ADVERTISEMENT

ಡಿಕೆಶಿ ಪದಗ್ರಹಣ ಯಶಸ್ವಿಗೆ ಸಹಕರಿಸಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಪದಗ್ರಹಣ ಸಮಾರಂಭದ ಪೂರ್ವಭಾವಿ ಸಭೆ

​ಪ್ರಜಾವಾಣಿ ವಾರ್ತೆ
Published 27 ಜೂನ್ 2020, 16:37 IST
Last Updated 27 ಜೂನ್ 2020, 16:37 IST
ಸಭೆಯಲ್ಲಿ ಮುಖಂಡ ಕೆ.ವಿ.ನವೀನ್ ಕಿರಣ್ ಮಾತನಾಡಿದರು.
ಸಭೆಯಲ್ಲಿ ಮುಖಂಡ ಕೆ.ವಿ.ನವೀನ್ ಕಿರಣ್ ಮಾತನಾಡಿದರು.   

ಚಿಕ್ಕಬಳ್ಳಾಪುರ: ‘ಡಿ.ಕೆ.ಶಿವಕುಮಾರ್‌ ಅವರ ಕೆಪಿಸಿಸಿ ಅಧ್ಯಕ್ಷ ಪದಗ್ರಹಣ ಸಮಾರಂಭವು ಜುಲೈ 2ರಂದು ನಡೆಯಲಿದ್ದು, ಇದರ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು. ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಕಾರ್ಯಕ್ರಮ ನಡೆಯಬೇಕು’ ಎಂದು ಪದಗ್ರಹಣ ಸಮಾರಂಭದ ಜಿಲ್ಲಾ ಉಸ್ತುವಾರಿ ಉದಯಶಂಕರ್ ಹೇಳಿದರು.

ನಗರದಲ್ಲಿ ಶನಿವಾರ ನಡೆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪದಗ್ರಹಣ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

‘ಪದಗ್ರಹಣ ಸಮಾರಂಭವು ನೇರಪ್ರಸಾರವಾಗಲಿದ್ದು, ಇದನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು. ಸಿಗ್ನಲ್ ಸಿಗುವುದಿಲ್ಲವೆಂದು ಯಾರೂ ನೆಪ ಹೇಳಬಾರದು. ಗ್ರಾಮ ಪಂಚಾಯಿತಿ ಮುಖ್ಯ ಕೇಂದ್ರದಲ್ಲೇ ಸಭೆ ನಡೆಸಬೇಕು ಎಂಬ ನಿಯಮವಿಲ್ಲ. ನೆಟ್‌ವರ್ಕ್ ಸಿಗುವ ಕಡೆ ಎಲ್ಲಾದರೂ ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಬೇಕು’ ಎಂದು ಸಲಹೆ ನೀಡಿದರು.

ADVERTISEMENT

‘ಪ್ರತಿಯೊಂದು ಘಟಕದ ಮುಂಚೂಣಿ ನಾಯಕರು ಸಮಾರಂಭದ ಪೂರ್ವಭಾವಿಯಾಗಿ ಬೂತ್‌ ಮಟ್ಟದಲ್ಲಿ ಕಾರ್ಯಕ್ರಮದ ಬಗ್ಗೆ ಕಾರ್ಯಕರ್ತರಿಗೆ ತಿಳುವಳಿಕೆ ಮೂಡಿಸಬೇಕು. ಪಕ್ಷ ಸಂಘಟನೆಗೆ ಒತ್ತು ನೀಡುವ ಮುಖಂಡರಿಗೆ ಮುಂಬರುವ ದಿನಗಳಲ್ಲಿ ಉತ್ತಮ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ಅಧ್ಯಕ್ಷರ ಚಿಂತನೆ ಇದೆ’ ಎಂದು ಹೇಳಿದರು.

‘ಕಾಂಗ್ರೆಸ್‌ನಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿಜವಾದ ಜೋಡೆತ್ತುಗಳು. ಉಭಯ ನಾಯಕರು ಮುಖಂಡತ್ವದಲ್ಲಿ ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಅದಕ್ಕಾಗಿ ಪಕ್ಷದ ಕಾರ್ಯಕರ್ತರು, ಮುಖಂಡರು ಜವಾಬ್ದಾರಿಗಳನ್ನು ಅರಿತು ಗಂಭೀರವಾಗಿ ಪಕ್ಷ ಸಂಘಟನೆಗೆ ಶ್ರಮಿಸಬೇಕು’ ಎಂದರು.

ಪದಗ್ರಹಣ ಸಮಾರಂಭದ ಜಿಲ್ಲಾ ಉಸ್ತುವಾರಿ ಕವಿತಾ ರೆಡ್ಡಿ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎನ್.ಕೇಶವ ರೆಡ್ಡಿ, ಮುಖಂಡರಾದ ಕೆ.ವಿ.ನವೀನ್ ಕಿರಣ್, ಯಲುವಹಳ್ಳಿ ರಮೇಶ್, ಪುರದಗಡ್ಡೆ ಕೃಷ್ಣಪ್ಪ, ಕೆಪಿಸಿಸಿ ಸದಸ್ಯ ಎಸ್.ಪಿ.ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಾಮಕೃಷ್ಣ ಮತ್ತು ಜಯರಾಂ, ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಎನ್.ಪ್ರಕಾಶ್, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಸುಬ್ಬರಾಯಪ್ಪ ಸಭೆಯಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.