ADVERTISEMENT

ಶಿಡ್ಲಘಟ್ಟ | 'ಸಿದ್ದರಾಮಯ್ಯ ರಾಜಕೀಯ ಜೀವನಕ್ಕೆ ಕಳಂಕ ತರಲು ಯತ್ನ'

ಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2024, 15:36 IST
Last Updated 20 ಆಗಸ್ಟ್ 2024, 15:36 IST
ಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಾದಯಾತ್ರೆ ನಡೆಸಿ ಬಿಜೆಪಿ, ಜೆಡಿಎಸ್ ವಿರುದ್ಧ ಪ್ರತಿಭಟಿಸಿದರು
ಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಾದಯಾತ್ರೆ ನಡೆಸಿ ಬಿಜೆಪಿ, ಜೆಡಿಎಸ್ ವಿರುದ್ಧ ಪ್ರತಿಭಟಿಸಿದರು   

ಶಿಡ್ಲಘಟ್ಟ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭ್ರಷ್ಟಾಚಾರ ರಹಿತ ರಾಜಕೀಯ ಜೀವನಕ್ಕೆ ಕಳಂಕ ತರುವ ಕೆಲಸಕ್ಕೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮುಂದಾಗಿದೆ. ಅದು ಯಾವುದೇ ಕಾರಣಕ್ಕೂ ಈಡೇರುವುದಿಲ್ಲ’ ಎಂದು ಕಾಂಗ್ರೆಸ್ ಮುಖಂಡ ರಾಜೀವ್‌ ಗೌಡ ಹೇಳಿದರು.

ಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.

‘ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಉತ್ತಮ ಆಡಳಿತ ನೀಡುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳ ಮೂಲಕ ಮನೆ ಮನೆ ಮಾತಾಗಿದ್ದಾರೆ. ಇದನ್ನು ಸಹಿಸದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖಂಡರು ಸಿದ್ದರಾಮಯ್ಯ ವಿರುದ್ಧದ ಪಿತೂರಿ ನಡೆಸಿ ಮುಡಾ ಸೈಟುಗಳ ಹಗರಣವನ್ನು ಅವರ ತಲೆಗೆ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಅವರ ತಾಳಕ್ಕೆ ತಕ್ಕಂತೆ ರಾಜ್ಯಪಾಲರು ಕುಣಿಯುತ್ತಿದ್ದು ಇದು ಪ್ರಜಾಪ್ರಭುತ್ವದ ಕಗ್ಗೊಲೆ’ ಎಂದು ದೂರಿದರು.

ADVERTISEMENT

‘ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಆಯ್ಕೆಯಾದ ಒಂದು ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಈಡೇರುವುದಿಲ್ಲ. ಇಡೀ ರಾಜ್ಯದ 6.5 ಕೋಟಿ ಜನರು ಸಿದ್ದರಾಮಯ್ಯ ಅವರ ಹಿಂದೆ ಇದ್ದಾರೆ’ ಎಂದರು.

ಶಿಡ್ಲಘಟ್ಟ ನಗರದ ಕಾಂಗ್ರೆಸ್ ಭವನದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಅಲ್ಲಿಂದ ಕೋಟೆ ವೃತ್ತದ ಮೂಲಕ ಸಾರಿಗೆ ಬಸ್ ನಿಲ್ದಾಣದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ಬಿಜೆಪಿ ಜೆಡಿಎಸ್ ಮೈತ್ರಿ ಪಕ್ಷಗಳ ವಿರುದ್ಧ ಘೋಷಣೆ ಕೂಗಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಉದಯ ಶಂಕರ್, ಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಡಾಲ್ಫಿನ್ ನಾಗರಾಜ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಯಾಸ್ಮಿನ್ ತಾಜ್, ಟಿ.ಕೆ.ನಟರಾಜ್, ಅಫ್ಸರ್‌ಪಾಷ, ಸಾದಲಿ ಪ್ರಕಾಶ್, ಎಲ್.ಅನಿಲ್ ಕುಮಾರ್, ಮನೋಹರ್, ಮುನೀಂದ್ರ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.