ADVERTISEMENT

ಕಾಂಗ್ರೆಸ್‌ಗೆ ಬಿಜೆಪಿ ತಿರುಗೇಟು

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2020, 8:18 IST
Last Updated 4 ಡಿಸೆಂಬರ್ 2020, 8:18 IST

ಬಾಗೇಪಲ್ಲಿ: ‘ತಾಲ್ಲೂಕಿನ ವಿವಿಧ ಯೋಜನೆಯ ಅನುಷ್ಠಾನದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರೇ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಇದರಿಂದ ವಿವಿಧ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆದಿರುವುದು ಸಾಬೀತಾಗಿದೆ. ಹೀಗಾಗಿ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್‌ ಮುಖಂಡರಿಗೆ ಇಲ್ಲ’ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಆರ್. ಪ್ರತಾಪ್‌ ತಿರುಗೇಟು ನೀಡಿದರು.

ಪಟ್ಟಣದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನ ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ಕೇಂದ್ರ, ರಾಜ್ಯ ಸರ್ಕಾರದಿಂದ ಕೋಟ್ಯಂತರ ಅನುದಾನ ಬಂದಿದೆ. ಅನುದಾನ ಬಳಕೆ ಹಾಗೂ ಕಾಮಗಾರಿಗಳಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ. ಉನ್ನತ ಮಟ್ಟದ ಅಧಿಕಾರಿಗಳಿಂದ ತನಿಖೆ ಮಾಡಬೇಕು ಎಂದು ಶಾಸಕರ ಬೆಂಬಲಿಗರು ತಾಲ್ಲೂಕು ಪಂಚಾಯಿತಿ ಕಚೇರಿ ಮುಂದೆ ಪ್ರತಿಭಟಿಸಿದ್ದಾರೆ. ಶಾಸಕರು ಲೋಕಾಯುಕ್ತಕ್ಕೆ ನೀಡಿರುವ ದೂರಿನ ತನಿಖೆ ಯಾವ ಹಂತದಲ್ಲಿ ಇದೆ? ಎಂದು ಪ್ರಶ್ನಿಸಿದರು.

ಕ್ಷೇತ್ರದಲ್ಲಿ ಆಗಿರುವ ಕಾಮಗಾರಿಗಳಲ್ಲಿ ಹಣ ದುರ್ಬಳಕೆ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆಯಲಾಗಿದೆ ಎಂದರು.

ADVERTISEMENT

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರ ಬಗ್ಗೆ ಅವಹೇಳನಕಾರಿ ಪದಬಳಕೆ ಮಾಡಿರುವ ಶಾಸಕರ ಆಪ್ತ ಸಹಾಯಕ ಮೋಹನ್ ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕು. ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾದ ಜಿಲ್ಲಾ ಅಧ್ಯಕ್ಷ ವೆಂಕಟೇಶ್, ಗುಡಿಬಂಡೆ ಮಂಡಲ ಅಧ್ಯಕ್ಷ ಗೆಂಗಿರೆಡ್ಡಿ, ಮುಖಂಡರಾದ ಗೋಪಾಲ್, ಲೋಕೇಶ್ ಕುಮಾರ್, ಮಲ್ಲಿಕಾರ್ಜುನ, ಬಾಬಾಜಾನ್, ಶ್ರೀನಿವಾಸ್, ನಿರ್ಮಲಮ್ಮ, ವೆಂಕಟಲಕ್ಷ್ಮಮ್ಮ, ಮಂಜುಳಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.