ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರ ಜಾರಿಗೊಳಿಸಲು ನಿರ್ಧರಿಸಿರುವ ಕಾರ್ಮಿಕ ವಿರೋಧಿ ಕಾನೂನುಗಳನ್ನು ವಿರೋಧಿಸಿ ದೇಶದಾದ್ಯಂತ ವಿವಿಧ ಕಾರ್ಮಿಕ ಸಂಘಟನೆಗಳು ಬುಧವಾರ ಮುಷ್ಕರಕ್ಕೆ ಕರೆ ನೀಡಿದ್ದು ಈ ಹಿನ್ನೆಲೆಯಲ್ಲಿ ಸಿಐಟಿಯು ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಯಿತು.
ವಾಪಸಂದ್ರದ ಡೇರಿ ಬಳಿ ಸಮಾವೇಶಗೊಂಡ ಕಾರ್ಮಿಕ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತ ಬಿ.ಬಿ ರಸ್ತೆಯಲ್ಲಿ ಮೆರವಣಿಗೆ ನಡೆಸಿದರು.
ಶಿಡ್ಲಘಟ್ಟ ವೃತ್ತದಲ್ಲಿ ಸಮಾವೇಶಗೊಂಡರು. ಕಾರ್ಮಿಕರ ವಿರೋಧಿ ನೀತಿಗಳನ್ನು ಕೇಂದ್ರ ಸರ್ಕಾರ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಶಿಡ್ಲಘಟ್ಟ ವೃತ್ತದ ಬಿ.ಬಿ ರಸ್ತೆಯಲ್ಲಿಯೇ ಪ್ರತಿಭಟನೆಗೆ ಕುಳಿತರು. ಸ್ಥಳಕ್ಕೆ ಬಂದ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದರು.
ಕೇಂದ್ರ ಸರ್ಕಾರ ಕಾರ್ಮಿಕರ ಹಿತಕ್ಕೆ ವಿರುದ್ಧವಾಗಿ ನಾಲ್ಕು ಕಾರ್ಮಿಕ ಕಾನೂನುಗಳನ್ನು ತರುವ ಮೂಲಕ ಕಾರ್ಮಿಕರ ಕತ್ತು ಹಿಸುಕುತ್ತಿದೆ. ಈಗಾಗಲೇ ಹಲವು ಸಮಸ್ಯೆಗಳಿಂದ ಸಂಕಷ್ಟಕ್ಕೆ ಸಿಲುಕಿರುವ ಕಾರ್ಮಿಕರು ಮತ್ತಷ್ಟು ತೊಂದರೆಗೆ ಸಿಲುಕಲಿದ್ದಾರೆ. ಮುಷ್ಕರದ ಹಕ್ಕು ಕಸಿಯುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.
ಬಿಸಿಯೂಟದ ಮೂಲಕ ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ನೌಕರರು ಶ್ರಮಿಸುತ್ತಿದ್ದಾರೆ. ಬಿಸಿಯೂಟ ನೌಕರರನ್ನು ಕಾರ್ಮಿಕರು ಎಂದು ಪರಿಗಣಿಸಿ ಪಿಂಚಣಿ ಸೇರಿದಂತೆ ಶಾಸನ ಬದ್ಧ ಸೌಲಭ್ಯಗಳನ್ನು ನೀಡಬೇಕು. ಬಿಸಿಯೂಟ ನೌಕರರನ್ನು ಕಾಯಂ ಮಾಡಬೇಕು. ಅಂಗನವಾಡಿ ನೌಕರರನ್ನು ಕಾಯಂ ಮಾಡಬೇಕು. ಕನಿಷ್ಠ ವೇತನ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಮುಖಂಡರಾದ ಬಿ.ಎನ್ ಮುನಿಕೃಷ್ಣಪ್ಪ, ಶಿವಪ್ಪ, ಬಿಸಿಯೂಟ ಸಂಘಟನೆಯ ಕಾರ್ಯದರ್ಶಿ ಕೆ.ಆರ್.ಮಂಜುಳಾ, ಭಾಗ್ಯಮ್ಮ, ಪ್ರಮೀಳಾ, ಭಾರತಿ, ಕಾಂತ, ಉಮಾ, ಸಿಂಧೂಶ್ರೀ, ಅಂಗನವಾಡಿ ಸಂಘಟನೆಯ ಮುನಿರತ್ನಮ್ಮ, ಪದ್ಮಾ, ಪ್ರಮೀಳಾ, ರತ್ನಮ್ಮ, ಹಳ್ಳಿ ಮಕ್ಕಳ ಸಂಘದ ವೆಂಕಟರಮಣಪ್ಪ ಮತ್ತಿತರರು ಮುಷ್ಕರದಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.