
ಶಿಡ್ಲಘಟ್ಟ: ತಾಲ್ಲೂಕಿನ ಹಂಡಿಗನಾಳ ಗ್ರಾಮ ಪಂಚಾಯಿತಿ ಅಪ್ಪೇಗೌಡನಹಳ್ಳಿ ಗ್ರಾಮದ ಇಂದಿರಾಗಾಂಧಿ ವಸತಿ ಶಾಲೆ, ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ, ಗ್ರಾಮಾಂತರ ಪೋಲಿಸ್ ಠಾಣೆಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ತಾಲ್ಲೂಕಿನ ಮಳಮಾಚನಹಳ್ಳಿ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ನಡೆದ ಮಕ್ಕಳ ಗ್ರಾಮ ಸಭೆಯಲ್ಲಿ ಮಾತನಾಡಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಕ್ಕಳ ಹಕ್ಕುಗಳು ಮತ್ತು ಸಮಸ್ಯೆಗಳನ್ನು ಚರ್ಚಿಸಲು, ಮಕ್ಕಳ ಭಾಗವಹಿಸುವಿಕೆ ಬಹಳ ಮುಖ್ಯ. ಶಿಕ್ಷಣ, ಆರೋಗ್ಯ, ಮಕ್ಕಳ ರಕ್ಷಣೆ, ಬಾಲ್ಯ ವಿವಾಹ ತಡೆಗಟ್ಟುವಿಕೆ ವಿಷಯಗಳ ಕುರಿತು ಸಲಹೆಗಳನ್ನು ಸಂಗ್ರಹಿಸಿ, ಗ್ರಾಮ ಪಂಚಾಯಿತಿ ಮೂಲಕ ಪರಿಹಾರ ಕಂಡುಕೊಳ್ಳಬೇಕು ಎಂದರು.
ಪಂಚಾಯತ್ ರಾಜ್ ಇಲಾಖೆಯಿಂದ ಗ್ರಾಮೀಣ ಪ್ರದೇಶದಲ್ಲಿ ಓದುವ ಬೆಳಕು, ಶಿಕ್ಷಣ ಕಾರ್ಯಪಡೆ, ಮಹಿಳಾ ಕಾವಲು ಸಮಿತಿ, ಮಕ್ಕಳ ಗ್ರಾಮ ಸಭೆ, ಮಕ್ಕಳ ವಿಶೇಷ ಗ್ರಾಮ ಸಭೆಗಳು ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಪೂರಕವಾಗಿವೆ. ತಾಲ್ಲೂಕಿನಲ್ಲಿ 33 ಪೋಕ್ಸೊ ಪ್ರಕರಣಗಳು ದಾಖಲಾಗಿವೆ. ಗ್ರಾಮ ಪಂಚಾಯಿತಿ ಹಂತದಲ್ಲಿ ಪ್ರತಿ 3 ತಿಂಗಳಿಗೊಮ್ಮೆ ಮಹಿಳಾ ಕಾವಲು ಸಮಿತಿಯಿಂದ ಸಭೆ ನಡೆಸಬೇಕು ಎಂದರು.
ಗ್ರಾಮೀಣ ಪ್ರದೇಶದ ಮಕ್ಕಳ ಸಮಸ್ಯೆಗಳು ಹಾಗೂ ಊರಿನ ಸಮಸ್ಯೆಗಳ ಬಗ್ಗೆ, ವಿದ್ಯಾರ್ಥಿಗಳು ಶಾಲೆಯ ಸ್ವಚ್ಛತೆ, ಉದ್ಯಾನವನ, ಊರಿನಲ್ಲಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.
ತಾಲ್ಲೂಕು ಪಂಚಾಯಿತಿ ಇಒ ಹೇಮಾವತಿ, ನಗರಸಭೆ ಪೌರಾಯುಕ್ತೆ ಅಮೃತ, ಮಳಮಾಚನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಲಕ್ಷ್ಮಿ, ಮಹಿಳಾ ಮತ್ತು ಮಕ್ಕಳ ಅಧಿಕಾರಿ ವೆಂಕಟೇಗೌಡ, ಪಿಡಿಒ ಶೈಲ, ವಿದ್ಯಾ ವಸ್ತದ್, ನರೇಂದ್ರ ಕುಮಾರ್, ಡಾ.ವೆಂಕಟೇಶ್ ಮೂರ್ತಿ, ವಿಜಯಲಕ್ಷ್ಮಿ, ನಾಗರಾಜ್, ಮಂಜುನಾಥ್, ಎನ್.ಜಿ.ಒ.ಉಷಾ ಶೆಟ್ಟಿ, ಚಂದ್ರಪ್ಪ, ಮೋವಿನ್, ಉಮಾ, ಶ್ಯಾಮಲಾ, ಮಂಜುಳ, ನಾಗೇಶ್, ನಾಗರಾಜ್, ಆನಂದ್, ಡಾ. ನಮ್ರತಾ, ರವಿ, ಆಶಾ, ನಾಗವೇಣಮ್ಮ, ಪುರುಷೋತ್ತಮ, ನವೀನ್ ಕುಮಾರ್, ಪ್ರಭಾಕರ್, ಸುಧಾ, ಗ್ರಾಮ ಪಂಚಾಯಿತಿ ಸದಸ್ಯರು, ಸ್ವ-ಸಹಾಯ ಸಂಘದವರು, ಅಂಗನವಾಡಿ ಕಾರ್ಯಕರ್ತೆಯರು, ಸರ್ಕಾರಿ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.