ADVERTISEMENT

ಕೈಗಾರಿಕೆ ಸ್ಥಾಪನೆಗೆ ನೀಲನಕ್ಷೆ ಸಿದ್ಧ

​ಪ್ರಜಾವಾಣಿ ವಾರ್ತೆ
Published 1 ಜನವರಿ 2021, 2:23 IST
Last Updated 1 ಜನವರಿ 2021, 2:23 IST
ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರಿಗೆ ಪ್ರತಿಜ್ಞಾವಿಧಿ ಬೋಧಿಸಿದ ಸಚಿವ ಡಾ.ಕೆ. ಸುಧಾಕರ್
ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರಿಗೆ ಪ್ರತಿಜ್ಞಾವಿಧಿ ಬೋಧಿಸಿದ ಸಚಿವ ಡಾ.ಕೆ. ಸುಧಾಕರ್   

ಚಿಕ್ಕಬಳ್ಳಾಪುರ: ಗ್ರಾಮೀಣರು ತೋರಿಸಿರುವ ಈ ಐತಿಹಾಸಿಕ ಬೆಂಬಲ ತಮ್ಮ ಜವಾಬ್ದಾರಿ ಹೆಚ್ಚಿಸಿದ್ದು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ತಮ್ಮ ರಾಜಕೀಯ ಬದುಕನ್ನು ಮುಡಿಪಾಗಿಡುವುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಘೋಷಿಸಿದರು.

ನೂತನವಾಗಿ ಆಯ್ಕೆಯಾಗಿರುವ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಪರಾಜಿತ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸಲು ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸದಸ್ಯರಿಗೆ ಪ್ರತಿಜ್ಞಾವಿಧಿ ಬೋಧಿಸಿ ಅವರು ಮಾತನಾಡಿದರು.

ಈ ಹಿಂದೆಂದೂ ಈ ಪ್ರಮಾಣದಲ್ಲಿ ಗ್ರಾಮೀಣರ ಬೆಂಬಲ ವ್ಯಕ್ತವಾದ ನಿದರ್ಶನವಿಲ್ಲ. ಹೆಚ್ಚೆಂದರೆ 12-14 ಪಂಚಾಯಿತಿಗಳಲ್ಲಿ ಅಧಿಕಾರ ಹಿಡಿಯಲು ಸಾಧ್ಯವಾಗಿತ್ತು. ಆದರೆ, ಎಲ್ಲಾ 29 ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಬಾರಿಸಿ ಅಧಿಕಾರಿ ಹಿಡಿಯುತ್ತಿರುವುದು ದಾಖಲೆಯಾಗಿದೆ ಎಂದರು.

ADVERTISEMENT

ಅಭೂತಪೂರ್ವ ಬೆಂಬಲ ನೀಡಿರುವ ಜನರಿಂದ ನಿರೀಕ್ಷೆಯೂ ಹೆಚ್ಚಿರುತ್ತದೆ. ಅದನ್ನು ಅರ್ಥ ಮಾಡಿಕೊಂಡು ನಿಮ್ಮ ಕರ್ತವ್ಯ ನಿರ್ವಹಿಸಬೇಕು. ನೂತನ ಸದಸ್ಯರ ಹಕ್ಕು ಮತ್ತು ಜವಾಬ್ದಾರಿಗಳ ಬಗ್ಗೆ ಮಾಹಿತಿ ನೀಡುವ ನಿಟ್ಟಿನಲ್ಲಿ 3 ದಿನಗಳ ವಿಶೇಷ ಕಾರ್ಯಾಗಾರ ಆಯೋಜಿಸಲಾಗುವುದು ಎಂದು ತಿಳಿಸಿದರು.

ಪಕ್ಷಾತೀತವಾಗಿ ಪಂಚಾಯತ್‌ ರಾಜ್‌ ವ್ಯವಸ್ಥೆಯಲ್ಲಿ ಆಳವಾದ ಜ್ಞಾನ ಹೊಂದಿರುವವರನ್ನು ಕರೆಯಿಸಿ ಮಾಹಿತಿ ಕೊಡಿಸಲಾಗುವುದು. ಅದರ ಜತೆಗೆ ಸಂಪನ್ಮೂಲ ವ್ಯಕ್ತಿಗಳನ್ನು ಆಹ್ವಾನಿಸಿ ತರಬೇತಿ ನೀಡಲಾಗುವುದು. ಪ್ರತಿವರ್ಷ ಈ ಕಾರ್ಯಾಗಾರ ನಡೆಸಲು ನಿರ್ಧರಿಸಿದ್ದು ಇದರಿಂದ ವೈಯಕ್ತಿಕ ಮೌಲ್ಯಮಾಪನ ಮಾಡಿಕೊಂಡಂತಾಗುತ್ತದೆ ಎಂದು ವಿವರಿಸಿದರು.

ಕೈಗಾರಿಕೆ ಸ್ಥಾಪನೆ ನಿಶ್ಚಿತ: ಉತ್ತಮ ಸಮಾಜ ನಿರ್ಮಾಣಕ್ಕೆ ಆರೋಗ್ಯ, ಶಿಕ್ಷಣದ ಜತೆಗೆ ದುಡಿಯುವ ಕೈಗಳಿಗೆ ಕೆಲಸ ನೀಡುವ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು. ಗುಣಮಟ್ಟದ ಆರೋಗ್ಯ ದೊರಕಿಸುವ ನಿಟ್ಟಿನಲ್ಲಿ ಈಗಾಗಲೇ ಶುದ್ಧ ನೀರು ಒದಗಿಸುವ, ಕ್ಷೇತ್ರದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವ ಕೆಲಸ ಈಗಾಗಲೇ ಚಾಲನೆ ಪಡೆದುಕೊಂಡಿದೆ. ಮುಂದಿನ ದಿನಗಳಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ದೊರಕಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ನೀಲನಕ್ಷೆ ಸಿದ್ಧಪಡಿಸಲಾಗಿದೆ ಎಂದು ಹೇಳಿದರು.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ಜಮೀನು ದೊಡ್ಡ ಪ್ರಮಾಣದಲ್ಲಿ ಇಲ್ಲ. ಹೀಗಾಗಿ ಐನೂರು ಎಕರೆಗಳ ಭೂಮಿಯನ್ನು ಎರಡು ಕಡೆ ಗುರುತಿಸಿ ಅಭಿವೃದ್ಧಿಪಡಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ. ಉಳಿದಂತೆ ಬಾಗೇಪಲ್ಲಿ, ಗೌರಿಬಿದನೂರಿನಲ್ಲೂ ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗಿದೆ. ಈಗಾಗಲೇ ದೊಡ್ಡ ಔಷಧಿ ತಯಾರಿಕಾ ಕಂಪನಿಗಳ ಜತೆ ಸಮಾಲೋಚನೆ ನಡೆಸಿದ್ದು ಆದಷ್ಟು ಬೇಗ ಕೈಗಾರಿಕೆಗಳ ಸ್ಥಾಪನೆಗೆ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ಈಗಾಗಲೇ ಅನೇಕ ಕೆರೆಗಳನ್ನು ತುಂಬಿಸುವ ಕೆಲಸ ಪೂರ್ಣಗೊಂಡಿದೆ. ಜಿಲ್ಲೆಯಾದ್ಯಂತ ಎಲ್ಲಾ ಕೆರೆಗಳನ್ನು ತುಂಬಿಸಲಾಗುವುದು. ಆ ನಿಟ್ಟಿನಲ್ಲಿ ಯೋಜನೆಗಳನ್ನು ಸಿದ್ಧಪಡಿಸಲಾಗಿದೆ. ಇನ್ನೂ ಕೊಟ್ಟ ಮಾತಿನಂತೆ ನಿವೇಶನ ಮತ್ತು ವಸತಿರಹಿತರಿಗೆ ನಿವೇಶನ ಮತ್ತು ಸೂರು ದೊರಕಿಸಿಕೊಡುವ ಕೆಲಸಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದರು.

ಅಧ್ಯಕ್ಷ, ಉಪಾಧ್ಯಕ್ಷ ಮೀಸಲು ವಿಷಯದಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಲು ಆಗುವುದಿಲ್ಲ. ಅಧಿಕಾರಿಗಳು ನಿಗದಿಗೊಳಿಸುವ ಮೀಸಲು ಅನ್ವಯ ಆಯ್ಕೆ ನಡೆಯುತ್ತದೆ. ಆ ಸಂದರ್ಭದಲ್ಲಿ ಅವಕಾಶ ವಂಚಿತರಾದವರು ಬೇಸರಗೊಳ್ಳದೆ ಹೊಂದಾಣಿಕೆ ಮಾಡಿಕೊಂಡು ಹೋಗಬೇಕು ಎಂದು ಸಲಹೆ ನೀಡಿದರು.

ಸುಧಾಕರ್‌ ಅವರು ಎಲ್ಲ ಸದಸ್ಯರಿಗೆ ಪ್ರತಿಜ್ಞಾವಿಧಿ ಬೋಧಿಸಿದ್ದು ಗಮನ ಸೆಳೆಯಿತು. ಮುಖಂಡರಾದ ಕೃಷ್ಣಮೂರ್ತಿ, ನಾಗರಾಜು, ನವೀನ್‌ ಕಿರಣ್‌, ಮಿಲ್ಟನ್‌ ವೆಂಕಟೇಶ್‌, ರಂಗಪ್ಪ, ನಾಗೇಶ್‌, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಲಿಂಗಪ್ಪ, ಹಾವಲಕೊಂಡ ರಾಯಪ್ಪ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.