
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಾಗಿ 18 ವರ್ಷ ಕಳೆದಿದ್ದರೂ ಇದುವರೆಗೆ ಜಿಲ್ಲಾ ಕೇಂದ್ರದಲ್ಲಿ ಬಿ.ಆರ್.ಅಂಬೇಡ್ಕರ್ ಭವನ, ಬಾಬು ಜಗಜೀವನರಾಂ ಭವನ ನಿರ್ಮಾಣ ಆಗದಿರುವುದನ್ನು ಆಯೋಗವು ಗಂಭೀರವಾಗಿ ಪರಿಗಣಿಸಿದೆ ಎಂದು ರಾಜ್ಯ ಅನುಸೂಚಿತ ಜಾತಿ ಮತ್ತು ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಮೂರ್ತಿ ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲಾಡಳಿತ ಭವನದಲ್ಲಿ ಸೋಮವಾರ ರಾಜ್ಯ ಅನುಸೂಚಿತ ಜಾತಿ ಮತ್ತು ಬುಡಕಟ್ಟು ಸಮುದಾಯಗಳ ಕುಂದುಕೊರತೆ ಹಾಗೂ ಸಮಸ್ಯೆಗಳ ಅಹವಾಲು ಸ್ವೀಕರಿಸಿ ಮಾತನಾಡಿದರು.
ಭವನಗಳ ನಿರ್ಮಾಣಕ್ಕೆ ಜಮೀನು ಹಾಗೂ ಅನುದಾನ ಬಿಡುಗಡೆ ಆಗಿದೆ. ನಿರ್ಮಾಣಕ್ಕೆ ಅಗತ್ಯ ಕ್ರಮಕೈಗೊಳ್ಳಬೇಕು. ಅನುಸೂಚಿತ ಜಾತಿ ಮತ್ತು ಬುಡಕಟ್ಟು ಸಮುದಾಯಗಳ ಸಮಸ್ಯೆ ಹಾಗೂ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಆಯೋಗದಲ್ಲಿ 2,488 ಪ್ರಕರಣ ದಾಖಲಾಗಿವೆ. ಈ ಪ್ರಕರಣಗಳನ್ನು ಇತ್ಯರ್ಥಪಡಿಸುವ ನಿರಂತರ ಪ್ರಯತ್ನ ಆಯೋಗ ಮಾಡುತ್ತಿದೆ. ಕಳೆದ 3 ತಿಂಗಳಲ್ಲಿ 78 ಪ್ರಕರಣ ವಿಲೆ ಮಾಡಲಾಗಿದೆ ಎಂದು ಹೇಳಿದರು.
ಅನುಸೂಚಿತ ಜಾತಿ ಮತ್ತು ಬುಡಕಟ್ಟು ಸಮುದಾಯದವರು ಸಲ್ಲಿಸಿರುವ ಅಹವಾಲುಗಳ ವಿಲೇವಾರಿಗೆ ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡಲಾಗುವುದು. ಪತ್ರ ವ್ಯವಹಾರಕ್ಕೆ ಸ್ಪಂದಿಸದಿದ್ದರೆ ಆಯೋಗವೇ ದೂರು ದಾಖಲಿಸಿಕೊಂಡು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತದೆ. ಅರ್ಜಿ ವಿಲೇವಾರಿಗೆ ತ್ವರಿತ ಕ್ರಮವಹಿಸುತ್ತದೆ ಎಂದರು.
ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಅನುದಾನ ಬಳಕೆ ಮಾಡದೇ ನಿರ್ಲಕ್ಷ್ಯ ವಹಿಸಿರುವವರಿಗೆ ನಿರ್ದಾಕ್ಷಿಣ್ಯ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಅಧಿಕಾರಿಗಳನ್ನು ಎಚ್ಚರಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಆಯೋಗದ ಕಾರ್ಯದರ್ಶಿ ಎಚ್.ಎಸ್.ಶಿವರಾಮು, ಸದಸ್ಯ ಎಂ.ಕುಂಬಯ್ಯ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಎಚ್.ಅಶ್ವಿನ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ತೇಜಾನಂದರೆಡ್ಡಿ ಇದ್ದರು.
ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ
ಜಿಲ್ಲೆಯ ಅನೇಕ ಕಡೆ ಅಕ್ರಮ ಮದ್ಯ ಮಾರಾಟವು ಎಗ್ಗಿಲ್ಲದೆ ನಡೆಯುತ್ತಿದೆ. ಇಂತಹ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕಬೇಕು. ದಲಿತರು ರೈತರ ಜಮೀನು ಒತ್ತುವರಿ ಸಮಸ್ಯೆ ಸ್ಮಶಾನ ಭೂಮಿ ಹಾಗೂ ದಾರಿ ಸಮಸ್ಯೆ ಪರಿಹರಿಸಬೇಕು ಎಂದು ಮೂರ್ತಿ ತಾಕೀತು ಮಾಡಿದರು. ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ವೇಳೆ ಹಾಗೂ ಅನೇಕ ವರ್ಷಗಳಿಂದ ಸಾಗುವಳಿ ಮಾಡಿಕೊಂಡಿರುವ ಕೆಲ ದಲಿತ ಕುಟುಂಬಗಳನ್ನು ಒಕ್ಕಲೆಬ್ಬಿಸಲಾಗುತ್ತಿದೆ. ಒಂದು ವೇಳೆ ಒಕ್ಕಲೆಬ್ಬಿಸುವುದು ಅನಿವಾರ್ಯವಿದ್ದಲ್ಲಿ ಆ ಸಮುದಾಯಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.