ಚಿಕ್ಕಬಳ್ಳಾಪುರ: ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ರಸ್ತೆಯ ಅಕ್ಕಪಕ್ಕ ಕಸ ಸುರಿದರೆ ₹ 5 ಸಾವಿರ ದಂಡ ವಿಧಿಸಲಾಗುವುದು. ಕಸ ಸುರಿದವರ ಮಾಹಿತಿಯನ್ನು ಭಾವಚಿತ್ರದೊಂದಿಗೆ ನೀಡಿದರೆ ₹ 500 ಬಹುಮಾನ ನೀಡಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ.ನವೀನ್ ಭಟ್ ತಿಳಿಸಿದರು.
ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಕುಪ್ಪಹಳ್ಳಿ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಗುರುವಾರ ಅಂಗಟ್ಟ ಗ್ರಾಮದ ಬಳಿ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯದಲ್ಲಿ ಅವರು ಮಾತನಾಡಿದರು.
ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಸ್ವಚ್ಛತಾ ಇ ಸೇವಾ ಆಂದೋಲನದ ಅಂಗವಾಗಿ ‘ಒಂದು ದಿನ ಒಂದು ಗಂಟೆ ಸ್ವಚ್ಛತಾ ಕಾರ್ಯ’ ಹಮ್ಮಿಕೊಳ್ಳಲಾಗಿದೆ. ‘ಸ್ವಚ್ಛತೆಯೇ ಆರೋಗ್ಯ, ಸ್ವಚ್ಛತೆಯೇ ಜೀವನ’ ಎಂಬ ಘೋಷವಾಕ್ಯದೊಂದಿಗೆ ಶ್ರಮದಾನ ಕೈಗೊಳ್ಳಲಾಗಿದೆ ಎಂದರು.
ಈ ಕಾರ್ಯಕ್ರಮದ ಅಂಗವಾಗಿ ಅಂಗಟ್ಟ ಬಳಿಯ ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯ ಮಾಡಲಾಗಿದೆ. ಅಲ್ಲಿದ್ದ ಕಸದ ರಾಶಿಯನ್ನು ವಿಲೇವಾರಿ ಮಾಡಲಾಗಿದೆ. ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛವಾಗಿ ಕಾಣಲು ಮತ್ತು ಆಕರ್ಷಕವಾಗಿ ಕಾಣಲು ಹಳೆಯ ಟೈರ್‌ಗಳಿಗೆ ಬಣ್ಣ ಬಳಿದು ಆ ಜಾಗದಲ್ಲಿ ಇರಿಸಿ ಅದರಲ್ಲಿ ಗಿಡಗಳನ್ನು ನಾಟಿ ಮಾಡಲಾಗಿದೆ. ಆ ಸ್ಥಳದಲ್ಲಿ ಕುಳಿತುಕೊಳ್ಳಲು ಬೆಂಚ್ ಗಳ ವ್ಯವಸ್ಥೆ ಮಾಡಲಾಗಿದೆ ಎಂದರು.
ಈ ಸ್ಥಳದಲ್ಲಿ ಕಸ ಸುರಿದರೆ ₹ 5 ಸಾವಿರ ದಂಡ ವಿಧಿಸಲಾಗುವುದು ಮತ್ತು ಕಸ ಸುರಿದವರ ಮಾಹಿತಿಯನ್ನು ಭಾವಚಿತ್ರದೊಂದಿಗೆ ನೀಡಿದರೆ ₹ 500 ಬಹುಮಾನ ನೀಡುವುದಾಗಿ ಗ್ರಾಮ ಪಂಚಾಯಿತಿ ಯಿಂದ ಪ್ರಕಟಣೆ ಹೊರಡಿಸಿರುವ ಫಲಕವನ್ನು ಅಳವಡಿಸಲಾಗಿದೆ ಎಂದು ಹೇಳಿದರು.
ರಸ್ತೆ ಅಕ್ಕ ಪಕ್ಕ ಕಸ ಸುರಿದರೆ ಅಂತಹವರ ಮೇಲೆ ಕ್ರಮ ಜರುಗಿಸಲು ಸಿ.ಸಿ ಟಿವಿ ಕ್ಯಾಮೆರಾಗಳನ್ನು ಸಹ ಅಳವಡಿಸಲಾಗಿದೆ. ತಮ್ಮ ಸುತ್ತಮುತ್ತಲ ವಾತಾವರಣವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವ ಕಾರ್ಯವು ಪ್ರತಿಯೊಬ್ಬರ ಸಾಮಾಜಿಕ ಜವಾಬ್ದಾರಿ ಎಂದು ಹೇಳಿದರು.
ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಕಸ ಸಂಗ್ರಹ ವಾಹನಗಳಿಗೆ ಹಸಿ ಮತ್ತು ಒಣ ಬೇರ್ಪಡಿಸಿ ತ್ಯಾಜ್ಯ ನೀಡಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಅತಿಕ್ ಪಾಷಾ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಮಂಜುನಾಥ ಜಿ.ಆರ್, ಕುಪ್ಪಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬಾಲಮ್ಮ, ಗ್ರಾಮ ಪಂಚಾಯಿತಿ ಸದಸ್ಯರು, ನರೇಗಾ ಸಿಬ್ಬಂದಿ, ಎನ್.ಆರ್.ಎಲ್.ಎಂ ಸಿಬ್ಬಂದಿ, ವಿಶ್ವೇಶ್ವರಯ್ಯ ತಾಂತ್ರಿಕ ಕಾಲೇಜು ವಿದ್ಯಾರ್ಥಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.