ADVERTISEMENT

ಚಿಕ್ಕಬಳ್ಳಾಪುರ: ಲಸಿಕೆ ನೀಡಲು ಮಾಹಿತಿ ಸಂಗ್ರಹಿಸಿ

ಕೋವಿಡ್-19 ಲಸಿಕಾ ಪೂರ್ವ ಸಿದ್ಧತಾ ತಯಾರಿ ಕುರಿತು ಜಿಲ್ಲಾ ಕಾರ್ಯಪಡೆ ಸಭೆ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2020, 14:29 IST
Last Updated 28 ಅಕ್ಟೋಬರ್ 2020, 14:29 IST
ಸಭೆಯಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಮಾತನಾಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಮಾತನಾಡಿದರು.   

ಚಿಕ್ಕಬಳ್ಳಾಪುರ: ‘ಕೋವಿಡ್-19 ಕಾಯಿಲೆಗೆ ಶೀಘ್ರದಲ್ಲೇ ಲಸಿಕೆಯು ಲಭ್ಯವಾಗಲಿದ್ದು, ಅದನ್ನು ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಆರೋಗ್ಯ ಇಲಾಖೆ ಮತ್ತು ಖಾಸಗಿ ಆಸ್ಪತ್ರೆ ಸಿಬ್ಬಂದಿಗೆ ಆದ್ಯತೆ ಮೇರೆಗೆ ನೀಡಲಾಗುತ್ತದೆ. ಅದಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳು ಲಸಿಕೆ ಪಡೆಯುವ ಫಲಾನುಭವಿಗಳ ಮಾಹಿತಿ ಸಂಗ್ರಹಿಸಬೇಕು’ ಎಂದು ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಕೋವಿಡ್-19 ಲಸಿಕಾ ಪೂರ್ವ ಸಿದ್ಧತಾ ತಯಾರಿ ಸಂಬಂಧ ನಡೆದ ಜಿಲ್ಲಾ ಕಾರ್ಯಪಡೆ ಸಭೆಯಲ್ಲಿ ಅವರು ಮಾತನಾಡಿದರು.

‘ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕೋವಿಡ್‌ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ಹಾಗೂ ಮನೆಯಲ್ಲೇ ಕೋವಿಡ್‌ಗೆ ಚಿಕಿತ್ಸೆ ತೆಗೆದುಕೊಳ್ಳುತ್ತಿರುವವರ ಬಗ್ಗೆ ನಿಗಾ ವಹಿಸಬೇಕು’ ಎಂದು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಇಂದಿರಾ ಕಬಾಡೆ ಮಾತನಾಡಿ, ‘ರಾಜ್ಯ ಸರ್ಕಾರದಿಂದ ಬಂದಿರುವ ಆದೇಶದಂತೆ ಕೋವಿಡ್-19ಗೆ ಶೀಘ್ರದಲ್ಲೇ ಲಸಿಕೆ ಸಿಗಲಿದೆ. ಈ ಲಸಿಕೆ ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿಗೆ ಆದ್ಯತೆ ಮೇರೆಗೆ ನೀಡಲಾಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲೆಯಲ್ಲಿ ಫಲಾನುಭವಿಗಳ ಮಾಹಿತಿ ಸಂಗ್ರಹಿಸಲಾಗುತ್ತಿದೆ’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ. ಶಿವಶಂಕರ್, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ಚನ್ನಕೇಶವ ರೆಡ್ಡಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ರಮೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕು ಆರೋಗ್ಯಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.