ADVERTISEMENT

ಚಿಕ್ಕಬಳ್ಳಾಪುರ: ಕ್ರಿಕೆಟ್ ಬೆಟ್ಟಿಂಗ್; 35 ಪ್ರಕರಣ ದಾಖಲು

ದಂಧೆಯ ಬಗ್ಗೆ ಸಮೀಪದ ಪೊಲೀಸ್ ಠಾಣೆ ಅಥವಾ ಕಂಟ್ರೋಲ್ ರೂಂಗೆ ಮಾಹಿತಿ ನೀಡಲು ಎಸ್‌ಪಿ ಮನವಿ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2021, 15:22 IST
Last Updated 11 ಅಕ್ಟೋಬರ್ 2021, 15:22 IST
ಜಿ.ಕೆ.ಮಿಥುನ್ ಕುಮಾರ್
ಜಿ.ಕೆ.ಮಿಥುನ್ ಕುಮಾರ್   

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಐಪಿಎಲ್ ಬೆಟ್ಟಿಂಗ್ ಹೆಚ್ಚಿದೆ. ಪ್ರಸಕ್ತ ಸಾಲಿನ ಆರಂಭದಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಐಪಿಎಲ್ ಬೆಟ್ಟಿಂಗ್‌ಗೆ ಸಂಬಂಧಿಸಿದಂತೆ 35 ಪ್ರಕರಣಗಳು ದಾಖಲಾಗಿವೆ.

ಅದರಲ್ಲಿಯೂ ಕಳೆದ ಒಂದು ವಾರದಿಂದ ಪೊಲೀಸರು ಈ ಬೆಟ್ಟಿಂಗ್ ದಂಧೆಯ ಮೇಲೆ ತೀವ್ರ ನಿಗಾ ಇಟ್ಟಿದ್ದಾರೆ. ಈ ಪರಿಣಾಮ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ.

ಬಾಗೇಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 13, ಚಿಕ್ಕಬಳ್ಳಾಪುರ ನಗರ ಠಾಣೆ, ಚಿಂತಾಮಣಿ ನಗರ, ನಂದಿಗಿರಿಧಾಮ, ಗೌರಿಬಿದನೂರು ಗ್ರಾಮಾಂತರ ಠಾಣೆಯಲ್ಲಿ ತಲಾ ಎರಡು ಪ್ರಕರಣ ದಾಖಲಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಐದು, ಮಂಚೇನಹಳ್ಳಿ ಮೂರು, ಚಿಂತಾಮಣಿ ಗ್ರಾಮಾಂತರ ನಾಲ್ಕು ಮತ್ತು ಪೆರೇಸಂದ್ರ ಮತ್ತು ಶಿಡ್ಲಘಟ್ಟ ಪೊಲೀಸ್ ಠಾಣೆಯಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ.

ADVERTISEMENT

ಬಾಗೇಪಲ್ಲಿ ತಾಲ್ಲೂಕು ವ್ಯಾಪ್ತಿಯಲ್ಲಿ ಗರಿಷ್ಠ ಪ್ರಕರಣಗಳು ದಾಖಲಾಗಿವೆ. ಇಲ್ಲಿ ಪೊಲೀಸರು ಹೆಚ್ಚು ನಿಗಾ ಇಟ್ಟಿದ್ದಾರೆ.

‘ಜಿಲ್ಲೆಯಲ್ಲಿ ಗರಿಷ್ಠ ಪ್ರಮಾಣದಲ್ಲಿ ಬೆಟ್ಟಿಂಗ್ ಪ್ರಕರಣಗಳು ದಾಖಲಾಗಿವೆ. ಬೆಟ್ಟಿಂಗ್ ದಂಧೆಯನ್ನು ಮಟ್ಟ ಹಾಕಲಾಗಿದೆ. ಬಹಳಷ್ಟು ಕಿಂಗ್‌ಪಿನ್‌ಗಳ ವಿರುದ್ಧ ಪ್ರಕರಣ ದಾಖಲಾಗಿದ್ದು ಅವರನ್ನು ಬಂಧಿಸಲಾಗಿದೆ. ಜಿಲ್ಲೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.

ಕಳೆದ ವರ್ಷ ಕ್ರಿಕೆಟ್ ಬೆಟ್ಟಿಂಗ್ ದಂಧೆಯ ಮೇಲೆ ಬಂಧನಕ್ಕೆ ಒಳಗಾದವರನ್ನು ಠಾಣೆಗೆ ಕರೆಯಿಸಿ ಎಚ್ಚರಿಕೆ ನೀಡಲಾಗಿದೆ. ಇಂತಹ ದಂಧೆಗಳು ಸಾರ್ವಜನಿಕರ ಗಮನಕ್ಕೆ ಬಂದರೆ ಅವರು ಕಂಟ್ರೋಲ್ ರೂಂ ಅಥವಾ ಸಮೀಪದ ಠಾಣೆಗೆ ಮಾಹಿತಿ ನೀಡಬೇಕು ಎಂದು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.