ಚಿಕ್ಕಬಳ್ಳಾಪುರ: ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ ಗ್ರಾಮಮಟ್ಟದಲ್ಲಿ ರಚನೆ ಆಗಿರುವ ಕಾವಲು ಸಮಿತಿಗಳು ಬಲವರ್ಧನೆ ಆದಲ್ಲಿ ಶೇ 90ರಷ್ಟು ಬಾಲ್ಯ ವಿವಾಹ, ಪೋಕ್ಸೊ ಸೇರಿದಂತೆ ಮಕ್ಕಳ ಮೇಲಿನ ಎಲ್ಲ ರೀತಿಯ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಬಹುದು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣ ಗೌಡ ತಿಳಿಸಿದರು.
ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಆರ್.ಟಿ.ಇ, ಪೋಕ್ಸೊ, ಬಾಲ್ಯವಿವಾಹ ನಿಷೇಧ ಕಾಯ್ದೆ ಹಾಗೂ ಬಾಲನ್ಯಾಯ ಕಾಯ್ದೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಬಾಲ್ಯ ವಿವಾಹ ಸೇರಿದಂತೆ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟುವುದು ಕೇವಲ ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೆಲಸ ಮಾತ್ರವಲ್ಲ, ಇತರ ಇಲಾಖೆಗಳ ಸಮನ್ವಯ ಮತ್ತು ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದರು.
ಚುನಾವಣಾ ಕರ್ತವ್ಯದ ರೀತಿ ಮಕ್ಕಳ ರಕ್ಷಣೆಯ ಕಾರ್ಯಗಳನ್ನು ಅಧಿಕಾರಿಗಳು ಮತ್ತು ಸಿಬ್ಬಂದಿ ಮಾಡಿದರೆ ಮಾತ್ರ ದೌರ್ಜನ್ಯಗಳಿಂದ ಮಕ್ಕಳನ್ನು ರಕ್ಷಿಸಬಹುದು. ಮಕ್ಕಳೇ ಈ ದೇಶದ ಆಸ್ತಿ. ಸಮಾಜ ಮತ್ತು ದೇಶದ ನಿರ್ಮಾಣದಲ್ಲಿ ಮಕ್ಕಳ ರಕ್ಷಣೆ ಅಗತ್ಯವಿದೆ. ಇದನ್ನು ಪ್ರತಿಯೊಬ್ಬರು ಮನಗಾಣಬೇಕು ಎಂದು ಹೇಳಿದರು.
ನಾಯಿ ಕಡಿತದಿಂದ ಮಕ್ಕಳನ್ನು ರಕ್ಷಿಸಲು ಆಯೋಗ ಸರ್ಕಾರದ ಗಮನ ಸೆಳೆಯಲಿದೆ. ಕೃಷಿ ಹೊಂಡಗಳಲ್ಲಿ ಮಕ್ಕಳು ಬಿದ್ದು ಸಾವು ಆಗುತ್ತಿರುವುದನ್ನು ತಪ್ಪಿಸಲು ಸುರಕ್ಷತಾ ಕ್ರಮಗಳನ್ನು ಪಾಲಿಸಲು ಕೃಷಿ ಮತ್ತು ತೋಟಗಾರಿಕಾ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ. ದುರಸ್ತಿ ಹಂತದ ಹಾಗೂ ಬೀಳುವ ಹಂತದಲ್ಲಿರುವ ಶಾಲಾ ಕೊಠಡಿಗಳ ಮಾಹಿತಿಯನ್ನು ತುರ್ತಾಗಿ ನೀಡಲು ಲೋಕೋಪಯೋಗಿ ಇಲಾಖೆಗೆ ಸೂಚಿಸಲಾಗಿದೆ ಎಂದರು.
ಪೊಲೀಸ್ ಇಲಾಖೆಯಿಂದ ಪ್ರತಿ ಗುರುವಾರ ತೆರೆದ ಮನೆ ಕಾರ್ಯಕ್ರಮವನ್ನು ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿ ಎಲ್ಲಾ ಶಾಲೆ, ಕಾಲೇಜುಗಳಲ್ಲಿ ಅರಿವು ಮೂಡಿಸಬೇಕು ಎಂದರು.
ಆಯೋಗದ ಸದಸ್ಯರಾದ ಶಶಿಧರ್ ಕೋಸಂಬೆ, ವೆಂಕಟೇಶ್, ಶೇಖರ್ ಗೌಡ ಜಿ ರಾಮಾತ್ನಾಳ್, ಕೆ.ಟಿ ತಿಪ್ಪೇಸ್ವಾಮಿ, ಎಸ್ ಮಂಜು, ಅಪರ್ಣಾ ಎಂ ಕೊಳ್ಳ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ ನವೀನ್ ಭಟ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.