ADVERTISEMENT

ಶಿಕ್ಷಣವೇ ಪ್ರಗತಿಗೆ‌ ಅಸ್ತ್ರ: ಜಿಲ್ಲಾಧಿಕಾರಿ ಆರ್.ಲತಾ

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಗೈಡ್ ವಿತರಣೆ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2021, 15:12 IST
Last Updated 5 ಮಾರ್ಚ್ 2021, 15:12 IST
ವಿದ್ಯಾರ್ಥಿಗಳನ್ನು ಉದ್ದೇಶಿಸಿ ಜಿಲ್ಲಾಧಿಕಾರಿ ಆರ್.ಲತಾ ಮಾತನಾಡಿದರು
ವಿದ್ಯಾರ್ಥಿಗಳನ್ನು ಉದ್ದೇಶಿಸಿ ಜಿಲ್ಲಾಧಿಕಾರಿ ಆರ್.ಲತಾ ಮಾತನಾಡಿದರು   

ಚಿಕ್ಕಬಳ್ಳಾಪುರ: ‘ಶಿಕ್ಷಣವೇ ಪ್ರಗತಿಗೆ ಅಸ್ತ್ರವಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಶಿಕ್ಷಣದ ಮಹತ್ವ ಅರಿತುಕೊಳ್ಳಬೇಕು‘ ಎಂದು ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.

ನಗರದ ಹೊರವಲಯದ ಎಸ್‌ಜೆಸಿಐಟಿ ಆವರಣದ ಪಾಲಿಟೆಕ್ನಿಕ್ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಗೈಡ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಳೆದ ವರ್ಷ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯದಲ್ಲಿಯೇ ಜಿಲ್ಲೆಯು ಪ್ರಥಮ ಸ್ಥಾನ ಪಡೆದಿದೆ. ಈ ವರ್ಷವೂ ಜಿಲ್ಲೆ ಮೊದಲ ಸ್ಥಾನ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಶ್ರಮವಹಿಸಬೇಕು ಎಂದು ಕಿವಿಮಾತು ಹೇಳಿದರು.

ADVERTISEMENT

ಶಿಕ್ಷಣ ಇಲ್ಲದಿದ್ದರೆ ಯಾವುದೇ ಸಾಧನೆ ಮಾಡಲು ಸಾಧ್ಯವಿಲ್ಲ. ಪ್ರತಿಯೊಬ್ಬರೂ ಶೈಕ್ಷಣಿಕವಾಗಿ ಉನ್ನತಿ ಸಾಧಿಸಬೇಕು. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಆರೋಗ್ಯದ ಬಗ್ಗೆಯೂ ಗಮನಹರಿಸಬೇಕು. ಆರೋಗ್ಯವನ್ನು ಉತ್ತಮವಾಗಿ ಕಾಯ್ದುಕೊಂಡರೆ ಶೈಕ್ಷಣಿಕಚಟುವಟಿಕೆಗಳಲ್ಲಿ ಉತ್ತಮ ಸಾಧನೆ ತೋರಲು ಸಾಧ್ಯ ಎಂದು ಹೇಳಿದರು.

‘ಶಿಕ್ಷಣ ಸಮಾನತೆಯನ್ನು ಮೂಡಿಸುತ್ತದೆ. ನಾವೆಲ್ಲರೂ ಒಂದೇ ಎಂಬ ಭಾವನೆ ರೂಪಿಸುತ್ತದೆ. ಉತ್ತಮ ಶಿಕ್ಷಣದ ಪಡೆದು ಆ ಮೂಲಕ ಉನ್ನತ ಹುದ್ದೆ ಪಡೆಯಬಹುದು. ಇದರಿಂದ ಆರ್ಥಿಕ ಸಮಸ್ಯೆಗಳನ್ನೂಹೋಗಲಾಡಿಸಿಕೊಳ್ಳಬೇಕು’ ಎಂದರು.

ವಿದ್ಯಾರ್ಥಿಗಳು ಕಾಟಾಚಾರಕ್ಕೆ ಓದದೆ ಸಾಧನೆ ಮಾಡುವ ನಿಟ್ಟಿನಲ್ಲಿ ಆಲೋಚಿಸಿ ಮುನ್ನಡೆಯಬೇಕು. ವಿದ್ಯಾರ್ಥಿಗಳ ನಡೆ ಮುಂದಿನ ಪೀಳಿಗೆಗೆ ಪ್ರೇರಣೆಯೂ ಆಗಬೇಕು ಎಂದು ಸಲಹೆ ನೀಡಿದರು.

ಒಂದು ದೇಶದ ಶಿಕ್ಷಣದ ಗುಣಮಟ್ಟ, ಮಾನವ ಸಂಪನ್ಮೂಲ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟ ಆ ದೇಶದ ಪ್ರಗತಿಯನ್ನು ನಿರ್ಧರಿಸುತ್ತದೆ. ದೇಶದ ಬೆಳವಣಿಗೆಯ ದೃಷ್ಟಿಯಿಂದ ವಿದ್ಯಾರ್ಥಿಗಳು ಸಾಧನೆಯತ್ತ ಗಮನವಹಿಸಬೇಕು ಎಂದು ಹೇಳಿದರು.

ಡಿಡಿಪಿಐ ಜಯರಾಮ್‍ರೆಡ್ಡಿ, ಬಿಇಒ ಶೋಭಾ, ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಲಕ್ಷ್ಮಿನಾರಾಯಣ್, ಕಾಲೇಜಿನ ಸಿಬ್ಬಂದಿ ಹಾಗೂ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.