ಚಿಕ್ಕಬಳ್ಳಾಪುರ: ಎಸ್.ಎನ್.ಸುಬ್ಬಾರೆಡ್ಡಿ ಮೂರು ಬಾರಿ, ಪ್ರದೀಪ್ ಈಶ್ವರ್ ಮೊದಲ ಬಾರಿ ಶಾಸಕರಾಗಿದ್ದಾರೆ. ಸಚಿವ ಸ್ಥಾನದ ಬಗ್ಗೆ ಶಾಸಕರು ಬಯಕೆ ವ್ಯಕ್ತಪಡಿಸುವುದು ತಪ್ಪಲ್ಲ. ಆದರೆ ಈ ವಿಚಾರವಾಗಿ ಹೈಕಮಾಂಡ್ ಮತ್ತು ಮುಖ್ಯಮಂತ್ರಿ ನಿರ್ಧಾರ ಕೈಗೊಳ್ಳುವರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ ಮೊದಲ ಬಾರಿಗೆ ಆಯ್ಕೆ ಆದವರಿಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡುತ್ತಿರಲಿಲ್ಲ. ಆದರೆ ಈಗ ಇಬ್ಬರಿಗೆ ಅವಕಾಶ ನೀಡಿದ್ದಾರೆ. ಸಂಪುಟ ವಿಸ್ತರಣೆ ವಿಚಾರದಲ್ಲಿ ಇದೇ ರೀತಿಯಲ್ಲಿ ಆಗುತ್ತದೆ ಎಂದು ಹೇಳಲು
ಸಾಧ್ಯವಿಲ್ಲ ಎಂದರು.
ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆಯು ಹೈಕಮಾಂಡ್ ಮತ್ತು ಮುಖ್ಯಮಂತ್ರಿ ಅವರ ಸರ್ವೋಚ್ಛ ಅಧಿಕಾರ. ಯಾರು ಸಚಿವರಾಗಬೇಕು ಎನ್ನುವುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ಸ್ಥಾನ ಕೇಳುವ ಹಕ್ಕು ಎಲ್ಲರಿಗೂ ಇರುತ್ತದೆ. ಪಕ್ಷದ ನಿರ್ಧಾರಕ್ಕೆ ನಾವು ಬದ್ಧ ಎಂದು
ಹೇಳಿದರು.
ಪಕ್ಷದ ಶಿಸ್ತಿಗೆ ಒಳಪಟ್ಟು ಕೆಲಸ ಮಾಡುತ್ತೇವೆ. ಗೊಂದಲಗಳನ್ನು ಮಾಡಿಕೊಳ್ಳುವ ಅವಶ್ಯಕತೆ ಇಲ್ಲ. ಮುಖ್ಯಮಂತ್ರಿ ಅವರು ಆಗಾಗ್ಗೆ ಸಚಿವರನ್ನು ಕರೆದು ಕುಶಲೋಪರಿ ವಿಚಾರಿಸುವರು. ಸಂಪುಟ ವಿಸ್ತರಣೆ ವಿಚಾರದಲ್ಲಿ ನಮ್ಮನ್ನು ಕೇಳಿ ತೀರ್ಮಾನ ಮಾಡುವುದಿಲ್ಲ
ಎಂದರು.
ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಒಂದೇ ಕುಟುಂಬಕ್ಕೆ ಗಣಿಗಾರಿಕೆಗೆ 60 ಎಕರೆ ಜಮೀನು ಮಂಜೂರು ಮಾಡಿರುವ ವಿಚಾರದ ಬಗ್ಗೆ ಶಾಸಕ ಬಿ.ಎನ್.ರವಿಕುಮಾರ್ ಅವರು ಸದನದಲ್ಲಿ ಮತ್ತು ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ. ಈ ಹಿಂದಿನ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ ಎಂದು ಹೇಳಿದರು.
ತಪ್ಪು ಮಾಹಿತಿ ನೀಡಿ ಭೂಮಿ ಪರಿವರ್ತನೆ ಮಾಡಿರುವ ಆರೋಪವಿದೆ. ಈ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅವರಿಗೆ ಸೂಚಿಸಿದ್ದೇನೆ. ಲೋಪಗಳ ಬಗ್ಗೆ ಕಾನೂನು ರೀತಿಯಲ್ಲಿ ಕ್ರಮಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಮೊದಲ ಬಾರಿಗೆ ಆಯ್ಕೆ ಆದವರಿಗೆ ಅವಕಾಶ ನೀಡುತ್ತಿರಲಿಲ್ಲ | ಸ್ಥಾನ ಕೇಳುವ ಹಕ್ಕು ಎಲ್ಲರಿಗೂ ಇದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.