ADVERTISEMENT

ಡಿ.ಕೆ. ಸುರೇಶ್ ವರ್ತನೆಗೆ ಆಕ್ರೋಶ

ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಜನವರಿ 2022, 2:14 IST
Last Updated 5 ಜನವರಿ 2022, 2:14 IST
ಚಿಕ್ಕಬಳ್ಳಾಪುರದ ಬಲಮುರಿ ವೃತ್ತದಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮುಖಂಡರು
ಚಿಕ್ಕಬಳ್ಳಾಪುರದ ಬಲಮುರಿ ವೃತ್ತದಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮುಖಂಡರು   

ಚಿಕ್ಕಬಳ್ಳಾಪುರ: ರಾಮನಗರದಲ್ಲಿ ಸೋಮವಾರ ನಡೆದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಕಾರ್ಯಕ್ರಮ ದಲ್ಲಿ ಸಂಸದ ಡಿ.ಕೆ. ಸುರೇಶ್ ಗೂಂಡಾ ರೀತಿಯಲ್ಲಿ ವರ್ತನೆ ತೋರಿದ್ದಾರೆ. ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ಭಾಷಣಕ್ಕೆ ಅಡ್ಡಿಪಡಿಸಿದ್ದಾರೆ. ಇದು ದುರ್ನಡತೆ ಯಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರದ ಬಲ ಮುರಿ ವೃತ್ತದಲ್ಲಿ ಮಂಗಳವಾರ ಪ್ರತಿಭಟಿಸಿದರು.

ಡಿ.ಕೆ. ಸುರೇಶ್, ವಿಧಾನ ಪರಿಷತ್ ಸದಸ್ಯ ರವಿ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಧಿಕ್ಕಾರ ಕೂಗಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಲಿಂಗಪ್ಪ ಮಾತನಾಡಿ, ಮುಖ್ಯಮಂತ್ರಿ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಗೆ ರಾಮನಗರಕ್ಕೆ ತೆರಳಿದ್ದಾಗ ಸುರೇಶ್ ಹಾಗೂ ರವಿ ನಡೆದುಕೊಂಡ ರೀತಿ ಸರಿಯಲ್ಲ. ಅವರ ನಡೆಯನ್ನು ರಾಮನಗರದ ಜನರು, ರಾಜ್ಯದ ಜನರು ಹಾಗೂ ಬಿಜೆಪಿ ಖಂಡಿಸುತ್ತದೆ ಎಂದು ಹೇಳಿದರು.

ADVERTISEMENT

ಮುಖ್ಯಮಂತ್ರಿ ಅವರ ಸಮ್ಮುಖದಲ್ಲಿ ಈ ರೀತಿ ನಡೆದುಕೊಂಡಿದ್ದಾರೆ. ಅಂದಮೇಲೆ ಜನಸಾಮಾನ್ಯರು ಮತ್ತು ಅಧಿಕಾರಿಗಳ ಜತೆ ಇವರು ಯಾವ ರೀತಿ ನಡೆದುಕೊಳ್ಳಬಹುದು ಎಂದರು.

ಹಳೇ ಕಾಲದಿಂದಲೂ ಇವರು ಗೂಂಡಾ ಪ್ರವೃತ್ತಿಯಿಂದ ನಡೆದುಕೊಂಡು ಬಂದಿದ್ದಾರೆ. ಅದನ್ನೇ ಈಗ ಮುಂದುವರಿಸುತ್ತಿದ್ದಾರೆ. ಅವರಿಗೆ ತಕಾತ್ತಿದ್ದರೆ ಜನಪರ ಕಾರ್ಯಕ್ರಮಗಳನ್ನು ಮಾಡಲಿ. ಅದು ಬಿಟ್ಟು ರಾಜ್ಯ ಸರ್ಕಾರದ ನೀಡುವ ಉತ್ತಮ ಕಾರ್ಯಕ್ರಮಗಳನ್ನು ಜಾರಿಗೊಳಿಸಲು ಸಹ ಇವರು ಬಿಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇವರು ತಮ್ಮ ವರ್ತನೆ ಸರಿಪಡಿಸಿಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಎಲ್ಲೆಡೆ ನಾಶವಾಗುತ್ತದೆ ಹೇಳಿದರು.

ವಿಭಾಗದ ಸಂಘಟನಾ ಕಾರ್ಯದರ್ಶಿ ಕಾಂತರಾಜ್, ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್, ಉಪಾಧ್ಯಕ್ಷ ಲೋಕೇಶ್ ಗೌಡ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗೌಡಗೆರೆ ರಾಜಶೇಖರ್, ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಅಭಿಷೇಕ್ ಗೌಡ, ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ಲೀಲಾವತಿ ಶ್ರೀನಿವಾಸ್, ಎಸ್‌.ಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ ವೆಂಕಟೇಶ್, ರಾಮಣ್ಣ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.