ADVERTISEMENT

ಚಿಂತಾಮಣಿ ಸರ್ಕಾರಿ ಆಸ್ಪತ್ರೆಗೆ ನಿರ್ಮಲಾನಂದನಾಥ ಸ್ವಾಮೀಜಿ ಭೇಟಿ

​ಪ್ರಜಾವಾಣಿ ವಾರ್ತೆ
Published 1 ಜನವರಿ 2026, 4:22 IST
Last Updated 1 ಜನವರಿ 2026, 4:22 IST
ಚಿಂತಾಮಣಿಯಲ್ಲಿ ಸೋಮವಾರ ನಿರ್ಮಲಾನಂದನಾಥ ಸ್ವಾಮೀಜಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ವೀಕ್ಷಿಸಿದರು. ಸಚಿವ ಡಾ.ಎಂ.ಸಿ. ಸುಧಾಕರ್ ಸ್ವಾಮೀಜಿಗೆ ವಿವರಣೆ ನೀಡಿದರು
ಚಿಂತಾಮಣಿಯಲ್ಲಿ ಸೋಮವಾರ ನಿರ್ಮಲಾನಂದನಾಥ ಸ್ವಾಮೀಜಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ವೀಕ್ಷಿಸಿದರು. ಸಚಿವ ಡಾ.ಎಂ.ಸಿ. ಸುಧಾಕರ್ ಸ್ವಾಮೀಜಿಗೆ ವಿವರಣೆ ನೀಡಿದರು   

ಚಿಂತಾಮಣಿ: ನಗರದ ಹೊರವಲಯದ ಬೆಂಗಳೂರು ರಸ್ತೆಯಿಂದ ಕೈಲಾಸಗಿರಿಗೆ ಹೋಗುವ ರಸ್ತೆಯ ಪಕ್ಕದ ಗುಡ್ಡದ ಮೇಲೆ ₹1.49 ಕೋಟಿ ವೆಚ್ಚದಲ್ಲಿ ಎಂಜಿನಿಯರಿಂಗ್ ಕಾಲೇಜಿನ ಕಟ್ಟಡ ಕಾಮಗಾರಿ ಭರದಿಂದ ನಡೆಯುತ್ತಿರುವ ಬೆನ್ನಲ್ಲೇ, ವೈದ್ಯಕೀಯ ಕಾಲೇಜು ಸ್ಥಾಪನೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ಕಾರ್ಯ ಪ್ರವೃತ್ತರಾಗಿದ್ದಾರೆ. 

ಈ ನಿಟ್ಟಿನಲ್ಲಿ ಈಗಾಗಲೇ ವೈದ್ಯಕೀಯ ಕಾಲೇಜು ನಡೆಸುತ್ತಿರುವ ಅನೇಕ ಸಂಘ ಸಂಸ್ಥೆಗಳನ್ನು ಅವರು ಸಂಪರ್ಕಿಸುತ್ತಿದ್ದಾರೆ. ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ನಗರದ ಸರ್ಕಾರಿ ಆಸ್ಪತ್ರೆಗೆ ಸಚಿವ ಡಾ.ಎಂ.ಸಿ. ಸುಧಾಕರ್ ಅವರೊಂದಿಗೆ ಭೇಟಿ ನೀಡಿ, ಎಲ್ಲ ವಿಭಾಗಗಳನ್ನು ವೀಕ್ಷಿಸಿದರು. 

100 ಹಾಸಿಗೆಗಳ ಸರ್ಕಾರಿ ಆಸ್ಪತ್ರೆಯನ್ನು 250 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ಯೋಜನೆ ರೂಪಿಸಿ ಕಾಮಗಾರಿ ಆರಂಭಿಸಲಾಗಿದೆ. ಆಸ್ಪತ್ರೆ ಸಮೀಪ ಇದ್ದ ಲೋಕೋಪಯೋಗಿ ಇಲಾಖೆ ಕಚೇರಿಯನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಆ ಜಾಗದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಆಸ್ಪತ್ರೆ ಸ್ಥಾಪಿಸಲಾಗಿದೆ. ಅದರಲ್ಲಿ ಸುಮಾರು 250 ಹಾಸಿಗೆಗಳ ಸೌಲಭ್ಯ ಕಲ್ಪಿಸಲು ಅವಕಾಶವಿದೆ. ಆಸ್ಪತ್ರೆಯನ್ನು ಅತ್ಯಾಧುನಿಕ ಕಾರ್ಪೋರೇಟ್ ಶೈಲಿಯಲ್ಲಿ ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ತಿಳಿಸಿದರು.

ADVERTISEMENT

ವೈದ್ಯಕೀಯ ಕಾಲೇಜು ಸ್ಥಾಪನೆಗೆ 15–20 ಎಕರೆ ಜಾಗ ಗುರುತಿಸಲಾಗಿದೆ. ವೈದ್ಯಕೀಯ ಕಾಲೇಜು ಸ್ಥಾಪನೆಗೆ ಹಲವರೊಂದಿಗೆ ಸಂಪರ್ಕದಲ್ಲಿದ್ದೇನೆ. ನಗರದ ಸರ್ಕಾರಿ ಆಸ್ಪತ್ರೆಯನ್ನು ವೈದ್ಯಕೀಯ ಕಾಲೇಜು ಬಳಸಿಕೊಳ್ಳಲು ಅವಕಾಶ ಮಾಡಿಕೊಡಲಾಗುವುದು. ವೈದ್ಯಕೀಯ ಶಿಕ್ಷಣ ಸಚಿವರ ಜೊತೆಗೂ ಈಗಾಗಲೇ ಮಾತನಾಡಿದ್ದೇನೆ ಎಂದು ಸಚಿವ ಡಾ.ಎಂ.ಸಿ. ಸುಧಾಕರ್ ಇತ್ತೀಚೆಗೆ ಹೇಳಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.