ಚಿಕ್ಕಬಳ್ಳಾಪುರ: ತಾಲ್ಲೂಕಿನ ಐತಿಹಾಸಿಕ ನಂದಿಗಿರಿಧಾಮದಲ್ಲಿ ಜೂ.19ರಂದು ನಡೆಯಬೇಕಿದ್ದ ಸಚಿವ ಸಂಪುಟ ಸಭೆಯನ್ನು ಬೆಂಗಳೂರಿನ ವಿಧಾನ ಸೌಧ ಸಚಿವ ಸಂಪುಟ ಸಭಾಂಗಣಕ್ಕೆ ಸ್ಥಳಾಂತರಿಸಲಾಗಿದೆ.
ಜಿಲ್ಲಾಡಳಿತ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಎಲ್ಲ ಸಿದ್ದತೆ ಮಾಡಿಕೊಂಡಿತ್ತು. ನಂದಿಗಿರಿಧಾಮಕ್ಕೆ ಮತ್ತು ನಂದಿ ಗ್ರಾಮದ ಭೋಗನಂದೀಶ್ವರ ದೇಗುಲ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು.
ಗಿರಿಧಾಮದ ಕಟ್ಟಡಗಳಿಗೆ ಸುಣ್ಣ ಬಣ್ಣ ಬಳಿಯಲಾಗಿತ್ತು.
ಮುಂದೂಡಿಕೆ ಬಗ್ಗೆ ಪ್ರಜಾವಾಣಿಯಲ್ಲಿ ವರದಿ: ನಂದಿಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ ಮುಂದೂಡಿಕೆ ಆಗುವ ಸಾಧ್ಯತೆ ಇದೆ ಎಂದು ಸೋಮವಾರ ಪ್ರಜಾವಾಣಿಯಲ್ಲಿ ವರದಿ ಪ್ರಕಟವಾಗಿತ್ತು. ಈ ವರದಿ ತೀವ್ರ ಚರ್ಚೆಗೆ ಕಾರಣವಾಗಿತ್ತು.
ಸಚಿವ ಸಂಪುಟ ಸಭೆಯಲ್ಲಿ ಅನುದಾನ ಮತ್ತು ಯೋಜನೆಗಳ ಘೋಷಣೆ ಬಗ್ಗೆ ನಿರ್ಣಯ ಕೈಗೊಳ್ಳಬೇಕು ಎಂದು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಶಾಸಕರು ಮುಖ್ಯಮಂತ್ರಿ ಅವರನ್ನು ಆಗ್ರಹಿಸಿದ್ದರು. ಆದರೆ ಮುಖ್ಯಮಂತ್ರಿ ಈ ವಿಚಾರದಲ್ಲಿ ಖಚಿತ ಭರವಸೆ ನೀಡಿರಲಿಲ್ಲ ಎನ್ನಲಾಗಿದೆ.
ಅಲ್ಲದೆ ಜಿಲ್ಲೆಯ ಶಾಸಕರು ತಮ್ಮ ಕ್ಷೇತ್ರಗಳ ಯೋಜನೆಗಳ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವ ಸಹ ಸಲ್ಲಿಸಿದ್ದರು. ಈ ಯೋಜನೆಗಳ ಜಾರಿಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.