
ಚಿಕ್ಕಬಳ್ಳಾಪುರ: ಕಾಂಗ್ರೆಸ್ ನ ಸ್ವಯಂಕೃತ ಅಪರಾಧದಿಂದ ರಾಜ್ಯದಲ್ಲಿ ಸರ್ಕಾರ ಬಿದ್ದು ಹೋದರೆ ಬಿಜೆಪಿ ವರಿಷ್ಠರು ನೀಡುವ ಆದೇಶ ಜಾರಿಗೊಳಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಆಗಬಾರದು, ಏನಾದರೂ ಮಾಡಿ ಎಂದು ಪಕ್ಷದ ವರಿಷ್ಠರು ಸೂಚನೆ ನೀಡಿದರೆ ನಾವು ಸರ್ಕಾರ ರಚನೆಗೆ ಪ್ರಯತ್ನಿಸುತ್ತೇವೆ ಎಂದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಆಡಳಿತ ಸತ್ತು ಹೋಗಿದೆ. ರಾಜ್ಯದ ಜನರು ಕಂಗಾಲಾಗಿದ್ದಾರೆ. ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯುವುದು ಸೇರಿದಂತೆ ರೈತರ ಹಲವು ಸಮಸ್ಯೆಗಳಿವೆ. ಅವುಗಳ ಪರಿಹಾರಕ್ಕೆ ಸರ್ಕಾರ ಮುಂದಾಗುತ್ತಿಲ್ಲ. ಆದ್ದರಿಂದ ಈ ಸರ್ಕಾರ ಇರಬಾರದು ಎಂದು ಹೇಳಿದರು.
ಕಾಂಗ್ರೆಸ್ ಮುಳುಗುತ್ತಿರುವ ಹಡಗು. ದೇಶದಲ್ಲಿ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇದೆ. ಇದರಲ್ಲಿ ಎರಡು ಸಣ್ಣ ಪುಟ್ಟ ರಾಜ್ಯಗಳಿವೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.