ADVERTISEMENT

ಬಿಜೆಪಿ ಅಭ್ಯರ್ಥಿ ಗೆಲುವು ನಿಶ್ಚಿತ: ಸುಧಾಕರ್ ವಿಶ್ವಾಸ

ಬಿಜೆಪಿ ಅಭ್ಯರ್ಥಿ ಚಿದಾನಂದ್ ಎಂ.ಗೌಡ ಅವರ ಪರ ಪ್ರಚಾರ ಸಭೆಯಲ್ಲಿ ಸಚಿವ ಡಾ.ಕೆ.ಸುಧಾಕರ್ ವಿಶ್ವಾಸ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2020, 14:13 IST
Last Updated 10 ಅಕ್ಟೋಬರ್ 2020, 14:13 IST
ಪ್ರಚಾರ ಸಭೆಯಲ್ಲಿ ಸಚಿವ ಡಾ.ಕೆ.ಸುಧಾಕರ್ ಅವರು ಮಾತನಾಡಿದರು.
ಪ್ರಚಾರ ಸಭೆಯಲ್ಲಿ ಸಚಿವ ಡಾ.ಕೆ.ಸುಧಾಕರ್ ಅವರು ಮಾತನಾಡಿದರು.   

ಚಿಕ್ಕಬಳ್ಳಾಪುರ: ‘ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ 50 ವರ್ಷಗಳಿಂದ ವಿರೋಧ ಪಕ್ಷ ಕಾಂಗ್ರೆಸ್ ಗೆದ್ದ ಇತಿಹಾಸ ಇಲ್ಲ. ಕಳೆದ ಬಾರಿ ಗೆದ್ದ ಜೆಡಿಎಸ್ ಅಭ್ಯರ್ಥಿ ಕ್ಷೇತ್ರದಲ್ಲಿ ಯಾವುದೇ ಗುರುತರವಾದ ಕೆಲಸ ಮಾಡಿಲ್ಲ. ಆದ್ದರಿಂದ, ಈ ಬಾರಿ ಆಗ್ನೇಯ ಪರವೀಧರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ನಿಶ್ಚಿತ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ವಿಶ್ವಾಸ ವ್ಯಕ್ತಪಡಿಸಿದರು.

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಪ್ರಯುಕ್ತ ನಗರದಲ್ಲಿ ಆಯೋಜಿಸಿದ್ದ ಬಿಜೆಪಿ ಅಭ್ಯರ್ಥಿ ಚಿದಾನಂದ್ ಎಂ.ಗೌಡ ಅವರ ಪರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಸರ್ಕಾರಗಳು ಶಿಕ್ಷಣ ಕ್ಷೇತ್ರಕ್ಕೆ ಅತ್ಯಂತ ಪ್ರಾಮಾಣಿಕವಾಗಿ ಶ್ರಮಿಸುತ್ತಿವೆ. ಕೇಂದ್ರ ಸರ್ಕಾರ ರೂಪಿಸಿರುವ ಹೊಸ ಶಿಕ್ಷಣ ನೀತಿ ಅತ್ಯಂತ ಬಡ ವರ್ಗಗಳ ಜನರಿಗೆ ಅನುಕೂಲ ಕಲ್ಪಿಸಲಿದ್ದು ಇದೊಂದು ಕ್ರಾಂತಿಕಾರಕ ಶಿಕ್ಷಣ ನೀತಿಯಾಗಿದೆ’ ಎಂದು ಹೇಳಿದರು.

ADVERTISEMENT

‘ಈ ಚುನಾವಣೆ, ವಿದ್ಯಾವಂತರ ಚುನಾವಣೆ ಆಗಿದ್ದು ದಶಕಗಳಿಂದಲೂ ವಿದ್ಯಾವಂತರು, ಶಿಕ್ಷಣವಂತರು ಬಿಜೆಪಿ ಪರ ಇದ್ದಾರೆ. ಚಿದಾನಂದ್ ಅವರು ಅನೇಕ ಶಿಕ್ಷಣ ಸಂಸ್ಥೆಗಳನ್ನು ತೆರೆಯುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಶಿಕ್ಷಣ ಕ್ಷೇತ್ರ ಮತ್ತು ಶಿಕ್ಷಕರ ಬಗ್ಗೆ ಅರಿವು ಹೊಂದಿರುವ ಅವರನ್ನು ಪಕ್ಷ ಸಾಕಷ್ಟು ಸಮಾಲೋಚನೆ ಮಾಡಿ ಅಭ್ಯರ್ಥಿಯನ್ನಾಗಿ ಮಾಡಿದೆ’ ಎಂದರು.

‘ಶಿಕ್ಷಣ ಕ್ಷೇತ್ರದಲ್ಲಿ ಸಣ್ಣ ವಯಸ್ಸಿಗೆ ಅಪಾರ ಸಾಧನೆ ಮಾಡಿರುವ ಚಿದಾನಂದ್‌ ಅವರ ಗೆಲುವು ನಿಶ್ಚಿತ. ಜಿಲ್ಲೆಯಲ್ಲಿ ಹೆಚ್ಚಿಗೆ ಇರುವ ಪದವೀಧರನ್ನು ಪಟ್ಟಿ ಮಾಡಿ ಪಕ್ಷದ ಮುಂಚೂಣಿ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿ ತಾಲೂಕಿನಲ್ಲಿ ಅವರ ಬೆಂಬಲ ಕೋರಬೇಕು. ಸಾಮೂಹಿಕ ನಾಯಕತ್ವದಲ್ಲಿ ಜವಾಭ್ದಾರಿಯನ್ನು ಹಂಚಿಕೊಂಡು ಕೆಲಸ ನಿರ್ವವಹಿಸಬೇಕು’ ಎಂದು ತಿಳಿಸಿದರು.

‘ಸೋಮವಾರದಿಂದ ನಾನು ಮತ್ತು ಸಚಿವ ಮಾಧುಸ್ವಾಮಿ, ವೈ.ಎ.ನಾರಾಯಣಸ್ವಾಮಿ ಸೇರಿದಂತೆ ಅನೇಕ ನಾಯಕರು ಎರಡು ವಾರ ಸಕ್ರಿಯವಾಗಿ ಈ ಕ್ಷೇತ್ರದಲ್ಲಿದ್ದು ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದೇವೆ. ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಲ್ಲಿ 35 ಸಾವಿರ ಪದವೀಧರರಿದ್ದು, ಈ ಜಿಲ್ಲೆಯಲ್ಲಿ ಎಂಎಲ್‌ಸಿ ಸ್ಥಾನವನ್ನು ಗೆಲ್ಲಿಸಿಕೊಡುವ ಮೂಲಕ ಮೋದಿ ಹಾಗೂ ಯಡಿಯೂರಪ್ಪ ಅವರ ಕೈ ಬಲಪಡಿಸಲಿದ್ದೇವೆ’ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಮಲಿಂಗಪ್ಪ, ಆಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಚಿದಾನಂದ್ ಎಂ.ಗೌಡ, ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮರಳುಕುಂಟೆ ಕೃಷ್ಣಮೂರ್ತಿ, ಜಿಲ್ಲಾ ಪ್ರಭಾರಿ ಕಾಂತರಾಜ್, ಮುಖಂಡ ಮುರಳೀಧರ್ ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.