
ಚಿಂತಾಮಣಿ: ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯನ್ನು ಮಂಗಳವಾರ ಹಮ್ಮಿಕೊಳ್ಳಲಾಯಿತು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ನವೀನ್ ಭಟ್ ಮಾತನಾಡಿ, ‘ಅಧಿಕಾರಿಗಳು ಬದಲಾವಣೆಗೆ ತಕ್ಕಂತೆ ಆಡಳಿತದಲ್ಲಿ ನೂತನ ತಂತ್ರಜ್ಞಾನ ಅಳವಡಿಸಿಕೊಂಡರೆ, ಪ್ರಗತಿಯ ವೇಗವನ್ನು ಹೆಚ್ಚಿಸಬಹುದು. ಆಗ ಆಡಳಿತವೂ ಚುರುಕಾಗಲಿದೆ’ ಎಂದು ಪ್ರತಿಪಾದಿಸಿದರು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆಯಲ್ಲಿ ಇಕೆವೈ ಜಾಬ್ ಕಾರ್ಡ್‌ಗಳನ್ನು ಅಪ್‌ಡೇಟ್ ಮಾಡುತ್ತಿರಬೇಕು. ಕಂದಾಯ ವಸೂಲಿ ಚುರುಕುಗೊಳಿಸಬೇಕು. ಕಂದಾಯ ವಸೂಲಿಯಲ್ಲಿ ಜಿಲ್ಲೆಯು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದೆ. ಇದನ್ನು ಮುಂದುವರೆಸಿಕೊಂಡು ಹೋಗಲು ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಶ್ರಮಿಸಬೇಕು ಎಂದು ಸೂಚಿಸಿದರು.
ಉದ್ಯೋಗ ಖಾತರಿ ಯೋಜನೆಯಲ್ಲಿ ಹೆಚ್ಚಿನ ಮಾನವ ದಿನಗಳ ಸೃಜನೆ ಮಾಡಬೇಕು. ಗ್ರಾಮೀಣ ಭಾಗಗಳಲ್ಲಿ ಸ್ವಚ್ಛತಾ ಆಂದೋಲನಾ ನಡೆಸಬೇಕು. ಮನೆ ಮನೆಯಲ್ಲೂ ಹಸಿ ಕಸ ಮತ್ತು ಒಣಕಸ ಬೇರ್ಪಡಿಸುವಂತೆ ಜಾಗೃತಿಗೊಳಿಸಬೇಕು. ಗ್ರಾಮ ಪಂಚಾಯಿತಿ ವಾಹನಗಳ ಮೂಲಕ ಸಂಗ್ರಹಿಸಿಕೊಂಡು ಘನ ತ್ರಾಜ್ಯ ವಿಲೇವಾರಿ ಘಟಕಗಳಿಗೆ ಸಾಗಿಸಬೇಕು. ಸ್ವಚ್ಛತೆ ಭರತ್ ಮಿಷನ್ ಮೂಲಕ ದೊರೆಯುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪಂಚತಂತ್ರ 2.0 ಗ್ರಾಮ ಪಂಚಾಯಿತಿ ತಂತ್ರಾಂಶ ಅಪ‌್ಡೇಟ್ ಆಗಬೇಕು. ಅರಿವು ಕೇಂದ್ರಗಳನ್ನು ಡಿಜಿಟಲ್ ಕೇಂದ್ರಗಳನ್ನಾಗಿಸಬೇಕು. ಎಲ್ಲ ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಅರಿವು ಕೇಂದ್ರಗಳಿವೆ. ಅವು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ನಿಗಾ ವಹಿಸಬೇಕು ಎಂದರು.
ತಾಲ್ಲೂಕಿನ ಊಲವಾಡಿ, ಉಪ್ಪರಪೇಟೆ, ಬಟ್ಲಹಳ್ಳಿ ಅರಿವು ಕೇಂದ್ರಗಳಿಗೆ ‘ಅಲೆಕ್ಸಾ’ ಸಾಧನ ಮತ್ತು ಗ್ರಾಮ ಪಂಚಾಯಿತಿಗಳಿಗೆ ಪಿಒಎಸ್ ಯಂತ್ರಗಳನ್ನು ವಿತರಿಸಿದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಅತೀಕ್ ಪಾಷಾ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಎಸ್.ಆನಂದ್, ಸಹಾಯಕ ನಿರ್ದೇಶಕಿ ಕವಿತಾ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರಾಮಚಂದ್ರಾರೆಡ್ಡಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ನರೇಗಾ ಸಿಬ್ಬಂದಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.