ಚಿಕ್ಕಬಳ್ಳಾಪುರ: ಮಾಸಿಕ ₹ 10 ಸಾವಿರ ಗೌರವಧನ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಗರದ ಜಿಲ್ಲಾಡಳಿತ ಭವನದ ಮುಂಭಾಗ ಮಂಗಳವಾರದಿಂದ ಪ್ರತಿಭಟನೆ ಆರಂಭಿಸಿದ್ದಾರೆ. ಆ.14ರವರೆಗೆ ಪ್ರತಿಭಟನೆ ನಡೆಯಲಿದೆ.
ಮುಖ್ಯಮಂತ್ರಿ ಘೋಷಿಸಿದ ರಾಜ್ಯದ ಗೌರವಧನ ಮತ್ತು ಕೇಂದ್ರದ ಭಾಗಶಃ ಪ್ರೋತ್ಸಾಹಧನ ಸೇರಿಸಿ ಮಾಸಿಕ ₹ 10 ಸಾವಿರ ಗೌರವಧನವನ್ನು ಜಾರಿಗೊಳಿಸಬೇಕು. ಇದು ಏಪ್ರಿಲ್‌ನಿಂದ ಅನ್ವಯವಾಗಬೇಕು. ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ₹ 1 ಸಾವಿರ ಪ್ರೋತ್ಸಾಹ ಧನ ಹೆಚ್ಚಿಸಿದಂತೆ ಆಶಾ ಕಾರ್ಯಕರ್ತೆಯರಿಗೂ ಸಹ ಹೆಚ್ಚಳ ಮಾಡಬೇಕು.
ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು. ಅವೈಜ್ಞಾನಿಕವಾದ ಮೌಲ್ಯಮಾಪನ ಕಾರ್ಯವನ್ನು ಕೈಬಿಡಬೇಕು. ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರಿಸಬೇಕು. ನಿವೃತ್ತರಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡುಗಂಟು ನೀಡಬೇಕು. ನಗರ ಪ್ರದೇಶದ ಆಶಾ ಕಾರ್ಯಕರ್ತೆಯರಿಗೆ ₹ 2 ಸಾವಿರ ಗೌರವಧನ ಹೆಚ್ಚಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.
ರಾಜ್ಯ ಮತ್ತು ಕೇಂದ್ರ ಸರ್ಕಾರವು ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಘೋಷಣೆಗಳನ್ನು ಕೂಗಿದರು.
ಸಂಘಟನೆಯ ಮುಖಂಡರಾದ ಸರಸ್ವತಮ್ಮ, ರೇಷ್ಮಾ, ಸುಶೀಲಾ, ಮಂಜುಳಾ, ಜಯಮ್ಮ, ರಾಜಶೇಖರ್, ಜಯಣ್ಣ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.