ADVERTISEMENT

ಕೋವಿಡ್‌: ಭಯಬೇಡ ಮುಂಜಾಗ್ರತೆ ಇರಲಿ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2020, 4:41 IST
Last Updated 23 ನವೆಂಬರ್ 2020, 4:41 IST
ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಕೋವಿಡ್‌ ಮುಂಜಾಗ್ರತಾ ಕ್ರಮಗಳ ಕುರಿತ ಜಾಗೃತಿ ಫಲಕಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಕೋವಿಡ್‌ ಮುಂಜಾಗ್ರತಾ ಕ್ರಮಗಳ ಕುರಿತ ಜಾಗೃತಿ ಫಲಕಗಳನ್ನು ವಿತರಿಸಲಾಯಿತು.   

ಚಿಕ್ಕಬಳ್ಳಾಪುರ: ‘ಕೋವಿಡ್‌ ಬಗ್ಗೆ ತಾತ್ಸಾರ ಮನೋಭಾವ ಬೇಡ. ಸರ್ಕಾರ ಮತ್ತು ಜಿಲ್ಲಾಡಳಿತ ಸೂಚಿಸುವ ಮುಂಜಾಗ್ರತಾ ಕ್ರಮಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು’ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಭೈರಪ್ಪ ಶಿವಲಿಂಗ ನಾಯಿಕ ತಿಳಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಇಲಾಖೆ ಹಾಗೂ ನಗರ ಪೊಲೀಸ್ ಠಾಣೆ ಸಹಯೋಗದಲ್ಲಿ ನಗರದ ವಾಪಸಂದ್ರದ ರೇಷ್ಮೆಗೂಡು ಮಾರುಕಟ್ಟೆ ಎದುರು ಆಯೋಜಿಸಿದ್ದ ಕೋವಿಡ್‌ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸ್ವಯಂಪ್ರೇರಿತವಾಗಿ ಪ್ರತಿಯೊಬ್ಬರೂ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಇತರರಿಗೆ ಈ ಬಗ್ಗೆ ಜಾಗೃತಿ ಮೂಡಿಸಬೇಕು’ ಎಂದು ಹೇಳಿದರು.

ADVERTISEMENT

ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದೇವರಾಜ್ ಮಾತನಾಡಿ, ‘ಪ್ರಸ್ತುತ ಸಂದರ್ಭದಲ್ಲಿ ಸಾರ್ವಜನಿಕರು ಆರೋಗ್ಯದ ಬಗ್ಗೆ ಕಾಳಜಿವಹಿಸುವ ಅಗತ್ಯವಿದೆ. ಆರೋಗ್ಯಾಧಿಕಾರಿಗಳು ನೀಡುವ ಸಲಹೆ ತಪ್ಪದೆ ಪಾಲಿಸುವ ಮೂಲಕ ಆರೋಗ್ಯ ಕಾಪಾಡಿಕೊಂಡು ಕೋವಿಡ್‌ನಿಂದ ದೂರವಿರಬೇಕು’ ಎಂದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಂಜುಳಾ ಮಾತನಾಡಿ, ‘ಎಷ್ಟೇ ಕೆಲಸದ ಒತ್ತಡಗಳಲ್ಲಿದ್ದರೂ ನಮ್ಮ ಆರೋಗ್ಯದ ಕಡೆ ನಾವು ಹೆಚ್ಚು ಗಮನ ನೀಡಬೇಕು. ಕೊರೊನಾ ಬಾರದಂತೆ ಅಗತ್ಯ ಮುಂಜಾಗ್ರತೆಗಳನ್ನು ಕೈಗೊಳ್ಳಬೇಕು. ಆರೋಗ್ಯದಲ್ಲಿ ಏರುಪೇರಾದರೆ ತಕ್ಷಣ ವೈದ್ಯರ ಸಲಹೆ ಪಡೆಯಬೇಕು ಎಂದರು.

ನಗರಸಭೆ ಸದಸ್ಯೆ ಎಸ್. ಸುಮಾ ಶಶಿಶೇಖರ್, ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿಯ ಆರೋಗ್ಯ ಮೇಲ್ವಿಚಾರಕ ಮಧುಸೂಧನ, ಆರೋಗ್ಯ ಸಹಾಯಕ ಪ್ರತಿಭಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.