
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿರುವ 320 ಅಂಗನವಾಡಿಗಳಿಗೆ ಮುಂದಿನ ಒಂದು ತಿಂಗಳ ಒಳಗಾಗಿ ನಿವೇಶನ ಗುರುತಿಸಿ ನೀಡಬೇಕು. ಆ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ಸೂಚಿಸಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಏಕೀಕೃತ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುತ್ತದೆ. ಅಭಿವೃದ್ಧಿಯಲ್ಲಿ ಬಹಳ ಮುಖ್ಯವಾದ ಪಾತ್ರ ವಹಿಸುತ್ತದೆ. ಆದ್ದರಿಂದ ಜಿಲ್ಲೆಯಲ್ಲಿರುವ 2014 ಅಂಗನವಾಡಿಗಳು ಸಹ ಪೂರ್ಣ ಪ್ರಮಾಣದಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದರು.
ನಗರಾಡಳಿತ ಪ್ರದೇಶದಲ್ಲಿ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಯಾವ ಯಾವ ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ ಎನ್ನುವ ಮಾಹಿತಿಯನ್ನು ನಿಖರವಾಗಿ ಪಡೆಯಬೇಕು. ಸಂಬಂಧಪಟ್ಟ ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹಾಗೂ ನಗರ ಸ್ಥಳೀಯಾಡಳಿತದ ಮುಖ್ಯಸ್ಥ ಅಧಿಕಾರಿಗಳಿಗೆ ಲಿಖಿತವಾಗಿ ಸೂಚನೆ ನೀಡಬೇಕು. ಒಂದು ತಿಂಗಳ ಒಳಗಾಗಿ ನಿವೇಶನ ಗುರ್ತಿಸುವ ಕೆಲಸ ಆಗಬೇಕು ಎಂದರು.
ಅಂಗನವಾಡಿಗಳಲ್ಲಿ ಹಾಗೂ ಶಾಲೆಗಳಲ್ಲಿ ಮಕ್ಕಳಿಗೆ ಕಡ್ಡಾಯವಾಗಿ ಆರೋಗ್ಯ ತಪಾಸಣೆ ಆಗಬೇಕು. ಸಾವಿರಾರು ಮಕ್ಕಳಿಗೆ ದೃಷ್ಟಿದೋಷದಿಂದ ಕಲಿಕೆಗೆ ಫಲಕವೆ ಕಾಣಿಸುವುದಿಲ್ಲ. ಅಂತಹ ಮಕ್ಕಳ ಕಲಿಕೆ ಬಹಳ ತೊಡಕಾಗುತ್ತದೆ. ನೂರಾರು ಮಕ್ಕಳಿಗೆ ಗಂಭೀರ ಶಸ್ತ್ರಚಿಕಿತ್ಸೆಯ ಅಗತ್ಯ ಇರುತ್ತದೆ. ಆರೋಗ್ಯ ತಪಾಸಣೆಯನ್ನು ಕಾಲೋಚಿತವಾಗಿ ಮಾಡುವುದರಿಂದ ಈ ಸಮಸ್ಯೆಗಳನ್ನು ಪರಿಹರಿಸಬಹುದು ಎಂದು ಹೇಳಿದರು.
ಅಗತ್ಯವಿರುವ ಮಕ್ಕಳಿಗೆ ಕನ್ನಡಕ ವಿತರಣೆ ಆಗಬೇಕು. ಅಗತ್ಯವಿರುವರಿಗೆ ಶಸ್ತ್ರ ಚಿಕಿತ್ಸೆ ಆಗಲೇಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಸಹಕಾರ ಪಡೆದು ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಅಭಿಯಾನದ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಗೃಹಲಕ್ಷ್ಮಿ ಯೋಜನೆಯಡಿ 2025ರ ನವೆಂಬರ್‌ವರೆಗೆ ₹1,423.29 ಕೋಟಿ ಜಿಲ್ಲೆಯ ಕುಟುಂಬಗಳ ಮಹಿಳೆಯರಿಗೆ ತಲುಪಿದೆ. ಅದೇ ರೀತಿ ಸುಕನ್ಯಾ ಸಂವೃದ್ಧಿ ಯೋಜನೆ, ಭಾಗ್ಯಲಕ್ಷ್ಮಿ ಯೋಜನೆ, ಮಾತೃ ವಂದನಾ ಯೋಜನೆ ಹಾಗೂ ಪೋಷಣ್ ಅಭಿಯಾನ ಯೋಜನೆಗಳು ಜಿಲ್ಲೆಯ ಮಹಿಳೆಯರಿಗೆ, ಮಕ್ಕಳಿಗೆ ಪರಿಣಾಮಕಾರಿಯಾಗಿ ತಲುಪಲು ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದರು.
ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ ತಡೆಗಟ್ಟಲು ಜಿಲ್ಲಾ ಮಟ್ಟದಲ್ಲಿ ಹೊಸ ಸಮಿತಿ ರಚನೆಗೆ ಅಗತ್ಯ ಕ್ರಮವಹಿಸಬೇಕು. ಕಚೇರಿ ಹಂತದಲ್ಲಿರುವ ಆಂತರಿಕ ದೂರು ನಿವಾರಣಾ ಸಮಿತಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಪೊಕ್ಸೋ ಪ್ರಕರಣಗಳನ್ನು ನಿಯಂತ್ರಿಸಲು 27 ಹೋಬಳಿಗಳಲ್ಲಿ ಅರಿವು ಕಾರ್ಯಕ್ರಮಗಳನ್ನು ವಿಭಿನ್ನವಾಗಿ ಆಚರಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿರುವ ಸ್ಕ್ಯಾನಿಂಗ್ ಕೇಂದ್ರಗಳ ಕಾರ್ಯನಿರ್ವಹಣೆಯ ಮೇಲೆ ನಿರಂತರ ನಿಗಾ ಇಡಬೇಕು. ಆರೋಗ್ಯ ಇಲಾಖೆಯ ಮಾರ್ಗಸೂಚಿ ಅನ್ವಯ ನಡೆಯದಿರುವ ಕೇಂದ್ರಗಳ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಬಾಲ್ಯವಿವಾಹ ಪ್ರಕರಣಗಳು ನಿಯಂತ್ರಣ ಆಗಬೇಕು. ಆ ಮೂಲಕ ಲಿಂಗಾನುಪಾತ ಹೆಚ್ಚಳವಾಗಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಕುಮಾರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಮೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೆಂಕಟೇಶರೆಡ್ಡಿ ಮತ್ತಿತರರು ಪಾಲ್ಗೊಂಡಿದ್ದರು.
ಅಂಗನವಾಡಿಗಳಲ್ಲಿ ಮಕ್ಕಳು ಬರದಿದ್ದರೂ ಹಾಜರಾತಿ ಕೊಡಬಾರದು. ಶಿಸ್ತುಸಮಯ ಪಾಲನೆ ಕಡ್ಡಾಯವಾಗಿ ಆಗಬೇಕು. ಮಕ್ಕಳಿಗೆ ಹಾಗೂ ಮಹಿಳೆಯರಿಗೆ ನೀಡುತ್ತಿರುವ ಪೌಷ್ಠಿಕ ಆಹಾರ ಸಮರ್ಪಕ ವಿತರಣೆ ಬಗ್ಗೆ ಮೇಲಾಧಿಕಾರಿಗಳು ದಿನ ನಿತ್ಯ ಮೇಲುಸ್ತುವಾರಿ ಮಾಡಬೇಕು ಎಂದು ಜಿ.ಪ್ರಭು ತಿಳಿಸಿದರು. ಈ ನಿಟ್ಟಿನಲ್ಲಿ ಜಾರಿಯಲ್ಲಿರುವ ಪೋಷಣ್ ಟ್ರಾಕ್ ತಂತ್ರಾಂಶವನ್ನು ಸರಿಯಾದ ರೀತಿಯಲ್ಲಿ ಅಧಿಕಾರಿಗಳು ನಿರ್ವಹಿಸಬೇಕು. 2014 ಅಂಗನವಾಡಿಗಳ ಪೈಕಿ 20 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 129 ಸಹಾಯಕಿಯರ ಹುದ್ದೆಗಳು ಖಾಲಿ ಇವೆ. ಎಲ್ಲೆಲ್ಲಿ ಈ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಳು ಖಾಲಿ ಇವೆ ಅವೆಲ್ಲವನ್ನು ಮುಂದಿನ 3 ತಿಂಗಳಲ್ಲಿ ಭರ್ತಿ ಮಾಡಲು ಕ್ರಮವಹಿಸಬೇಕು. ಒಟ್ಟಾರೆ ಜಿಲ್ಲೆಯ ಅಂಗನವಾಡಿಗಳಲ್ಲಿ ಮಕ್ಕಳಿಗೆ ಗರ್ಭಿಣಿ ಮಹಿಳೆಯರಿಗೆ ದೊರಕುವ ಎಲ್ಲಾ ಸೌಲಭ್ಯಗಳು ಕರಾರುವಕ್ಕಾಗಿ ತಲುಪುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.