ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರವು ಇಂಧನ ಬೆಲೆ ಹೆಚ್ಚಿಸಿರುವುದನ್ನು ಖಂಡಿಸಿ ನಗರದಲ್ಲಿ ಶುಕ್ರವಾರ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಯುವ ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯು ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಆರಂಭವಾಯಿತು. ಬಿಬಿ ರಸ್ತೆಯಲ್ಲಿ ರ‍್ಯಾಲಿ ನಡೆಸಿದ ಪಕ್ಷದ ಕಾರ್ಯಕರ್ತರು ಶಿಡ್ಲಘಟ್ಟ ವೃತ್ತದಲ್ಲಿ ಸಮಾವೇಶಗೊಂಡರು. ಮಾನವ ಸರಪಳಿ ನಿರ್ಮಿಸಿದರು.
ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ₹ 50 ಹೆಚ್ಚಿಸುವ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರವನ್ನು ಕಾಂಗ್ರೆಸ್ ಖಂಡಿಸುತ್ತದೆ. ಈ ಬೆಲೆ ಏರಿಕೆಗಳು ಈಗಾಗಲೇ ಹಣದುಬ್ಬರ ಮತ್ತು ನಿರುದ್ಯೋಗದಿಂದ ಬಳಲುತ್ತಿರುವ ಸಾಮಾನ್ಯ ಜನರು, ರೈತರು, ದಿನಗೂಲಿ ಕಾರ್ಮಿಕರು ಮತ್ತು ಮಧ್ಯಮ ವರ್ಗದ ಕುಟುಂಬಗಳ ಮೇಲೆ ಭಾರಿ ಹೊರೆಯಾಗಿದೆ ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕುಬೇರ್ ಅಚ್ಚು ಮಾತನಾಡಿ, ‘ಕಾಂಗ್ರೆಸ್ ಪಕ್ಷವು ಕೇಂದ್ರದಲ್ಲಿ ಅಧಿಕಾರದಲ್ಲಿ ಇದ್ದ ವೇಳೆ ಅಡುಗೆ ಅನಿಲ ಸಿಲಿಂಡರ್ ಬೆಲೆ ₹ 550 ಇತ್ತು. ಆದರೆ ಈಗ ಬೆಲೆ ಹೆಚ್ಚಿಸಿದ್ದಾರೆ. ಪೆಟ್ರೋಲ್, ಡೀಸೆಲ್ ಹೊರೆಯೂ ಕೇಂದ್ರ ಸರ್ಕಾರದಿಂದಲೇ ಆಗುತ್ತಿದೆ ಎಂದರು.
ಬೆಲೆ ಏರಿಕೆ ವಿರುದ್ಧ ರಾಜ್ಯ ಬಿಜೆಪಿ ಜನಾಕ್ರೋಶ ಕಾರ್ಯಕ್ರಮ ಹಮ್ಮಿಕೊಂಡಿದೆ. ಆದರೆ ಅವರು ಕೇಂದ್ರ ಬಿಜೆಪಿ ವಿರುದ್ಧ ಜನಾಕ್ರೋಶ ವ್ಯಕ್ತಪಡಿಸಬೇಕಾಗಿದೆ. ಬಿಜೆಪಿಯಲ್ಲಿ ನಾನೇ ದೊಡ್ಡ ನಾಯಕ ಎಂದು ವಿಜಯೇಂದ್ರ ಬಿಂಬಿಸಿಕೊಳ್ಳಬೇಕಾಗಿದೆ. ಆ ಕಾರಣದಿಂದ ಅವರ ತಂಡವು ಜನಾಕ್ರೋಶ ಸಭೆ ನಡೆಸುತ್ತಿದೆ. ಅವರ ಅಸ್ತಿತ್ವ ಉಳಿಸಿಕೊಳ್ಳಲು ಯಾತ್ರೆ ಮಾಡುತ್ತಿದ್ದಾರೆ ಎಂದರು.
ರಾಜ್ಯ ಕಾಂಗ್ರೆಸ್ ವಿರುದ್ಧ ಬೆರಳು ತೋರುವ ನೈತಿಕತೆಯೇ ಬಿಜೆಪಿಗೆ ಇಲ್ಲ. ಗ್ಯಾರಂಟಿ ನಿಲ್ಲಿಸುತ್ತಾರೆ ಎಂದು ಸುಳ್ಳು ಹೇಳುತ್ತಿದ್ದರು. ಆದರೆ ಯಾವ ಯೋಜನೆಗಳೂ ನಿಲ್ಲದ ಕಾರಣ ಬಿಜೆಪಿಗೆ ದಿಕ್ಕು ತೋಚದಂತೆ ಆಗಿದೆ ಎಂದು ಟೀಕಿಸಿದರು.
ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಕೇಶವರೆಡ್ಡಿ ಮಾತನಾಡಿ, ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಯಾವ ಭರಸವೆಗಳನ್ನೂ ಈಡೇರಿಸಿಲ್ಲ ಎಂದು ಕಿಡಿಕಾರಿದರು.
ರಾಜ್ಯ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸುತ್ತಿದೆ. ಮತ್ತೊಂದು ಕಡೆ ಕೇಂದ್ರ ಸರ್ಕಾರ ಅಡುಗೆ ಅನಿಲ ದರ ಹೆಚ್ಚು ಮಾಡುತ್ತದೆ. ನಾವು ನೀಡುತ್ತಿರುವ ಜಿಎಸ್‌ಟಿ ಪಾಲನ್ನೂ ಕೇಂದ್ರ ಸರ್ಕಾರವು ಸರಿಯಾಗಿ ನೀಡುತ್ತಿಲ್ಲ ಎಂದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ರಮೇಶ್, ಜಿ.ಪಂ ಮಾಜಿ ಸದಸ್ಯ ಕೆ.ಎಂ.ಮುನೇಗೌಡ, ಯುವ ಕಾಂಗ್ರೆಸ್ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.