ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ. ಅಮೃತಗೌಡ
ಚಿಕ್ಕಬಳ್ಳಾಪುರ: ಸಚಿವ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ ವಿಚಾರವಾಗಿ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ. ಅಮೃತಗೌಡ ಅವರಿಗೆ ಧಮ್ಕಿ ಹಾಕಿದ್ದಾರೆ.
ಈ ಆಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ರಾಜೀವ್ ಗೌಡ ವರ್ತನೆಯ ಬಗ್ಗೆ ಅಧಿಕಾರಿಗಳ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಮಂಗಳವಾರ ಸಂಜೆ ಶಿಡ್ಲಘಟ್ಟದ ನೆಹರೂ ಮೈದಾನದಲ್ಲಿ ‘ಕಲ್ಟ್’ ಸಿನಿಮಾದ ಪ್ರಚಾರ ಸಭೆ ನಡೆದಿತ್ತು. ಕೋಟೆ ವೃತ್ತದಲ್ಲಿ ರಸ್ತೆಗೆ ಅಡ್ಡವಾಗಿ ಸಿನಿಮಾ ಪ್ರಚಾರದ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿತ್ತು. ಈ ರಸ್ತೆಯಲ್ಲಿ ಸಾಗುವಾಗ ವಾಹನಕ್ಕೆ ಈ ಫ್ಲೆಕ್ಸ್ ಅಡ್ಡಿಯಾಗಿದೆ. ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಫ್ಲೆಕ್ಸ್ ಅನ್ನು ನಗರಸಭೆ ಸಿಬ್ಬಂದಿ ಕಚೇರಿಗೆ ತಂದಿಟ್ಟಿದ್ದರು. ಈ ಬಗ್ಗೆ ನಗರಸಭೆ ಮಾಜಿ ಅಧ್ಯಕ್ಷ ಹಾಗೂ ರಾಜೀವ್ ಗೌಡ ಬೆಂಬಲಿಗ ಅಪ್ಸರ್‌ಗೆ ಪೌರಾಯುಕ್ತರು ಮಾಹಿತಿ ಸಹ ನೀಡಿದ್ದರು.
ಫ್ಲೆಕ್ಸ್ ಬಿಚ್ಚಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ರಾಜೀವ್ ಗೌಡ, ಪೌರಾಯುಕ್ತೆಗೆ ಕರೆ ಮಾಡಿ ಜಟಾಪಟಿ ನಡೆಸಿದ್ದಾರೆ.
‘ನಮ್ಮ ಬ್ಯಾನರ್ ಬಿಚ್ಚಿಸಿದರೆ ಬೆಂಕಿ ಹಚ್ಚಿಸುವೆ. ನನ್ನ ಒಳ್ಳೆಯತನ ನೋಡಿದ್ದೀರಿ ಕೆಟ್ಟತನ ನೋಡಿಲ್ಲ’ ಎಂದು ಹರಿಹಾಯ್ದಿದ್ದಾರೆ.
ಆಗ ಪೌರಾಯುಕ್ತೆ ಅಮೃತಗೌಡ ಅವರು, ‘ರಸ್ತೆಯಲ್ಲಿ ಕಟ್ಟಿದ್ದಾರೆ. ಸಾರ್ವಜನಿಕರಿಂದ ದೂರು ಬಂದಿದೆ. ಅನುಮತಿ ಪಡೆಯದೆ ಬ್ಯಾನರ್ ಕಟ್ಟಿದ್ದಾರೆ. ಅಪಘಾತ ಆದರೆ ನಾವು ಹೊಣೆ...’ ಎಂದು ಹೇಳಿದ್ದಾರೆ.
ಆಗ ಮತ್ತಷ್ಟು ಕುಪಿತರಾದ ರಾಜೀವ್ ಗೌಡ, ಬೆಂಕಿ ಹಚ್ಚಿಸುವೆ, ಚಪ್ಪಲಿಯಲ್ಲಿ ಹೊಡೆಸುವೆ, ....ಮಗ... ಎಂದು ಅವಾಚ್ಯವಾಗಿ ನಿಂದಿಸಿದ್ದಾರೆ. ಶಿಡ್ಲಘಟ್ಟ ಜೆಡಿಎಸ್ ಶಾಸಕ ಬಿ.ಎನ್.ರವಿಕುಮಾರ್ ಅವರನ್ನೂ ಅವಾಚ್ಯವಾಗಿ ನಿಂದಿಸಿದ್ದಾರೆ. ಈ ಆಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರವಾಗಿ ಹರಿದಾಡುತ್ತಿವೆ.
ರಾಜೀವ್ ಗೌಡ 2023ರ ವಿಧಾನಸಭೆ ಚುನಾವಣೆಯಲ್ಲಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಅವರ ಪತ್ನಿ ಶಿಡ್ಲಘಟ್ಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಆಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.