ADVERTISEMENT

ಅನುಮತಿ ಇಲ್ಲದೆ ಪುತ್ಥಳಿ ಸ್ಥಾಪಿಸುವಂತಿಲ್ಲ; ಜಿಲ್ಲಾಧಿಕಾರಿ ಎಚ್ಚರಿಕೆ

ಅನಧಿಕೃತವಾಗಿ ಪುತ್ಥಳಿ, ನಾಮಫಲಕ ಅಳವಡಿಸಿದರೆ ಕಾನೂನು ಕ್ರಮ; ಜಿಲ್ಲಾಧಿಕಾರಿ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 30 ಜುಲೈ 2025, 5:39 IST
Last Updated 30 ಜುಲೈ 2025, 5:39 IST
ಚಿಕ್ಕಬಳ್ಳಾಪುರದಲ್ಲಿ ನಡೆದ ‘ಸಾರ್ವಜನಿಕ ಸ್ಥಳಗಳಲ್ಲಿ ಪುತ್ಥಳಿ ನಿರ್ಮಾಣ ನಿರ್ವಹಣೆಯ ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾತನಾಡಿದರು 
ಚಿಕ್ಕಬಳ್ಳಾಪುರದಲ್ಲಿ ನಡೆದ ‘ಸಾರ್ವಜನಿಕ ಸ್ಥಳಗಳಲ್ಲಿ ಪುತ್ಥಳಿ ನಿರ್ಮಾಣ ನಿರ್ವಹಣೆಯ ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾತನಾಡಿದರು    

ಚಿಕ್ಕಬಳ್ಳಾಪುರ: ಜಿಲ್ಲೆಯ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಸರ್ಕಾರಿ ಕಚೇರಿ ಆವರಣದಲ್ಲಿ ಸ್ಥಳೀಯ ಆಡಳಿತ ಸಂಸ್ಥೆಗಳ ಅನುಮತಿ ಪಡೆಯದೆ ಮಹನೀಯರ ಪುತ್ಥಳಿಗಳನ್ನು ಸ್ಥಾಪಿಸುವಂತಿಲ್ಲ. ಸರ್ಕಾರಿ ಜಾಗಗಳಲ್ಲಿ ನಾಮಫಲಕಗಳನ್ನು ಅಳವಡಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಎಚ್ಚರಿಕೆ ನೀಡಿದರು.

‌ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಾರ್ವಜನಿಕ ಸ್ಥಳಗಳಲ್ಲಿ ಪುತ್ಥಳಿ ನಿರ್ಮಾಣ ನಿರ್ವಹಣೆಯ ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯ ಕೆಲವು ಕಡೆಡೆ ಸಾರ್ವಜನಿಕ ಸ್ಥಳಗಳಲ್ಲಿ ದೇಶ ಸೇವೆಗೆ ಶ್ರಮಿಸಿದ ಮಹನೀಯರ ನಾಮಫಲಕಗಳನ್ನು, ಪ್ರತಿಮೆಗಳನ್ನು ಹಾಗೂ ಪುತ್ಥಳಿಗಳನ್ನು ಅನಧಿಕೃತವಾಗಿ ನಿರ್ಮಿಸುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ಈ ರೀತಿ ಕಾನೂನು ಬಾಹಿರವಾಗಿ ಪುತ್ಥಳಿ ನಿರ್ಮಿಸಿ, ನಾಮಫಲಕ ಅಳವಡಿಸಿ ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡಬಾರದು ಎಂದರು.

ADVERTISEMENT

ಯಾವುದೇ ವ್ಯಕ್ತಿಗಳು, ಸಂಘ ಸಂಸ್ಥೆಗಳು ಈ ರೀತಿ ನಡೆದುಕೊಳ್ಳಬಾರದು. ಯಾವುದೇ ಸಂಘ ಸಂಸ್ಥೆಗಳು ತಮ್ಮ ಅಧೀನದ ಸ್ಥಳಗಳಲ್ಲಿ ಮಹನೀಯರ ಪ್ರತಿಮೆಗಳನ್ನು, ಪುತ್ಥಳಿಗಳನ್ನು ಹಾಗೂ ನಾಮಫಲಕಗಳನ್ನು ನಿರ್ಮಿಸಲು ಸಹ ಅನುಮತಿ ಪಡೆಯುವುದು ಕಡ್ಡಾಯ ಎಂದು ಹೇಳಿದರು.

ಈ ವಿಚಾರದಲ್ಲಿ ಸರ್ಕಾರದ ಮಾರ್ಗಸೂಚಿ ಕ್ರಮಗಳನ್ನು ಪಾಲಿಸಬೇಕು. ಶಾಂತಿ ಸುವ್ಯವಸ್ಥೆ ಕಾಪಾಡಲು ಪ್ರತಿಯೊಬ್ಬರು ಜಿಲ್ಲಾಡಳಿತದೊಂದಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಸಾಮಾಜಿಕ ಹೊಣೆಗಾರಿಕೆ ಯೋಜನೆಯಡಿ (ಸಿ.ಎಸ್.ಆರ್) ಯಾವುದೇ ಖಾಸಗಿ ಸಂಸ್ಥೆಗಳು ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳುವ ಮುನ್ನ ಸರ್ಕಾರದ ಮಾರ್ಗಸೂಚಿ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ವಿಸ್ತೃತ ಯೋಜನಾ ವರದಿಗಳನ್ನು (ಡಿಪಿಆರ್) ಸಂಬಂಧಪಟ್ಟ ಇಲಾಖೆಗೆ ಸಲ್ಲಿಸಿ ಅನುಮತಿ ಪಡೆದ ನಂತರ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು. ಈ ಕುರಿತು ತಾಲ್ಲೂಕು ಮಟ್ಟದ ಅಧಿಕಾರಿಗಳು ಪರಿಶೀಲಿಸಿ ಜಿಲ್ಲಾಡಳಿತಕ್ಕೆ ವರದಿ ನೀಡಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಎಚ್. ಅಶ್ವಿನ್ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Cut-off box - ‘ಅನಧಿಕೃತ ಪುತ್ಥಳಿ; ಜಿಲ್ಲಾಡಳಿತಕ್ಕೆ ಒಪ್ಪಿಸಿ’ ಈ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ನಿರಂತರವಾಗಿ ನಿಗಾ ಇಡಲು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಟಾಸ್ಕ್‌ಪೋರ್ಸ್ ಸಮಿತಿಗಳನ್ನು ರಚಿಸಲಾಗಿದೆ. ಸರ್ಕಾರಿ ಜಾಗದಲ್ಲಿ ಯಾವುದೇ ಪುತ್ಥಳಿಗಳು ನಾಮಫಲಕಗಳು ಅನಧಿಕೃತವಾಗಿ ಯಾವುದೇ ವ್ಯಕ್ತಿಗಳಿಂದ ಹಾಗೂ ಸಂಘ ಸಂಸ್ಥೆಗಳಿಂದ ನಿರ್ಮಾಣವಾದಲ್ಲಿ ಅಂತಹವರ ಮೇಲೆ ತಾಲ್ಲೂಕು ಮಟ್ಟದ ಟಾಸ್ಕ್‌ಪೋರ್ಸ್ ಸಮಿತಿಗಳು ಕಾನೂನು ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಈ ಸಮಿತಿಗಳು 24 ಗಂಟೆ‌ ಒಳಗೆ ಕಾರ್ಯಾಚರಣೆ ನಡೆಸಿ ಅನಧಿಕೃತವಾಗಿ ನಿರ್ಮಾಣಗೊಂಡ ಪುತ್ಥಳಿಗಳನ್ನು ಪ್ರತಿಮೆಗಳನ್ನು ಹಾಗೂ ನಾಮಫಲಕಗಳನ್ನು ತೆರವುಗೊಳಿಸಬೇಕು. ಜಿಲ್ಲಾಡಳಿತಕ್ಕೆ ಒಪ್ಪಿಸಬೇಕು. ಒಂದು ವೇಳೆ ಯಾವುದೇ ವ್ಯಕ್ತಿಗಳು ಅಥವಾ ಸಂಘ ಸಂಸ್ಥೆಗಳು ಅಧಿಕೃತವಾಗಿ ಪುತ್ಥಳಿಗಳನ್ನು ಹಾಗೂ ನಾಮಫಲಕಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಸ್ಥಾಪಿಸಲು ಇಚ್ಚಿಸಿದರೆ ಸ್ಥಳೀಯ ಗ್ರಾಮಾಡಳಿತ ಅಥವಾ ನಗರಾಡಳಿತ ಸಂಸ್ಥೆಗಳಿಗೆ ಮನವಿ ಸಲ್ಲಿಸಿ ಅನುಮತಿ ಪಡೆದು ನಿಯಮಾವಳಿ ರೀತಿ ಸ್ಥಾಪಿಸಬೇಕು ಎಂದು ಸೂಚಿಸಿದರು.

Cut-off box - ಆ.7ರಂದು ಚೇಳೂರಿನಲ್ಲಿ ಜನಸ್ಪಂದನ ಜನರ ಸಮಸ್ಯೆಗಳನ್ನು ಸ್ಥಳೀಯವಾಗಿ ಪರಿಹರಿಸಲು ಸರ್ಕಾರ ರೂಪಿಸಿರುವ ಜನಸ್ಪಂದನ ಕಾರ್ಯಕ್ರಮವನ್ನು ಆ.7 ರಂದು ಚೇಳೂರು ತಾಲ್ಲೂಕು ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪಿ.ಎನ್.ರವೀಂದ್ರ ತಿಳಿಸಿದರು. ಸ್ಥಳೀಯರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು. ಆ.7 ಕ್ಕೆ ಮುಂಚಿತವಾಗಿ ಸಾರ್ವಜನಿಕರು ತಾಲ್ಲೂಕು ಆಡಳಿತಕ್ಕೆ ತಮ್ಮ ಅಹವಾಲು ಹಾಗೂ ಮನವಿಗಳನ್ನು ಸಲ್ಲಿಸಿ ಸ್ವೀಕೃತಿ ಪಡೆಯಬೇಕು. ಕಾನೂನು ರೀತಿ ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು ಎಂದು ಹೇಳಿದರು. ಸ್ಥಳೀಯವಾಗಿ ಬಗೆಹರಿಸಲು ಸಾಧ್ಯವಾದಲ್ಲಿ ಕಾರ್ಯಕ್ರಮದ ದಿನವೇ  ಪರಿಹರಿಸಲಾಗುವುದು. ಬಾಕಿ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೇವಾರಿ ಮಾಡಲಾಗುವುದು. ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಯು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಆನ್‌ಲೈನ್ ತಂತ್ರಾಂಶದಲ್ಲಿ ನಮೂದಿಸಬೇಕು. ಪರಿಹಾರಕ್ಕೆ ಸಂಬಂಧಪಟ್ಟ ಇಲಾಖೆಗಳಿಗೆ ವರ್ಗಾಯಿಸಬೇಕು ಎಂದು ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.