಿಸಿದೆ ಎಂದು ವಿವರಿಸಿದರು.
ಪ್ರಕರಣ ಸಂಬಂಧ ಪೊಲೀಸ್ ಅಧಿಕಾರಿಗಳು ಈಗಾಗಲೇ ಮಾಲೀಕರನ್ನು ಬಂಧಿಸಿದ್ದು, ತನಿಖೆ ಮುಂದುವರಿಸಿದ್ದಾರೆ ಎಂದು ಹೇಳಿದರು.
ಸರ್ಕಾರದ ಸೂಚನೆಯಂತೆ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ, ಸ್ಫೋಟಕಗಳ ಸರಬರಾಜು, ದಾಸ್ತಾನು ಮತ್ತು ಬಳಕೆಗೆ ಸಂಬಂಧಿಸಿ ಕಟ್ಟುನಿಟ್ಟು ಕ್ರಮ ತೆಗೆದುಕೊಳ್ಳಲಾಗಿದೆ. ನಿಯಮಿತವಾಗಿ ಗಣಿ
ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿರುವ ಎಲ್ಲ ಕಲ್ಲು ಕ್ವಾರಿ, ಕ್ರಷರ್‌ಗಳಲ್ಲಿ ಸ್ಫೋಟಕಗಳ ಪ್ರಮಾಣ ಎಷ್ಟಿದೆ ಎಂಬುದರ ಬಗ್ಗೆ ಪರಿಶೀಲನೆ ಮುಂದಿನ ಆದೇಶದವರೆಗೆ ಬಂದ್ ಮಾಡುವಂತೆ ಸೂಚನೆ ನೀಡಲಾಗಿದೆ. ಜೊತೆಗೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.