ADVERTISEMENT

ಮಳೆ ಹಾನಿ ಪ್ರದೇಶ‌ಕ್ಕೆ ಜಿಲ್ಲಾಧಿಕಾರಿ ಭೇಟಿ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2021, 4:09 IST
Last Updated 22 ಅಕ್ಟೋಬರ್ 2021, 4:09 IST
ಚಿಂತಾಮಣಿ ತಾಲ್ಲೂಕಿನ ಮಾಮಂಗಲದ ಬಳಿ ಮಳೆಯಿಂದ ಹಾಳಾಗಿರುವ ರಸ್ತೆಯನ್ನು ಜಿಲ್ಲಾಧಿಕಾರಿ ಆರ್. ಲತಾ ವೀಕ್ಷಿಸಿದರು. ತಹಶೀಲ್ದಾರ್ ಹನುಮಂತರಾಯಪ್ಪ ಹಾಜರಿದ್ದರು
ಚಿಂತಾಮಣಿ ತಾಲ್ಲೂಕಿನ ಮಾಮಂಗಲದ ಬಳಿ ಮಳೆಯಿಂದ ಹಾಳಾಗಿರುವ ರಸ್ತೆಯನ್ನು ಜಿಲ್ಲಾಧಿಕಾರಿ ಆರ್. ಲತಾ ವೀಕ್ಷಿಸಿದರು. ತಹಶೀಲ್ದಾರ್ ಹನುಮಂತರಾಯಪ್ಪ ಹಾಜರಿದ್ದರು   

ಚಿಂತಾಮಣಿ: ತಾಲ್ಲೂಕಿನಲ್ಲಿ ಇತ್ತೀಚೆಗೆ ಸುರಿದ ಬಾರಿ ಮಳೆಯಿಂದ ರಸ್ತೆ, ಸಂಪರ್ಕ ಸೇತುವೆ, ಕೆರೆ, ಕಟ್ಟೆಗಳಿಗೆ ಆಗಿರುವ ಹಾನಿ ಪ್ರದೇಶಗಳಿಗೆ ಬುಧವಾರ ಜಿಲ್ಲಾಧಿಕಾರಿ ಆರ್. ಲತಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಲ್ಲೂಕಿನ ಮುಂಗಾನಹಳ್ಳಿ ಹೋಬಳಿಯ ರಾಗುಟ್ಟಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್. ಗೊಲ್ಲಹಳ್ಳಿ-ಮಾದಮಂಗಲ ಗ್ರಾಮದ ಸಂಪರ್ಕ ಸೇತುವೆ ಸಂಪೂರ್ಣವಾಗಿ ಹಾಳಾಗಿದ್ದು ಸಾರ್ವಜನಿಕರಿಗೆ ತೊಂದರೆಯಾಗಿದೆ. ತಾತ್ಕಾಲಿಕ ರಸ್ತೆ ನಿರ್ಮಾಣ ಮಾಡಿರುವುದನ್ನು ವೀಕ್ಷಿಸಿದರು. ಸೇತುವೆಯನ್ನು ದುರಸ್ತಿಗೊಳಿಸಲು ಅಧಿಕಾರಿಗಳಿಗೆ ಆದೇಶ ನೀಡಿದರು.

ಚಿಲಕಲನೇರ್ಪು ಹೋಬಳಿಯ ಕದಿರೇಪಲ್ಲಿ-ಪಾಪತಿಮ್ಮನಹಳ್ಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಸಂಪೂರ್ಣ ಹಾಳಾಗಿರುವುದನ್ನು ಜಿಲ್ಲಾಧಿಕಾರಿ ಖುದ್ದು ಪರಿಶೀಲನೆ ನಡೆಸಿದರು. ಎರಡು ಗ್ರಾಮಗಳ ಜನರಿಗೆ ತೊಂದರೆಯಾಗದಂತೆ ತಾತ್ಕಾಲಿಕ ರಸ್ತೆ ನಿರ್ಮಿಸಬೇಕು. ನಂತರ ಶಾಶ್ವತ ಸೇತುವೆ ನಿರ್ಮಾಣ ಮಾಡಲು ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು.

ADVERTISEMENT

ತಾಲ್ಲೂಕಿನಲ್ಲಿ ಮಳೆಯಿಂದ ಹಾನಿಗೆ ಒಳಗಾಗಿರುವ ರಸ್ತೆ, ಸಂಪರ್ಕ ಸೇತುವೆ, ಕೆರೆ, ಕಟ್ಟೆಗಳ ಸಮೀಕ್ಷೆ ನಡೆಸಿ ಹಾನಿ ಹಾಗೂ ಆಗಿರುವ ನಷ್ಟದ ಬಗ್ಗೆ ಸಂಪೂರ್ಣ ವರದಿ ತಯಾರಿಸಿ, ಜಿಲ್ಲಾಡಳಿತ ಹಾಗೂ ಸರ್ಕಾರಕ್ಕೆ ಸಲ್ಲಿಸುವಂತೆ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕೃಷಿ, ತೋಟಗಾರಿಕೆ, ರೇಷ್ಮೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ತಾಲ್ಲೂಕಿನಲ್ಲಿ ಮಳೆಯಿಂದ ಆಗಿರುವ ಬೆಳೆ ನಾಶ ಹಾಗೂ ಹಾನಿ, ನಷ್ಟದ ಕುರಿತು ಅಂಕಿಅಂಶಗಳೊಂದಿಗೆ ಸಂಪೂರ್ಣ ಮಾಹಿತಿಯುಳ್ಳ ವರದಿಯನ್ನು ಶೀಘ್ರವಾಗಿ ಸಲ್ಲಿಸುವಂತೆ ಆಯಾ ಇಲಾಖೆಯ ಅಧಿಕಾರಿಗಳಿಗೆ ಆದೇಶ ನೀಡಿದರು.

ತಹಶೀಲ್ದಾರ್ ಹನುಮಂತರಾಯಪ್ಪ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.