ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿಗಳು
ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.8ರಂದು ಜಿಲ್ಲೆಯಲ್ಲಿ ಪ್ರವಾಸ ನಡೆಸುವರು. ಅಂದು ₹ 1 ಸಾವಿರ ಕೋಟಿಗೂ ಹೆಚ್ಚು ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡುವರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ ಸುಧಾಕರ್ ತಿಳಿಸಿದರು.
ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ಬುಧವಾರ ಮುಖ್ಯಮಂತ್ರಿ ಪ್ರವಾಸದ ಹಿನ್ನೆಲೆಯಲ್ಲಿ ನಡೆದ ಪೂರ್ವಸಿದ್ದತಾ ಸಭೆಯಲ್ಲಿ ಮಾತನಾಡಿದರು.
ಸರ್ಕಾರ ಕಳೆದ ಎರಡೂವರೆ ವರ್ಷಗಳಲ್ಲಿ ಜಿಲ್ಲೆಯಲ್ಲಿ ಏನೆಲ್ಲ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಅದರ ವಿವರ ಹಾಗೂ ಉದ್ಘಾಟನೆಗೆ ಸಿದ್ಧವಾಗಿರುವ ಎಲ್ಲ ಕಾಮಗಾರಿಗಳ ವಿವರವನ್ನು ನೀಡಬೇಕು
ಎಂದರು.
ಲೋಕಾರ್ಪಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಇಲಾಖೆಯ ಸಚಿವರು ಪಾಲ್ಗೊಳ್ಳುವರು. ಶಿಷ್ಟಾಚಾರದ ರೀತಿ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನದಲ್ಲಿ ನಿರ್ಮಾಣವಾಗಿರುವ ಕಾಮಗಾರಿಗಳ ಶಂಕುಸ್ಥಾಪನೆ ಅಡಿಗಲ್ಲಿನಲ್ಲಿಯೂ ಹೆಸರು ಶಿಷ್ಟಾಚಾರದ ರೀತಿ ಇರಬೇಕು. ಸ್ಥಳೀಯ ಸಂಸದರು, ಜನಪ್ರತಿನಿಧಿಗಳು ಸಂಬಂಧಪಟ್ಟ ಸಚಿವರನ್ನು ಆಹ್ವಾನಿಸಬೇಕು. ವೇದಿಕೆ ಕಾರ್ಯಕ್ರಮಗಳು ಶಿಷ್ಟಾಚಾರದ ರೀತಿ ಆಯೋಜಿಸಬೇಕು ಎಂದು ಅಧಿಕಾರಿಗಳಿಗೆ
ಸೂಚಿಸಿದರು.
ವೇದಿಕೆ ಕಾರ್ಯಕ್ರಮದ ಬಳಿ ವಿವಿಧ ಇಲಾಖೆಗಳ ಸವಲತ್ತುಗಳನ್ನು ಪ್ರದರ್ಶಿಸುವ ಜಾಗೃತಿ ಮಳಿಗೆಗಳನ್ನು ನಿರ್ಮಿಸಬೇಕು. ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜಿಲ್ಲಾ ವಿವರವನ್ನು ಬಿಂಬಿಸುವ ವಸ್ತು ಪ್ರದರ್ಶನ ಮಳಿಗೆ ತೆರೆಯಬೇಕು. ಅಂದು ಚಾಲನೆ ಆಗುವ ವಿವಿಧ ಕಾಮಗಾರಿಗಳ ವಿವರವನ್ನು ಕಿರು ಚಿತ್ರದ ರೂಪದಲ್ಲಿ ವೇದಿಕೆಯಲ್ಲಿ ಪ್ರದರ್ಶಿಸಬೇಕು ಎಂದು ನಿರ್ದೇಶನ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯವಾಗಿ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ₹200 ಕೋಟಿ ವೆಚ್ಚದ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ, ₹237 ಕೋಟಿ ವೆಚ್ಚದ ಎಚ್.ಎನ್ ವ್ಯಾಲಿ ಮತ್ತು ಕೆ.ಸಿ ವ್ಯಾಲಿ ನೀರಾವರಿ ಕಾಮಗಾರಿಗಳಿಗೆ ಚಾಲನೆ, ಬಾಗೇಪಲ್ಲಿ ತಾಲ್ಲೂಕಿನ ಗಂಟ್ಲಮಲ್ಲಮ್ಮ ಮತ್ತು ರಾಮಸಮುದ್ರ ನೀರಾವರಿ ಯೋಜನೆಗೆ ಚಾಲನೆ ದೊರೆಯಲಿದೆ ಎಂದರು.
ಲೋಕೋಪಯೋಗಿ ಇಲಾಖೆಯಡಿ ಹಾಗೂ ಜಲ್ ಜೀವನ್ ಮಿಷನ್ ಯೋಜನೆಯಡಿ ನಿರ್ಮಾಣವಾಗಿರುವ ವಿವಿಧ ಕಾಮಗಾರಿಗಳು ಚಾಲನೆ ಆಗಲಿವೆ ಎಂದು ವಿವರಿಸಿದರು.
ಶಾಸಕ ಬಿ.ಎನ್. ರವಿಕುಮಾರ್, ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ. ನವೀನ್ ಭಟ್, ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಎಚ್. ಅಶ್ವಿನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.