
ಚಿಕ್ಕಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ನೇಮಕವಾಗುವವರು ಪೊಲೀಸ್ ಇಲಾಖೆಯ ಪರಿಶೀಲನಾ ಪ್ರಮಾಣಪತ್ರವನ್ನು ಹೊಂದಿರಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಅವರು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಸಕರಿಗೆ ಸೂಚಿಸಿದರು.
ಜಿಲ್ಲಾಡಳಿತ ಭವನದ ಸರ್ ಎಂ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಆರ್‌ಟಿಇ 2009ರ ಕುರಿತು ಅಹವಾಲು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕೆಲವೆಡೆ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿ ಪೊಲೀಸ್ ಪ್ರಕರಣಗಳಲ್ಲಿ ಸಿಲುಕಿದ ಗೂಂಡಾಗಳು ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವವರನ್ನು ಆಯೋಗವು ಪತ್ತೆ ಹಚ್ಚಿ, ಅವರನ್ನು ಕೆಲಸದಿಂದ ತೆಗೆದು ಹಾಕಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ರೀತಿಯ ಪ್ರಕರಣ ಇಲ್ಲದಿರುವ ಬಗ್ಗೆ ಖಾತ್ರಿ ಮಾಡಿಕೊಳ್ಳಬೇಕು. ಒಂದು ವೇಳೆ ಪೊಲೀಸ್ ಇಲಾಖೆಯ ಪರಿಶೀಲನಾ ಪ್ರಮಾಣಪತ್ರ ನೀಡದವರನ್ನು ಕೆಲಸದಿಂದ ಮುಂದುವರಿಸಬಾರದು. ಒಂದು ವಾರದ ಒಳಗೆ ಈ ಬಗ್ಗೆ ಖಾತ್ರಿ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಆಯೋಗವು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಅಗತ್ಯ ಕಾನೂನು ಕ್ರಮ ಕೈಗೊಳ್ಳಲಿದೆ ಎಂದರು.
ಜಿಲ್ಲೆಯಲ್ಲಿ 1,842 ಶಾಲೆಗಳಿದ್ದು, ಈ ಎಲ್ಲಾ ಶಾಲೆಗಳಲ್ಲಿ 2016ರ ಮಕ್ಕಳ ರಕ್ಷಣಾ ನೀತಿ ಅನುಷ್ಠಾನ ಮಾಡಿರುವ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅದರಂತೆ ಅನುಷ್ಠಾನ ಆಗಿದೆಯೋ ಇಲ್ಲವೋ ಎಂಬ ಬಗ್ಗೆ ಶಾಲೆಗಳಿಗೆ ಆಕಸ್ಮಿಕ ಭೇಟಿ ನೀಡಿ ಪರಿಶೀಲಿಸಬೇಕು. ಕನಿಷ್ಠ 10 ಶಾಲೆಗಳನ್ನು ಪರಿಶೀಲಿಸಿ ಒಂದು ವಾರದ ಒಳಗಾಗಿ ವರದಿ ನೀಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.
ಜಿಲ್ಲೆಯ ವಿವಿಧ ಭಾಗಗಳಲ್ಲಿ 5 ಶಾಲೆಗಳ ಕಟ್ಟಡಗಳ ಮೇಲೆ ವಿದ್ಯುತ್ ತಂತಿ ಹಾದು ಹೋಗಿರುವುದನ್ನು ಆಯೋಗ ಗಮನಿಸಿದೆ. ಒಂದು ವಾರದ ಒಳಗಾಗಿ ಸದರಿ ಶಾಲೆಗಳ ಕಟ್ಟಡಗಳ ಮೇಲೆ ವಿದ್ಯುತ್ ತಂತಿ ಹಾದು ಹೋಗಿರುವುದನ್ನು ತೆರವುಗೊಳಿಸಬೇಕು ಎಂದು ಸೂಚಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸಿ.ಇ.ಒ ವೈ.ನವೀನ್ ಭಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ್ ಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ವಿ. ರಮೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೆಂಕಟೇಶ್ ರೆಡ್ಡಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೌತಾಜ್. ಬಿ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಶಿಕ್ಷಣ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಶಾಲಾ ಮಕ್ಕಳು ಹಾಜರಿದ್ದರು.
ಜಿಲ್ಲೆಯಲ್ಲಿನ ಶಾಲೆಗಳಲ್ಲಿ 159892 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಈ ಪೈಕಿ 41939 ಮಕ್ಕಳ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಅಪ್ಲೋಡ್ ಮಾಡುವ ಕಾರ್ಯ ಈವರೆಗೆ ಆಗಿಲ್ಲ. ಈ ಎಲ್ಲ ಮಕ್ಕಳು ಸರ್ಕಾರ ನೀಡುವ ವಿದ್ಯಾರ್ಥಿ ವೇತನ ಸೇರಿದಂತೆ ಇನ್ನಿತರ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ. ಸಾಕಷ್ಟು ಮಕ್ಕಳಿಗೆ ಜನನ ಪ್ರಮಾಣ ಪತ್ರ ಇಲ್ಲ. ಜನನ ಪ್ರಮಾಣ ಪತ್ರವಿಲ್ಲದ ಮಕ್ಕಳಿಗೆ ಮುಂದಿನ 2 ವಾರದೊಳಗೆ ಪರ್ಯಾಯ ವ್ಯವಸ್ಥೆ ಮಾಡಬೇಕು. ಈ ಕಾರ್ಯವು ಆಂದೋಲನದ ರೀತಿ ಮಾಡಬೇಕು ಎಂದು ಕೋಸಂಬಿ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು. ಎ.ಪಿ.ಎ.ಎ.ಆರ್ ತಂತ್ರಾಂಶದಲ್ಲಿ ಶೇ 60.57 ಮಕ್ಕಳ ಅಂಕಿ ಅಂಶಗಳನ್ನು ಮಾತ್ರ ದಾಖಲಿಸಲಾಗಿದೆ. ಉಳಿದ ಮಕ್ಕಳ ಮಾಹಿತಿ ನಮೂದಿಸಿ ಒಂದು ವಾರದ ಒಳಗಾಗಿ ಪೂರ್ಣಗೊಳಿಸಬೇಕು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.