ADVERTISEMENT

ಸಂಸದರ ರಾಜೀನಾಮೆಗೆ ಬಿಎಸ್‌ಪಿ ಆಗ್ರಹ

ನೆರೆ ಪರಿಹಾರ: ಕೇಂದ್ರ ಸರ್ಕಾರದ ವಿರುದ್ಧ ಬಹುಜನ ಸಮಾಜ ಪಕ್ಷದ ಕಾರ್ಯಕರ್ತರ ಆಕ್ರೋಶ, ನಗರದಲ್ಲಿ ರಸ್ತೆ ತಡೆದು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2019, 12:54 IST
Last Updated 5 ಅಕ್ಟೋಬರ್ 2019, 12:54 IST
ಬಹುಜನ ಸಮಾಜ ಪಕ್ಷದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಬಹುಜನ ಸಮಾಜ ಪಕ್ಷದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.   

ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರದಿಂದ ನೆರೆ ಪರಿಹಾರ ತರಲು ವಿಫಲರಾಗಿರುವ ರಾಜ್ಯದ ಬಿಜೆಪಿ ಸಂಸದರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ)ಕಾರ್ಯಕರ್ತರು ನಗರದಲ್ಲಿ ಶನಿವಾರ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.

ನಗರದ ಅಂಬೇಡ್ಕರ್ ಭವನದಿಂದ ಅಂಬೇಡ್ಕರ್ ವೃತ್ತದವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ವೃತ್ತದಲ್ಲಿ ಮಾನವ ಸರಪಳಿ ರಚಿಸಿ, ರಸ್ತೆ ತಡೆದು ಕೇಂದ್ರ ಸರಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಬಿಎಸ್‌ಪಿ ಜಿಲ್ಲಾ ಘಟಕದ ಸಂಯೋಜಕ ಎಂ.ಮುನಿಕೃಷ್ಣಯ್ಯ, ‘ರಾಜ್ಯದಲ್ಲಿ ಉಂಟಾದ ಪ್ರವಾಹದಲ್ಲಿ 2.30 ಲಕ್ಷ ಮನೆಗಳಿಗೆ ಹಾನಿಯಾಗಿದೆ. 1.79 ಲಕ್ಷ ಮನೆಗಳು ನೆಲಸಮಗೊಂಡಿವೆ. 87 ಮಂದಿ ಮೃತಪಟ್ಟಿದ್ದಾರೆ. 7.82 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಅಂದಾಜು ₹38 ಸಾವಿರ ಕೋಟಿಗೂ ಹೆಚ್ಚು ನಷ್ಟ ಉಂಟಾಗಿದೆ’ ಎಂದು ಹೇಳಿದರು.

ADVERTISEMENT

‘ಪ್ರವಾಹದಿಂದ ತತ್ತರಿಸಿರುವ ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿನ ಸಾವಿರಾರು ಕುಟುಂಬಗಳು ಅಕ್ಷರಶಃ ಬೀದಿಗೆ ಬಂದಿವೆ. ಆದರೆ, ಕೇಂದ್ರ ಸರಕಾರ ಸಂತ್ರಸ್ತರ ನೆರವಿಗೆ ಬಾರದೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಉದ್ಯಮಿಗಳಿಗೆ ತ್ವರಿತವಾಗಿ ಸ್ಪಂದಿಸುವ ಪ್ರಧಾನಿ ನರೇಂದ್ರ ಮೋದಿ ಅವರು ಬಡವರು, ರೈತರು, ಕೂಲಿ ಕಾರ್ಮಿಕರು, ಸಂಕಷ್ಟದಲ್ಲಿದವರನ್ನು ಕಡೆಗಣಿಸಿದ್ದಾರೆ’ ಎಂದು ಆರೋಪಿಸಿದರು.

‘ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಸರ್ಕಾರವಿದ್ದರೆ ಅಭಿವೃದ್ಧಿ ಕಾರ್ಯಕ್ಕೆ ಅನುಕೂಲವಾಗುತ್ತದೆ ಎಂಬ ಆಶಾ ಭಾವನೆಯಿಂದ ರಾಜ್ಯದ ಜನರು ಕಳೆದ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಿಂದ ಬಿಜೆಪಿಯ 25 ಸಂಸದರು ಆಯ್ಕೆ ಮಾಡಿದರು. ಬಿಜೆಪಿಗೆ ಬಹುಮತ ನೀಡಿದ ರಾಜ್ಯವನ್ನೇ ಕೇಂದ್ರ ಸರ್ಕಾರ ಕಡೆಗಣಿಸಿರುವುದು ದುರಂತ’ ಎಂದು ಹೇಳಿದರು.

‘ಈವರೆಗೆ ಕೇಂದ್ರ ಸ್ವಲ್ಪ ಪರಿಹಾರ ನೀಡಿ ಕಣ್ಣೋರೆಸುವ ತಂತ್ರ ಮಾಡಿದೆ. ಕನಿಷ್ಠ ₹10 ಸಾವಿರ ಕೋಟಿಯಾದರೂ ತಕ್ಷಣ ಪರಿಹಾರ ಬಿಡುಗಡೆ ಮಾಡಬೇಕು. ದೆಹಲಿಯಲ್ಲಿ ಗಟ್ಟಿಯಾಗಿ ಧ್ವನಿ ಎತ್ತದೆ ಇಲ್ಲಿ ಉತ್ತರಕುಮಾರರ ರೀತಿ ಬಿಂಬಿಸಿಕೊಳ್ಳುತ್ತಿರುವ ಅಸಹಾಯಕ ಬಿಜೆಪಿ ಸಂಸದರು ಮೊದಲು ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.

ಬಿಎಸ್‌ಪಿ ಜಿಲ್ಲಾ ಘಟಕದ ಅಧ್ಯಕ್ಷ ಅಪ್ಸರ್ ಪಾಷಾ, ಮುಖಂಡರಾದ ನಾಗಪ್ಪ, ದೇವಪ್ಪ, ವೆಂಕಟೇಶಪ್ಪ, ನಾಗಪ್ಪ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.