ADVERTISEMENT

ಚಿಕ್ಕಬಳ್ಳಾಪುರ | ಕೆಲಸದ ಸ್ಥಳದಲ್ಲಿ ಮಹಿಳೆಯರ ಗೌರವಿಸಿ: ಟಿ.ಪಿ. ರಾಮಲಿಂಗೇಗೌಡ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2025, 4:53 IST
Last Updated 28 ನವೆಂಬರ್ 2025, 4:53 IST
ಚಿಕ್ಕಬಳ್ಳಾಪುರದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ನಡೆದ ‘ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ ಕುರಿತ ಅರಿವು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದ ಅಧಿಕಾರಿಗಳು
ಚಿಕ್ಕಬಳ್ಳಾಪುರದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ನಡೆದ ‘ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ ಕುರಿತ ಅರಿವು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದ ಅಧಿಕಾರಿಗಳು   

ಚಿಕ್ಕಬಳ್ಳಾಪುರ:‘ನಾವು ಕೆಲಸ ಮಾಡುವ ಸ್ಥಳಗಳಲ್ಲಿ ಹಾಗೂ ಕಚೇರಿಗಳಲ್ಲಿ ಮಹಿಳೆಯರಿಗೆ ಗೌರವ ನೀಡಬೇಕು. ಆ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತಾಸೆಯಾಗಿ ನಿಲ್ಲಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶ ಟಿ.ಪಿ. ರಾಮಲಿಂಗೇಗೌಡ ತಿಳಿಸಿದರು. 

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಆಶ್ರಯದಲ್ಲಿ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ನಡೆದ ‘ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ ಕುರಿತ ಅರಿವು ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.

‘ನಮ್ಮ ಸುತ್ತಲ ಸಮಾಜದಲ್ಲಿ ಒಂದಲ್ಲ ಒಂದು ರೀತಿ ಲೈಂಗಿಕ ದೌರ್ಜನ್ಯಗಳು ದಿನನಿತ್ಯ ನಡೆಯುತ್ತಿವೆ. ಇಂತಹ ದೌರ್ಜನ್ಯಗಳನ್ನು ತಡೆಗಟ್ಟುವ ಸಕ್ಷಮ ಪ್ರಾಧಿಕಾರಗಳ ಕಾರ್ಯನಿರ್ವಹಣೆಯಿಂದ ಮಹಿಳೆಯರಿಗೆ ಸಾಕಷ್ಟು ಮಟ್ಟಿಗೆ ಉತ್ತಮ ವಾತಾವರಣ ಸೃಷ್ಟಿಯಾಗಿದೆ. ಈ ವಾತಾವರಣ ಹೀಗೆ ಮುಂದುವರೆಯಬೇಕಾದರೆ 2013ರ ಕಾಯ್ದೆಯನ್ನು ಪ್ರತಿಯೊಬ್ಬರು ಅರ್ಥ ಮಾಡಿಕೊಳ್ಳಬೇಕು. ದೌರ್ಜನ್ಯಕ್ಕೆ ಒಳಗಾದವರು ದೂರು ದಾಖಲಿಸುವಂತಾಗಬೇಕು. ಈ ಕಾಯ್ದೆಯನ್ನು ಸಕ್ಷಮ ಪ್ರಾಧಿಕಾರಗಳು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು’ ಎಂದು ತಿಳಿಸಿದರು.  

ADVERTISEMENT

ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಮಾತನಾಡಿ, ಖಾಸಗಿ ಅಥವಾ ಸರ್ಕಾರಿ ಕಚೇರಿ ಅಥವಾ ಕೆಲಸದ ಸ್ಥಳಗಳಲ್ಲಿ 10ಕ್ಕಿಂತ ಹೆಚ್ಚು ಮಹಿಳಾ ಉದ್ಯೋಗಿಗಳಿದ್ದರೆ, ಸದರಿ ಕಚೇರಿಯಲ್ಲಿ ಆಂತರಿಕ ದೂರು ನಿವಾರಣಾ ಸಮಿತಿಯನ್ನು ಕಡ್ಡಾಯವಾಗಿ ರಚಿಸಬೇಕು ಎಂದರು.

10ಕ್ಕಿಂತ ಕಡಿಮೆ ಉದ್ಯೋಗಿಗಳಿರುವ ಸ್ಥಳದಲ್ಲಿ ಲೈಂಗಿಕ ದೌರ್ಜನ್ಯಗಳಾದರೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ತೆರೆದಿರುವ ಆಂತರಿಕ ದೂರು ನಿವಾರಣಾ ಸಮಿತಿಗಳಿಗೆ ಅಥವಾ ನೋಡಲ್ ಅಧಿಕಾರಿಗಳಿಗೆ ದೂರು ನೀಡಬೇಕು. ಆ ಮೂಲಕ ದೌರ್ಜನ್ಯ ಎಸಗುವವರಿಗೆ ಶಿಕ್ಷೆ ಕೊಡಿಸಲು ಕ್ರಮವಹಿಸಬೇಕು ಎಂದರು.

ಕಾರ್ಯಕ್ರಮದಲ್ಲಿ  ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ವೈ. ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ. ಶಿಲ್ಪಾ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ವಿ ಅಭಿಲಾಷ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಅತಿಕ್ ಪಾಷಾ ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.

‘ನೋಡಲ್ ಅಧಿಕಾರಿ ನೇಮಕ’
ಜಿಲ್ಲಾ ಮಟ್ಟದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್ ಹಾಗೂ ಸ್ಥಳೀಯ ನಗರಾಡಳಿತಗಳ ಪೌರಾಯುಕ್ತರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಆದ್ದರಿಂದ ಯಾವುದೇ ಮಹಿಳೆಗೆ ಅಥವಾ ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಉಂಟಾದಲ್ಲಿ ಹತ್ತಿರದ ನೋಡಲ್ ಅಧಿಕಾರಿಗಳಿಗೆ ದೂರು ನೀಡಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು. ಆನ್ ಲೈನ್ ಮೂಲಕವು ದೂರು ಸ್ವೀಕಾರ ಮಾಡುವ ವ್ಯವಸ್ಥೆಯನ್ನು ಸರ್ಕಾರ ಮಾಡಿದೆ. SHe-Box ಪೋರ್ಟಲ್ ಮೂಲಕವೂ ದೂರಗಳನ್ನು ನೀಡಿದಲ್ಲಿ ಸಕ್ಷಮ ಪ್ರಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಲಿವೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.