ADVERTISEMENT

ಆದ್ಯತೆ ಮೇರೆಗೆ ಕಾಮಗಾರಿ ಪೂರ್ಣಗೊಳಿಸಿ

​ಪ್ರಜಾವಾಣಿ ವಾರ್ತೆ
Published 28 ಜುಲೈ 2020, 14:02 IST
Last Updated 28 ಜುಲೈ 2020, 14:02 IST
ಸಭೆಯಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಮಾತನಾಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಮಾತನಾಡಿದರು.   

ಚಿಕ್ಕಬಳ್ಳಾಪುರ: ‘ಪ್ರವಾಸಿ ತಾಣವಾಗಿ ನಿರ್ಮಾಣವಾಗುತ್ತಿರುವ ಕಂದವಾರ ಕೆರೆಯ ಕಾಮಗಾರಿಯನ್ನು ಅಕ್ಟೋಬರ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು’ ಎಂದು ಜಿಲ್ಲಾಧಿಕಾರಿ ಆರ್.ಲತಾ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ನಡೆದ ಚಿಕ್ಕಬಳ್ಳಾಪುರ ನಗರ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಯ ವಿಶೇಷ ಅನುದಾನದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ನಮ್ಮ ಅವಧಿಯಲ್ಲಿ ಕಂದವಾರ ಕೆರೆಯನ್ನು ಪ್ರವಾಸಿ ತಾಣವಾಗಿ ನಿರ್ಮಾಣವಾಗುತ್ತಿರುವುದು ಸಂತೋಷದ ವಿಷಯ. ಕಂದವಾರ ಕೆರೆಯ ಬಳಿ ನಿರ್ಮಾಣವಾಗುತ್ತಿರುವ ಉದ್ಯಾನವನ್ನು ಮುಂದಿನ ನವೆಂಬರ್‌ನಲ್ಲಿ ಉದ್ಘಾಟನೆ ಮಾಡಲು ಚಿಂತಿಸಲಾಗಿದೆ’ ಎಂದು ಹೇಳಿದರು.

ADVERTISEMENT

‘ಕೆರೆಯ ಒಳಭಾಗದಲ್ಲಿ ತೇಲುವ ಕಾರಂಜಿ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳ ನೀಲಿನಕ್ಷೆಯ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಿಗದಿತ ವೇಳೆಗೆ ಪೂರ್ಣಗೊಳಿಸಬೇಕು’ ಎಂದು ಸೂಚಿಸಿದರು.

‘ನಗರೋತ್ಥಾನ (ಮುನಿಸಿಪಾಲಿಟಿ)-3 ಯೋಜನೆಗಳು ಮತ್ತು ನಗರೋತ್ಥಾನ ವಿಶೇಷ ಅನುದಾನ 2016-17 ರ ಯೋಜನೆಗಳ ಬಗ್ಗೆ ಚರ್ಚಿಸಿ, ಯೋಜನೆಗಳ ಅಡಿಯಲ್ಲಿನ ನಾಮಫಲಕಗಳು, ಒಳಭಾಗದ ರಸ್ತೆ, ಸ್ಮಶಾನಗಳಲ್ಲಿ ಸ್ನಾನಗೃಹಗಳು ಮತ್ತು ಶೌಚಾಲಯಗಳ ನಿರ್ಮಾಣ ಸೇರಿದಂತೆ, ನಗರದಲ್ಲಿನ ಉದ್ಯಾನವನಗಳ ನಿರ್ಮಾಣ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು’ ಎಂದರು.

ಪ್ರಮುಖವಾಗಿ ನಗರದ ಬಿ.ಬಿ ರಸ್ತೆ ಮತ್ತು ಎಂ.ಜಿ ರಸ್ತೆಯಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ನಿಗದಿತ ಅವಧಿ ಒಳಗೆ ಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‍ಕುಮಾರ್, ಜಿಲ್ಲಾ ನಗರಾಭಿವೃದ್ಧಿ ಪ್ರಾಧಿಕಾರದ ನಿರ್ದೇಶಕ ಭಾಸ್ಕರ್, ಜಿಲ್ಲಾ ನಗರಾಭಿವೃಧ್ಧಿ ಕೋಶದ ಯೋಜನಾಧಿಕಾರಿ ರೇಣುಕಾ, ನಗರಸಭೆ ಆಯುಕ್ತ ಲೋಹಿತ್ ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.